ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಆಡಳಿತ ಅಧಿಕಾರಿಗಳು ನಗರದಲ್ಲಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಎರಡನೇ ದಿನ ಪೂರೈಸಿತು. ತಾಲೂಕು ಕಚೇರಿ ಬಳಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸುತ್ತಿರುವ ಅಧಿಕಾರಿಗಳು, ತಮ್ಮ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಘೋಷಣೆ ಕೂಗಿದರು.
ಸೌಲಭ್ಯವಿಲ್ಲದೆ ಹಲವು ವರ್ಷದಿಂದ ಸೇವೆ ಸಲ್ಲಿಸಲಾಗುತ್ತಿದೆ. ಈ ಬಗ್ಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತ ಕಚೇರಿ, ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ, ಅಲ್ಮೇರಾ, ಅತ್ಯುತ್ತಮ ಗುಣಮಟ್ಟದ ಮೊಬೈಲ್ ೆನ್, ಸಿಯುಜಿ ಸಿಮ್ ಮತ್ತು ಡೇಟಾ, ಗೂಗಲ್ ಕ್ರೋಮ್ ಬುಕ್/ಲ್ಯಾಪ್‌ಟಾಪ್, ಪ್ರಿಂಟರ್ ಮತ್ತು ಸ್ಕ್ಯಾನರ್ ಒದಗಿಸುವಂತೆ ಒತ್ತಾಯಿಸಿದರು.
ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನಶ್ರೇಣಿ ನಿಗದಿಪಡಿಸಿ ಆದೇಶ ನೀಡಬೇಕು. ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸೌಲಭ್ಯ ಕಲ್ಪಿಸಬೇಕು. ಅಂತರ್‌ಜಿಲ್ಲಾ ವರ್ಗಾವಣೆಯ ಕೆಸಿಎಸ್‌ಆರ್ ನಿಯಮ 16ಎರ ಉಪಖಂಡ (2)ನ್ನು ಮರುಸ್ಥಾಪಿಸಬೇಕು. ರಾಜ್ಯಾದ್ಯಂತ ಆಧಾರ್ ಸೀಡಿಂಗ್ ಪ್ರಕ್ರಿಯೆಯಲ್ಲಿ ಪತ್ತೆಯಾಗಿರುವ ಸುಮಾರು 51.5 ಲಕ್ಷ ಮೃತ ಖಾತೆದಾರರ ಪಹಣಿ ದಾಖಲೆಯನ್ನು ಅಭಿಯಾನದ ಮಾದರಿಯಲ್ಲಿ ವಾರಸುದಾರರ ಹೆಸರಿಗೆ ಪ್ರಮಾಣ ಪತ್ರ, ಮರಣ ಪ್ರಮಾಣ ಪತ್ರ ಮತ್ತು ಇತರೆ ದಾಖಲೆಗಳಿಲ್ಲದೆ ಪೌತಿ ಖಾತೆ ದಾಖಲಿಸುವಂತೆ ಇ-ಪೌತಿ ಖಾತಾ ಆಂದೋಲನ ಚಾಲನೆ ನೀಡುತ್ತಿರುವುದನ್ನು ಕೈಬಿಡುವಂತೆ ಆಗ್ರಹಿಸಿದರು.
ಚಿಕ್ಕಮಗಳೂರು ಜಿಲ್ಲೆಯಲ್ಲಿ 30 ಗ್ರಾಮ ಆಡಳಿತ ಅಧಿಕಾರಿಗಳ ವಾರ್ಷಿಕ ವೇತನ ಬಡ್ತಿಯನ್ನು ತಡೆದು ನೈಸರ್ಗಿಕ ನ್ಯಾಯ ತತ್ವಗಳನ್ನು ಹಾಗೂ ಎಲ್ಲಾ ನಿಯಮಗಳನ್ನು ಉಲ್ಲಂಸಿ ಹೊರಡಿಸಿರುವ ದಂಡನಾ ಆದೇಶವನ್ನು ಈ ಕೂಡಲೇ ಹಿಂಪಡೆಯಬೇಕು. ಕಂದಾಯ ಇಲಾಖೆ ಹಾಗೂ ಸರ್ಕಾರಿ ನೌಕರರ ಎಲ್ಲ ವೃಂದಗಳನ್ನು ಒಳಗೊಂಡಂತೆ ನೀಡುತ್ತಿರುವ ಅನುಕಂಪದ ನೇಮಕಾತಿ ಹುದ್ದೆಯ ವೃಂದ ಮತ್ತು ನೇಮಕಾತಿ ತಿದ್ದುಪಡಿ ಮಾಡಬೇಕು. ಕ್ಷೇತ್ರ ಮಟ್ಟದಲ್ಲಿ ಕರ್ತವ್ಯ ನಿರ್ವಹಿಸುವಾಗ ಜೀವಹಾನಿ ಆಗುವ ಗ್ರಾಮ ಆಡಳಿತ ಅಧಿಕಾರಿಗಳ ಕುಟುಂಬಕ್ಕೆ ತಲಾ 50 ಲಕ್ಷ ರೂ ಪರಿಹಾರ ಮಂಜೂರು ಮಾಡಬೇಕು. ಮಾತೃ ಇಲಾಖೆಯ ಎಲ್ಲ ಕೆಲಸಗಳೊಂದಿಗೆ ಸರ್ಕಾರದ ಆದೇಶದಂತೆ ಇತರೆ ಇಲಾಖೆಯ ಹಲವಾರು ಕೆಲಸಗಳನ್ನು ನಿರ್ವಹಿಸುವ ಹಾಗೂ ಚುನಾವಣೆ, ಅತಿವೃಷ್ಠಿ, ಅನಾವೃಷ್ಠಿ ಇನ್ನಿತರ ಗುರುತರವಾದ ಜವಾಬ್ದಾರಿಯುತ ಕರ್ತವ್ಯ ನಿರ್ವಹಿಸುತ್ತಿರುವ ನಮಗೆ ದಿನನಿತ್ಯ ಸಾರ್ವಜನಿಕ ವಲಯದಲ್ಲಿ ನೂರಾರು ಸೇವೆಗಳನ್ನು ನೀಡುವಾಗ ಮಾರಣಾಂತಿಕ ದೈಹಿಕ ಹಲ್ಲೆ, ಕೊಲೆ ಪ್ರಕರಣಗಳು ಈಗಾಗಲೇ ನಿರಂತರವಾಗಿ ನಡೆಯುತ್ತಿದೆ. ಆದ್ದರಿಂದ ಅರಣ್ಯ ಹಾಗೂ ಪೊಲೀಸ್ ಇಲಾಖೆಯಲ್ಲಿರುವಂತೆ 3 ಸಾವಿರ ರೂ.ಗಳ ಆಪತ್ತಿನ ಭತ್ಯೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ರಾಜ್ಯ ಪರಿಷತ್ ಸದಸ್ಯ ರಾಜು, ಜಿಲ್ಲಾಧ್ಯಕ್ಷ ಹರೀಶ್, ಪ್ರಧಾನ ಕಾರ್ಯದರ್ಶಿ ಗುಣಶೇಖರ್, ತಾಲೂಕು ಅಧ್ಯಕ್ಷ ಕುಮಾರ್, ಉಪಾಧ್ಯಕ್ಷರಾದ ಸಿದ್ದಪ್ಪ, ಮನುಜಾ, ಎನ್‌ಜಿಒ ಸದಸ್ಯ ಚರಣ್, ಕಾರ್ಯದರ್ಶಿ ಮಾನಸಾ, ಪುನೀತ್ ಕೃಷ್ಣೇಗೌಡ ಇತರರಿದ್ದರು.