ಚಿಕ್ಕಮಗಳೂರಿನ ಪ್ರವಾಸಿ ಮಂದಿರದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ವಿಶ್ವಕರ್ಮ ಯೋಜನೆ ಅನುಷ್ಠಾನಕುರಿತಂತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಿ.ಟಿ.ರವಿ, ಎಚ್.ಸಿ.ಪ್ರಶಾಂತ್, ಚಂದ್ರಶೇಖರ್, ಸುರೇಶ್ ಉಪಸ್ಥಿತರಿದ್ದರು. 
ಜಿಲ್ಲೆ

ಕರಕುಶಲಕರ್ಮಿಗಳ ಕೈ ಬಲಪಡಿಸಲು ವಿಶ್ವಕರ್ಮ ಯೋಜನೆ

ಚಿಕ್ಕಮಗಳೂರು: ಕರಕುಶಲ ಮತ್ತು ಕುಶಲಕರ್ಮಿಗಳ ಕೈ ಬಲಪಡಿಸುವಲ್ಲಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಪಾತ್ರ ಮಹತ್ವದಾಗಿದೆ. ಈ ಯೋಜನೆಯಡಿಯಲ್ಲಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಟೂಲ್ ಕಿಟ್‌ಗಳನ್ನು ಒದಗಿಸಿ ಅರ್ಹರಿಗೆ ಸಾಲ ಮಂಜೂರು ಮಾಡಲು ಅಗತ್ಯ ಕ್ರಮ ವಹಿಸಿ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ನಗರದ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಶನಿವಾರ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದ ಅವರು, ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿನ ಕರಕುಶಲ ಮತ್ತು ಕುಶಲ ಕರ್ಮಿಗಳನ್ನು ಆರ್ಥಿಕವಾಗಿ ಬಲಪಡಿಸಬೇಕು ಎಂದು ಹೇಳಿದರು.
ಕರಕುಶಲಕರ್ಮಿಗಳು ಸ್ವ ಉದ್ಯೋಗ ಕೈಗೊಳ್ಳಲು ಪ್ರೋತ್ಸಾಹ ನೀಡಬೇಕು. ಆಗ ಅವರ ಜೊತೆಗೆ ಅವರೇ ನಾಲ್ಕಾರು ಜನಕ್ಕೆ ಕೆಲಸ ನೀಡುತ್ತಾರೆ. ಇದರಿಂದ ನಿರುದ್ಯೋಗ ಸಮಸ್ಯೆಯೂ ಪರಿಹಾರವಾಗಲಿದೆ. ಈ ಯೋಜನೆಯ ಫಲವನ್ನು ಪ್ರತಿಯೊಬ್ಬ ಅರ್ಹರೂ ಪಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿಶ್ವಕರ್ಮ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿದ ಬಡಗಿಗಳು, ಶಿಲ್ಪಿಗಳು, ಕಮ್ಮಾರರು, ಮರಗೆಲಸಗಾರರು, ಕುಂಬಾರಿಕೆ, ಮಾಲಾಕಾರರು, ಮೇಸ್ತಿçಗಳು ಸೇರಿದಂತೆ ವಿವಿಧ ಕುಶಲಕರ್ಮಿಗಳಿಗೆ ಗುಣಮಟ್ಟದ ತರಬೇತಿ ನೀಡಬೇಕು. ತರಬೇತಿ ಸಮಯದಲ್ಲಿ ದಿನಕ್ಕೆ ೫೦೦ ರೂ.ನಂತೆ ಸ್ಟೇ ಪಂಡ್ ಹಾಗೂ ತರಬೇತಿ ನಂತರದಲ್ಲಿ ೧೫ ಸಾವಿರ ರೂ. ಗಳ ಉಚಿತ ಟೂಲ್ ಕಿಟ್‌ಗಳನ್ನು ಒದಗಿಸಬೇಕು. ಸಾಲದ ಅವಶ್ಯಕತೆ ಇರುವ ಅರ್ಹ ಅಭ್ಯರ್ಥಿಗಳಿಗೆ ಸಾಲ ಮಂಜೂರು ಮಾಡಿ ಅವರ ಸ್ವ ಉದ್ಯೋಗಕ್ಕೆ ಪ್ರೋತ್ಸಾಹ ನೀಡಬೇಕು. ಜಿಲ್ಲೆಯಲ್ಲಿ ಇನ್ನೂ ಒಂದು ವಾರದೊಳಗಾಗಿ ತರಬೇತಿ ಕೇಂದ್ರಗಳನ್ನು ತೆರೆಯಲು ಅಗತ್ಯ ಕ್ರಮವಹಿಸಬೇಕು. ಈಗಾಗಲೇ ತರಬೇತಿ ಪಡೆದಿರುವ ಅಭ್ಯರ್ಥಿಗಳಿಗೆ ಶೀಘ್ರವಾಗಿ ಟೂಲ್ ಕಿಟ್‌ಗಳನ್ನು ನೀಡಬೇಕು ಎಂದು ತಿಳಿಸಿದರು.
ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಎಚ್.ಸಿ.ಪ್ರಶಾಂತ್ ಮಾತನಾಡಿ, ಜಿಲ್ಲೆಯಲ್ಲಿ ವಿಶ್ವಕರ್ಮ ಯೋಜನೆಯಡಿ ಒಟ್ಟು ೪೩,೬೯೭ ಅರ್ಜಿಗಳು ಸ್ವೀಕೃತವಾಗಿವೆ. ಇವುಗಳಲ್ಲಿ ೫,೮೯೬ ಅರ್ಜಿಗಳು ಅನುಮೋದನೆಗೊಂಡಿದ್ದು, ಇವುಗಳಲ್ಲಿ ೨,೧೮೬ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗಿದೆ ಹಾಗೂ ೧೬೩ ಅಭ್ಯರ್ಥಿಗಳಿಗೆ ಯೋಜನೆಯಡಿಯಲ್ಲಿ ಸಾಲ ಮಂಜೂರು ಮಾಡಲಾಗಿದೆ. ಜಿಲ್ಲೆಯಲ್ಲಿ ೧೧ ತರಬೇತಿ ಕೇಂದ್ರವನ್ನು ತೆರೆಯಲು ಸ್ಥಳ ಗುರುತಿಸಿ ಕ್ರಮ ವಹಿಸಲಾಗಿದೆ. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಗುಣಮಟ್ಟದ ತರಬೇತಿ ನೀಡಲಾಗುವುದು ಎಂದರು.
ಸಭೆಯಲ್ಲಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಚಂದ್ರಶೇಖರ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಸುರೇಶ್ ಮತ್ತಿತರರಿದ್ದರು.