ಮೈಸೂರು: ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಹಾಗೂ ಶ್ರೀ ಸಿದ್ಧಗಂಗಾ ಮಠದ ಪೀಠಾಧಿಪತಿಗಳಾಗಿದ್ದ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿ ಅವರುಗಳಿಗೆ ಮರಣೋತ್ತರ ಭಾರತರತ್ನ ಪ್ರಶಸ್ತಿ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಆಗ್ರಹಿಸಿದರು.
ದೇವರಾಜ ಅರಸು ಹಾಗೂ ಶ್ರೀ ಶಿವಕುಮಾರ ಸ್ವಾಮೀಜಿಗೆ ಮರಣೋತ್ತರ ಭಾರತ್ನ ಪ್ರಶಸ್ತಿ ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸಬೇಕು. ರಾಜ್ಯದ ಮುಖ್ಯಮಂತ್ರಿ, ಶಾಸಕರು, ಸಂಸದರು ಈ ವಿಚಾರದಲ್ಲಿ ಧ್ವನಿ ಎತ್ತಬೇಕು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ಸಹಕಾರಿ ಕ್ಷೇತ್ರದಲ್ಲಿ ಮೀಸಲಾತಿ ಜಾರಿಯಾಗಬೇಕು. ನಾನು ಸಹಕಾರ ಸಚಿವನಾಗಿದ್ದಾಗ ಈ ಬಗ್ಗೆ ಪ್ರಯತ್ನ ಮಾಡಿದ್ದೆ. ಈಗ ಸಹಕಾರಿ ಕ್ಷೇತ್ರದಲ್ಲಿ ಮೀಸಲಾತಿ ಜಾರಿಗೆ ಸರ್ಕಾರ ಮುಂದಾಗಿದೆ. ಇದಕ್ಕೆ ಶಾಸಕ ಜಿ.ಟಿ. ದೇವೇಗೌಡ ವಿರೋಧಿಸುತ್ತಿರುವುದು ಸರಿಯಲ್ಲ. ಅವರ ಪತ್ನಿ ಲಲಿತಾ ರಾಜ್ಯ ಮಹಿಳಾ ಸಹಕಾರಿ ಬ್ಯಾಂಕ್ ಅಧ್ಯಕ್ಷೆ, ಮಗ ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ. ಮೀಸಲಾತಿ ಜಾರಿಗೆ ವಿರೋಧಿಸುತ್ತಿರುವ ಜಿ.ಟಿ ದೇವೇಗೌಡರೇ ನೀವು ಕೇವಲ ಒಂದು ಸಮುದಾಯದ ಬೆಂಬಲದಿಂದ ಗೆದ್ದಿದ್ದೀರಾ? ಬೇರೆ ಸಮುದಾಯಗಳ ಋಣದಲ್ಲಿ ನೀವು ಇಲ್ಲವೇ ಎಂದು ಪ್ರಶ್ನಿಸಿದರು.