ಜಿಲ್ಲೆ

ರಾಜ್ಯದ ಅಭಿವೃದ್ಧಿಗಿಂತ ವೋಟ್ ಬ್ಯಾಂಕ್ ರಾಜಕಾರಣ

ಇಂದಿರಾ ಎನ್ ಕೆ

ಕುಂದಾಪುರ: ರಾಜ್ಯದ ಅಭಿವೃದ್ಧಿಗಿಂತ ವೋಟ್ ಬ್ಯಾಂಕ್ ರಾಜಕಾರಣವೇ ಮೇಲು ಎಂಬುದು ಮತ್ತೊಮ್ಮೆ ಸಾಬೀತುಪಡಿಸಿದ ಕಾಂಗ್ರೆಸ್ ಸರ್ಕಾರ, ಮುಸಲ್ಮಾನರಿಗೆ ಗುತ್ತಿಗೆಯಲ್ಲೂ ಶೇ.4ರಷ್ಟು ಮೀಸಲಾತಿ ಕೊಡುವ ಮೂಲಕ ಜಾತಿ ಧರ್ಮಗಳ ಮಧ್ಯ ಬಿರುಕು ಮೂಡಿಸುತ್ತಿದೆ. ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂಬ ಸಂವಿಧಾನ ವಿರೋಧಿ ಹೇಳಿಕೆ ನೀಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡೆ ಖಂಡನೀಯ ಎಂದು ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ನೇತೃತ್ವದಲ್ಲಿ ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆ ವಿರುದ್ಧ ಕುಂದಾಪುರ ಶಾಸ್ತ್ರಿ ವೃತ್ತದ ಬಳಿ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.

ಬಿಜೆಪಿ ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ, ನಿಕಟ ಪೂರ್ವ ಅಧ್ಯಕ್ಷ ಶಂಕರ ಅಂಕದಕಟ್ಟೆ ಮಾತನಾಡಿದರು. ಬಿಜೆಪಿ ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ.ಎಸ್., ಕುಂದಾಪುರ ಪುರಸಭಾ ಅಧ್ಯಕ್ಷ ಮೋಹನದಾಸ ಶೆಣೈ, ಉಪಾದ್ಯಕ್ಷೆ ವನಿತಾ ಬಿಲ್ಲವ, ಕುಂದಾಪುರ ಮಂಡಲ ಉಪಾಧ್ಯಕ್ಷರು, ಮಂಡಲದ ಪದಾಧಿಕಾರಿಗಳು, ವಿವಿಧ ಮೋರ್ಚಾ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಸದಸ್ಯರು, ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು. ಡಿ.ಕೆ.ಶಿವಕುಮಾರ್ ಅವರಿಗೆ ಧಿಕ್ಕಾರದ ಘೋಷಣೆ ಕೂಗಿ ಡಿ.ಕೆ.ಶಿವಕುಮಾರ್ ಪ್ರತಿಕೃತಿ ದಹಿಸಲಾಯಿತು.