ಚಿಕ್ಕಮಗಳೂರು ತಹಸೀಲ್ದಾರ್ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆಯೋಜಿಸಲಾಗಿದ್ದ ಮತದಾನ ಜಾಗೃತಿ ಜಾಥಕ್ಕೆ ಡಿಸಿ ಮೀನಾನಾಗರಾಜ್ ಡೋಲು ಬಾರಿಸುವ ಮೂಲಕ ಚಾಲನೆ ನೀಡಿದರು. ಜಿಪಂ ಸಿಇಒ ಡಾ.ಗೋಪಾಲಕೃಷ್ಣ, ಡಿಎಚ್‌ಒ ಡಾ.ಅಶ್ವಥ್‌ಬಾಬು ಉಪಸ್ಥಿತರಿದ್ದರು. 
ಜಿಲ್ಲೆ

ದೇಶದ ಆರೋಗ್ಯಕ್ಕಾಗಿ ಮತದಾನ ಮಾಡಿ

ಚಿಕ್ಕಮಗಳೂರು: ದೇಹದ ಆರೋಗ್ಯ ನಮಗೆ ಎಷ್ಟು ಮುಖ್ಯವೋ ಅದೇ ರೀತಿ ದೇಶದ ಆರೋಗ್ಯಕರ ಭವಿಷ್ಯಕ್ಕಾಗಿ ಪ್ರತಿಯೊಬ್ಬ ಅರ್ಹ ಮತದಾರರು ಮತದಾನ ಮಾಡಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು.

ನಗರದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆಯೋಜಿಸಲಾಗಿದ್ದ ಮತದಾನ ಜಾಗೃತಿ ಜಾಥಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಎಂಬುವುದು ಪ್ರಜೆಗಳಿಗೆ ನೀಡಿರುವ ಹಕ್ಕು. ಜಿಲ್ಲೆಯಲ್ಲಿ ಕಳೆದ ಚುನಾವಣೆಯಲ್ಲಿ ಶೇ. ೭೮ರಷ್ಟು ಮತದಾನವಾಗಿತ್ತು. ಈ ಬಾರಿಯ ಚುನಾವಣೆಯಲ್ಲಿ ಎಲ್ಲರೂ ತಪ್ಪದೆ ಕಡ್ಡಾಯವಾಗಿ ಹಾಗೂ ನೈತಿಕ ಮತದಾನ ಮಾಡುವ ಮೂಲಕ ಈ ಪ್ರಮಾಣವನ್ನು ಶೇ. ೯೦ಕ್ಕೆ ಏರಿಸಬೇಕು ಎಂದು ಕರೆ ನೀಡಿದರು.
ಏ. ೨೬ರಂದು ನಡೆಯಲಿರುವ ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಅರ್ಹ ಮತದಾರರು ಮತದಾನ ಕೇಂದ್ರಕ್ಕೆ ತೆರಳಿ ಮತ ಚಲಾಯಿಸಬೇಕು. ಈ ಬಾರಿ ಮತದಾನದ ಪ್ರಮಾಣ ಹೆಚ್ಚಳ ಮಾಡುವ ಉz್ದೆÃಶದಿಂದ ಜಿಲ್ಲಾ ಸ್ವೀಪ್ ಸಮಿತಿಯಿಂದ ಮತದಾನದ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಮತದಾನವನ್ನು ಏಕೆ ಮಾಡಬೇಕು, ಯಾವ ರೀತಿ ಮಾಡಬೇಕು ಎಂಬ ಬಗ್ಗೆ ಅರಿವು ಮೂಡಿಸುವುದು ಇದರ ಉz್ದÉÃಶವಾಗಿದೆ ಎಂದು ಮಾಹಿತಿ ನೀಡಿದರು.
ಜಿಪಂ ಸಿಇಒ ಡಾ. ಬಿ.ಗೋಪಾಲಕೃಷ್ಣ ಮಾತನಾಡಿ, ಮತದಾನ ಎಂಬುದು ಸಂವಿಧಾನ ಎಲ್ಲ ಪ್ರಜೆಗಳಿಗೂ ನೀಡಿರುವ ಮಹತ್ವವಾದ ಹಕ್ಕು. ಪ್ರತಿಯೊಬ್ಬರು ಏ. ೨೬ರಂದು ನಡೆಯಲಿರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಮತಗಟ್ಟೆಗಳಿಗೆ ತೆರಳಿ ಕಡ್ಡಾಯವಾಗಿ ತಮ್ಮ ಹಕ್ಕು ಚಲಾಯಿಸಬೇಕು. ಪ್ರತಿಯೊಂದು ಮತಗಟ್ಟೆಗಳಲ್ಲಿ ಮತದಾರರಿಗೆ ಕುಡಿಯುವ ನೀರು, ನೆರಳಿನ ವ್ಯವಸ್ಥೆ, ಅಂಗವಿಕಲರಿಗೆ ರ‍್ಯಾಂಪ್ ವ್ಯವಸ್ಥೆ, ಶೌಚಗೃಹ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಚುನಾವಣೆ ಎಂಬುದು ಪ್ರಜಾಪ್ರಭುತ್ವದ ಹಬ್ಬವಾಗಿದ್ದು ಮತದಾನದಲ್ಲಿ ಭಾಗವಹಿಸುವ ಮೂಲಕ ನಮ್ಮ ಜಿಲ್ಲೆಯಲ್ಲಿ ಶೇಕಡವಾರು ಮತದಾನ ಪ್ರಮಾಣ ಹೆಚ್ಚಳಕ್ಕೆ ಸಹಕರಿಸಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಥ್ ಬಾಬು ಮಾತನಾಡಿ, ಮತದಾನದ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜಾಥ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಳೆದ ಚುನಾವಣೆಯಲ್ಲಿ ನಗರ ಪ್ರದೇಶದಲ್ಲಿ ಗ್ರಾಮೀಣ ಪ್ರದೇಶಕ್ಕಿಂತ ಕಡಿಮೆ ಮತದಾನವಾಗಿತ್ತು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ಮತದಾನ ಕೇಂದ್ರಕ್ಕೆ ತೆರಳಿ ತಪ್ಪದೇ ಮತದಾನ ಮಾಡುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಮತದಾನದ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಜಾಥದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.