ಹಾಸನ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಸೈಕಲ್ ಜಾಥಾಗೆ ಜಿಲ್ಲಾಧಿಕಾರಿ ಹಸಿರು ನಿಶಾನೆ ತೋರಿದರು.
ಜಿಲ್ಲಾಧಿಕಾರಿ ಲತಾಕುಮಾರಿ ಅವರು ಸ್ವತಃ ಸೈಕಲ್ ಚಲಾಯಿಸುವ ಮೂಲಕ ನಗರದಲ್ಲಿ ಸಂಚರಿಸಿ ನನ್ನ ಮತ ನನ್ನ ಹಕ್ಕು ಎಂಬುದರ ಕುರಿತು ಜಾಗೃತಿ ಮೂಡಿಸಿದರು.
ಜಾಥಾಗೆ ಚಾಲನೆ ನೀಡಿ ಮಾತನಾಡಿದ ಡಿಸಿ, ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ಇರುವ ಪ್ರಜಾಪ್ರಭುತ್ವವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಮತ ಚಲಾಯಿಸಬೇಕು ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಆರ್.ಪೂರ್ಣಿಮಾ ಮಾತನಾಡಿ, ದೇಶವನ್ನು ಅಭಿವೃದ್ಧಿ ರಾಷ್ಟ್ರವನ್ನಾಗಿ ಮುನ್ನಡೆಸಲು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತ ಚಲಾಯಿಸಬೇಕು ಎಂದು ತಿಳಿಸಿದರು.
ಇದಕ್ಕೂ ಮುನ್ನ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ದೂದ್ ಫಿರ್ ಇತರರು ಇದ್ದರು.
ಜಿಲ್ಲಾಧಿಕಾರಿ ಕಚೇರಿಯಿಂದ ಪ್ರಾರಂಭಗೊಂಡ ಸೈಕಲ್ ಜಾಥಾ ಎನ್.ಆರ್.ಸರ್ಕಲ್, ಹೇಮಾವತಿ ಪ್ರತಿಮೆ, ಕಲಾ ಭವನದ ಮೂಲಕ ಸಾಲಗಾಮೆ ರಸ್ತೆ ಮಾರ್ಗವಾಗಿ ವಿಜ್ಞಾನ ಕಾಲೇಜು ಬಳಿಯಿಂದ ಆರ್.ಸಿ.ರಸ್ತೆ ಮೂಲಕ ಸಾಗಿ ಗಂಧದಕೋಠಿ ಸರ್ಕಲ್‌ನಿಂದ ಅಂಬೇಡ್ಕರ್ ಭವನದಲ್ಲಿ ಸಮಾಪ್ತಿಯಾಯಿತು.