ಬಳ್ಳಾರಿ :ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ 11ನೇ ಘಟಿಕೋತ್ಸವ ಕಾರ್ಯಕ್ರಮ ಜು. 13 ರಂದು ಬೆಳಗ್ಗೆ 10ಕ್ಕೆ ವಿಶ್ವ ವಿದ್ಯಾಲಯದ ಬಯಲು ರಂಗಮಂದಿರದ ಆವರಣದಲ್ಲಿ ನಡೆಯಲಿದೆ. ಘಟಿಕೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮೂರು ಜನ ಮಹನೀಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ ಎಂದು ಕುಲಪತಿ ಪ್ರೊ.ಸಿದ್ದು ಪಿ.ಅಲಗೂರ ತಿಳಿಸಿದರು.
ಇಲ್ಲಿನ ವಿಶ್ವ ವಿದ್ಯಾಲಯದ ಅಂಬೇಡ್ಕರ್ ಸಭಾಂಗಣದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ನವದೆಹಲಿಯ ಇಂಡಿಯನ್ ಕೌನ್ಸಿಲ್ ಆಫ್ ಸೋಶಿಯಲ್ ಸೈನ್ಸ್ ರಿಸರ್ಚ್ ಅಧ್ಯಕ್ಷ ಡಾ.ಜೆ.ಕೆ.ಬಜಾಜ್ ಅವರು ಪ್ರಧಾನ ಭಾಷಣ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದರು.
- 53 ಚಿನ್ನದ ಪದಕ ಪ್ರದಾನ
ಈ ಬಾರಿಯ ಘಟಿಕೋತ್ಸವದಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ವಿವಿಧ ವಿಭಾಗಗಳ 42 ವಿದ್ಯಾರ್ಥಿಗಳು 53 ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಳ್ಳಲಿದ್ದಾರೆ. ವಿವಿಧ ವಿಭಾಗಗಳ ಒಟ್ಟು 32 ಸಂಶೋಧನಾರ್ಥಿಗಳು ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ. ಎಲ್ಲ ವಿಭಾಗಗಳ ಸ್ನಾತಕ ಪದವಿಯ 51 ವಿದ್ಯಾರ್ಥಿಗಳು ಮತ್ತು ಸ್ನಾತಕೋತ್ತರ ಪದವಿಯಿಂದ 72 ಒಟ್ಟು 123 ವಿದ್ಯಾರ್ಥಿಗಳು ರ‌್ಯಾಂಕ್ ಪ್ರಮಾಣ ಪತ್ರಗಳನ್ನು ಪಡೆಯಲಿದ್ದಾರೆ. ಸ್ನಾತಕ ಪದವಿಯಲ್ಲಿ ಒಟ್ಟು 12,423 ಸ್ನಾತಕ ಪದವಿ ವಿದ್ಯಾರ್ಥಿಗಳು ಅಂತಿಮ ಪರೀಕ್ಷೆ ಬರೆದು ತಮ್ಮ ಪದವಿಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಸ್ನಾತಕೋತ್ತರ ಪದವಿಯಲ್ಲಿ ಒಟ್ಟು 1,712ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ಉತ್ತೀರ್ಣರಾಗಿದ್ದಾರೆ. ಮೂವರು ತಲಾ 3 ಹಾಗೂ ಐವರು ವಿದ್ಯಾರ್ಥಿಗಳು ತಲಾ ಎರಡು ಚಿನ್ನದ ಪದಕ ಪಡೆಯಲಿದ್ದಾರೆ ಎಂದು ತಿಳಿಸಿದರು.
- ಮೂವರಿಗೆ ಗೌರವ ಡಾಕ್ಟರೇಟ್
ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತಿದೆ. ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ರಾಯಚೂರು ಜಿಲ್ಲೆಯ ಕವಿತಾಳದ ಕವಿತಾ ಮಿಶ್ರಾ, ಸಮಾಜ ಸೇವಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಡಿ.ಹಿರೇಹಾಳ್ ಗ್ರಾಮದ ಡಿ.ಹಿರೇಹಾಳ್ ಇಬ್ರಾಹಿಂ (ಮರಣೋತ್ತರ) ಮತ್ತು ಸಂಗೀತ ಕ್ಷೇತ್ರದಲ್ಲಿ ಅನನ್ಯ ಸಾಧನೆ ಮಾಡಿದ ಬಳ್ಳಾರಿ ಜಿಲ್ಲೆಯವರಾದ ಹಿಂದೂಸ್ತಾನಿ ಗಾಯಕ ಎಂ.ವೆಂಕಟೇಶ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.