ಜಿಲ್ಲೆ

'ಹಗರಣಗಳ ಜಾಗೃತಿಗೆ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ'

ಮೈಸೂರು: ಕಾಂಗ್ರೆಸ್ ಆಡಳಿತದಲ್ಲಿ ನಡೆದಿರುವ ಹಗರಣಗಳ ಕುರಿತು ಜಾಗೃತಿ ಮೂಡಿಸಲು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿರುವುದಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್‌ಬಾಬು ಹೇಳಿದರು.
ಪಾದಯಾತ್ರೆ ಸಂಬಂಧ ನಗರದಲ್ಲಿ ಜೆಡಿಎಸ್‌ನಿಂದ ಶನಿವಾರ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯದ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲ ಇಲಾಖೆಗಳಲ್ಲಿ ಪೈಪೋಟಿಯಲ್ಲಿ ಹಗರಣ ನಡೆಯುತ್ತಿದೆ. ಇದನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಈ ಬಗ್ಗೆ ಪಾದಯಾತ್ರೆ ಹಮ್ಮಿಕೊಂಡಿದ್ದು, ಶೀಘ್ರವೇ ದಿನಾಂಕ ನಿಗದಿ ಪಡಿಸಲಾಗುವುದು ಎಂದು ಹೇಳಿದರು.
ಪರಿಶಿಷ್ಟ ವರ್ಗದವರಿಗಾಗಿ ಇರುವ ವಾಲ್ಮೀಕಿ ನಿಗಮ, ಮುಡಾ ಸೇರಿದಂತೆ ಹಲವು ಇಲಾಖೆಗಳಲ್ಲಿ ಅವ್ಯವಹಾರ ನಡೆದಿದೆ. ವಾಲ್ಮೀಕಿ ನಿಗಮದ ಹಗರಣದ ಕುರಿತಂತೆ ಸದನದಲ್ಲಿ ಚರ್ಚೆ ನಡೆಯಿತು. 87 ಕೋಟಿ ರೂ.ಹಗರಣ ಆಗಿರುವ ಬಗ್ಗೆ ಮುಖ್ಯಮಂತ್ರಿಗಳೇ ಒಪ್ಪಿಕೊಂಡಿದ್ದು, ವಾಲ್ಮೀಕಿ ಹಗರಣವನ್ನು ಚುನಾವಣೆಗೆ ಉಪಯೋಗಿಸಿಕೊಂಡಿದ್ದಾರೆ ಎಂದು ದೂರಿದರು.
ರಾಜ್ಯದಲ್ಲಿ ಲೂಟಿ ಮಾಡಿರುವ ಹಣದಲ್ಲಿ ಬೇರೆ, ಬೇರೆ ರಾಜ್ಯಗಳಲ್ಲಿ ಲೋಕಸಭಾ ಚುನಾವಣೆಗಳಲ್ಲಿ ಬಳಸಿಕೊಳ್ಳಲಾಗಿದೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಕುಟುಂಬದವರು ಭಾಗಿಯಾಗಿದ್ದು, ಈ ಬಗ್ಗೆ ಕಾನೂನು ಹೋರಾಟ ಮಾಡುತ್ತೇವೆ. ಹಗರಣದಲ್ಲಿ ಭಾಗಿಯಾದವರಿಗೆ ಕಾನೂನು ಮೂಲಕ ಶಿಕ್ಷೆ ಕೊಡಿಸಬೇಕು ಎಂದು ಆಗ್ರಹಿಸಿದರು.
ಜೆಡಿಎಸ್ ಕತೆ ಮುಗಿಯಿತು ಎಂದು ಸಾಕಷ್ಟು ಜನರು ಟೀಕೆ ಮಾಡಿದ್ದರು. ಆದರೆ ಮೈಸೂರು ಭಾಗದಲ್ಲಿ ಜೆಡಿಎಸ್ ಪ್ರಾಬಲ್ಯವಿದ್ದು, ಮಂಡ್ಯದ ಜನರು ಕುಮಾರಸ್ವಾಮಿ ಅವರನ್ನು ಗೆಲ್ಲಿಸಿದ ಕಾರಣ ಇಂಡಿಯಾದಲ್ಲಿ ಒಳ್ಳೆಯ ಹೆಸರು ಸಿಕ್ಕಿದೆ ಎಂದರು.
ಸಿಕ್ಕ ಅವಕಾಶ ಉಪಯೋಗಿಸಿಕೊಂಡು ದೇಶಕ್ಕೆ ಗೌರವ ತರುವ ನಿಟ್ಟಿನಲ್ಲಿ ಎಚ್.ಡಿ.ಕುಮಾರಸ್ವಾಮಿ ಕೆಲಸ ಮಾಡುತ್ತಿದ್ದಾರೆ. ಅದರಂತೆ ನಿಖಿಲ್ ಕುಮಾರಸ್ವಾಮಿ ಅವರು 24 ಗಂಟೆ ಕೆಲಸ ಮಾಡುವ ಮೂಲಕ ಪಕ್ಷ ಸಂಘಟನೆ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ರಾಜ್ಯದ 224 ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡಬೇಕಿದ್ದು, ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 11 ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಜೆಡಿಎಸ್ ಸಹಾಯದಿಂದ ಗೆದಿದ್ದಾರೆ. ಹೀಗಾಗಿ ಜೆಡಿಎಸ್ ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದರು.
ರಾಜ್ಯ ಪ್ರವಾಸ ಮಾಡುತ್ತೇನೆ:
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ಪಕ್ಷ ಸಂಘಟನೆ ಮಾಡುವ ಉದ್ದೇಶದಿಂದ ಆಷಾಢದ ಬಳಿಕ ರಾಜ್ಯಾದ್ಯಂತ ಪ್ರವಾಸ ಮಾಡುವುದಾಗಿ ಹೇಳಿದರು.
ನಮ್ಮ ಪಕ್ಷದ ಕಾರ್ಯಕರ್ತರು ವಿಧಾನಸಭಾ ಚುನಾವಣೆಯಲ್ಲಿಯೇ ಒಂದಾಗಿ ನಿರ್ಧಾರ ತೆಗೆದುಕೊಂಡಿದ್ದರೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಧಿಕಾರದಲ್ಲಿ ಇರುತ್ತಿತ್ತು. ಆದರೂ ಕಾಲ ಮಿಂಚಿಲ್ಲ, ಮುಂದೆ ಪಕ್ಷ ಸಂಘಟನೆ ಮಾಡೋಣ ಎಂದರು.
ಪಕ್ಷದಲ್ಲಿ ಯುವಕರಿಗೆ ಅವಕಾಶ ಕೊಡಬೇಕೆಂಬ ಆಶಯದಲ್ಲಿ ನನಗೆ ಟಿಕೆಟ್ ನೀಡಲಾಗಿತ್ತು. ಆದರೆ ಕೆಲವು ರಾಜಕೀಯ ಷಡ್ಯಂತ್ರಕ್ಕೆ ಬಲಿಯಾಗಿದ್ದು, ಈ ಕುರಿತಾಗಿ ನಾನು ಮಾತನಾಡುವುದಿಲ್ಲ. ಮಂಡ್ಯ ಜನತೆಯ ಆಶೀರ್ವಾದರಿಂದ ಸದ್ಯ ಜೆಡಿಎಸ್‌ಗೆ ಹೊಸ ಹುರುಪು ಬಂದಿದ್ದು, ಹಿರಿಯ ನಾಯಕರ ಸಲಹೆ, ವಿಶ್ವಾಸಕ್ಕೆ ತೆಗೆದುಕೊಂಡು ಪ್ರವಾಸ ಮಾಡುತ್ತೇನೆ ಎಂದರು.
ವಿಧಾನಸೌಧದಲ್ಲಿ ಕುಮಾರಸ್ವಾಮಿ ಅವರ ಅನುಪಸ್ಥಿತಿ ಕಾಡುತ್ತಿದ್ದು, ಅದನ್ನು ಇರುವ 18 ಶಾಸಕರು ಸರಿದೂಗಿಸಬೇಕು. ಗ್ಯಾರಂಟಿ ಯೋಜನೆಗಾಗಿ ದಲಿತರಿಗೆ ಮೀಸಲಾದ ಹಣವನ್ನು ಉಪಯೋಗಿಸಿಕೊಂಡಿರುವ ಸರ್ಕಾರ, ಡೆಂಘಿ ನಿಯಂತ್ರಿಸಲು ವಿಫಲವಾಗಿದೆ. ಬಿಜೆಪಿ ಸರ್ಕಾರ ಶೇ.40 ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಕಾಂಗ್ರೆಸ್, ಯಾವ ಶಾಸಕರಿಗೂ ಅನುದಾನ ಕೊಡುತ್ತಿಲ್ಲ ಎಂದು ದೂರಿದರು.
ಶಾಸಕ ಜಿ.ಡಿ. ಹರೀಶ್‌ಗೌಡ ಮಾತನಾಡಿ, ಮುಡಾ ಹಗರಣದಲ್ಲಿ ರಾಜ್ಯ ಸರ್ಕಾರ ತನಿಖೆ ಮಾಡಿ, ಕ್ರಮಕೈಗೊಳ್ಳದೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವುದು ಸರಿಯಾದ ಬೆಳವಣಿಗೆಯಲ್ಲ ಎಂದರು.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತದಲ್ಲಿ ಬೆಂಗಳೂರಿನಿಂದ ಕೈಗೊಂಡಿರುವ ಪಾದಯಾತ್ರೆಗೆ ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು ಭಾಗವಹಿಸಿ, ಸರ್ಕಾರದ ಹೊಣೆಗಾರಿಕೆಯನ್ನು ಎತ್ತಿಹಿಡಿಯಲು ಸಹಕಾರ ನೀಡಬೇಕು ಎಂದು ಹೇಳಿದರು. ಮಾಜಿ ಸಚಿವ ಸಾ.ರಾ.ಮಹೇಶ, ಮಾಜಿ ಶಾಸಕರಾದ ಅಶ್ವಿನ್ ಕುಮಾರ್, ಅನ್ನದಾನಿ, ಕೆ.ಮಹದೇವ್, ಸುರೇಶ್‌ಗೌಡ, ವಿಧಾನ ಪರಿಷತ್ ಸದಸ್ಯರಾದ ಸಿ.ಎನ್.ಮಂಜೇಗೌಡ, ವಿವೇಕಾನಂದ, ಮಾಜಿ ಮೇಯರ್‌ಗಳಾದ ಆರ್.ಲಿಂಗಪ್ಪ, ಎಂ.ಜೆ.ರವಿಕುಮಾರ್, ನಗರಪಾಳಿಕೆ ಮಾಜಿ ಸದಸ್ಯರಾದ ಪ್ರೇಮಾಶಂಕರೇಗೌಡ, ಎಸ್‌ಬಿಎಂ ಮಂಜು, ಮುಖಂಡರಾದ ಕೆ.ಟಿ.ಚಲುವೇಗೌಡ, ನರಸಿಂಹಸ್ವಾಮಿ, ದಾಕ್ಷಾಯಿಣಿ, ಲೋಕೇಶ್ ಇತರರಿದ್ದರು.