ಅಳವಂಡಿ: ಗಣರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಅಂಗನವಾಡಿ, ಶಾಲಾ-ಕಾಲೇಜು ಸಿಬ್ಬಂದಿ ಸಹಕರಿಸಬೇಕು ಎಂದು ಪಿಡಿಒ ಕೊಟ್ರಪ್ಪ ಅಂಗಡಿ ತಿಳಿಸಿದರು.
ಗ್ರಾಪಂನಲ್ಲಿ ಶನಿವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಈ ನಿಮಿತ್ತ ಗ್ರಾಪಂ ವ್ಯಾಪ್ತಿಯ ಅಂಗನವಾಡಿ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಗುವುದು ಎಂದು ಹೇಳಿದರು.
ಸಿಆರ್‌ಪಿ ವಿಜಯಕುಮಾರ ಟಿಕಾರೆ ಮಾತನಾಡಿ, ಎಸ್‌ಎಸ್‌ಪಿಯು ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಗುವುದು. ಒಂದರಿಂದ ಐದನೇ ತರಗತಿ ಮಕ್ಕಳಿಗೆ ಪರಿಸರ ಚಿತ್ರಕಲಾ ಸ್ಪರ್ಧೆ, 6-7ನೇ ತರಗತಿಯವರಿಗೆ ಪ್ರಬಂಧ ಸ್ಪರ್ಧೆ, ಹೈಸ್ಕೂಲ್ ವಿದ್ಯಾರ್ಥಿಗಳಿಗೆ ರಸಪ್ರಶ್ನೆ , ಕಾಲೇಜು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಆಯೋಜಿಸಲಾಗುವುದು. ಕಾರಣ ಆಸಕ್ತಿಯಿಂದ ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಶಿಕ್ಷಕರು ಪ್ರೋತ್ಸಾಹಿಸಬೇಕು ಎಂದರು.