ಜಿಲ್ಲೆ

ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ಒತ್ತಾಯಿಸಿ ರಾಯಚೂರಲ್ಲಿ ಅನಿರ್ಧಿಷ್ಟಾವಧಿ ಧರಣಿ ಆರಂಭ

Raichur

ರಾಯಚೂರು: ಜಿಲ್ಲೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ಹಿಂಸೆ ಮತ್ತು ದೌರ್ಜನ್ಯ ತಡೆಗಟ್ಟಲು ಅಗತ್ಯ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಸ್ಥಳೀಯ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ರಾಜ್ಯ ಮಹಿಳಾ ಒಕ್ಕೂಟ ಬುಧವಾರದಿಂದ ಅನಿರ್ಧಿಷ್ಟಾವಧಿ ಧರಣಿ ಆರಂಭಿಸಿತು.

ನಂತರ ಜಿಲ್ಲಾಧಿಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿಗೆ ಮನವಿ ಸಲ್ಲಿಸಿ, ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳಲ್ಲಿರುವ ಲೈಂಗಿಕ ದೌರ್ಜನ್ಯ ತಡೆ ಸಮಿತಿಗಳು ಪ್ರತಿ ತಿಂಗಳು ಸಭೆ ನಡೆಸಿ ಪ್ರಕರಣಗಳು ಪುನರಾವರ್ತನೆಯಾಗದಂತೆ ಕ್ರಮಕೈಗೊಳ್ಳಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ಬಾಲಕಿಯರ ವಸತಿ ನಿಲಯಗಳಲ್ಲಿ ಪುರುಷರನ್ನು ವಾರ್ಡನ್, ಅಧೀಕ್ಷಕ ಹಾಗೂ ಅಡುಗೆಯವರನ್ನಾಗಿ ನೇಮಕ ಮಾಡಬಾರದು. ದೌರ್ಜನ್ಯಕ್ಕೆ ಒಳಗಾಗಿರುವ ಮಕ್ಕಳೊಂದಿಗೆ ಆಪ್ತ ಸಮಾಲೋಚನೆ ನಡೆಸಿ ಅವರಿಗೆ ರಕ್ಷಣೆ ಒದಗಿಸುವ ಕಾರ್ಯ ಮಾಡಬೇಕು.

ರಾಯಚೂರು ಮತ್ತು ಸಿಂಧನೂರು ತಾಲೂಕಿನಲ್ಲಿ ಅಪ್ರಾಪ್ತೆಯರ ಮೇಲೆ ಜರುಗಿದ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳನ್ನು ಶೀಘ್ರಗತಿಯಲ್ಲಿ ಪತ್ತೆ ಹಚ್ಚುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದ್ದು, ಇಂತಹ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಶೀಘ್ರ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಒಕ್ಕೂಟದ ಪದಾಧಿಕಾರಿಗಳಾದ ವಿದ್ಯಾ ಪಾಟೀಲ್, ವಿರುಪಮ್ಮ, ಮೋಕ್ಷಮ್ಮ, ಅಮರಮ್ಮ, ಶರೀಫಮ್ಮ, ರಂಗಮ್ಮ, ಮರಿಯಮ್ಮ, ಮಾಳಮ್ಮ, ಸಾವಿತ್ರಮ್ಮ, ಲಕ್ಷ್ಮಿ ಪಾಲ್ಗೊಂಡಿದ್ದರು.