ಜಿಲ್ಲೆ

ಮಹಿಳೆಯರಿಗಾಗಿ ಸಹಾಯವಾಣಿ ಪ್ರಾರಂಭ: ಜಿಲ್ಲಾಧಿಕಾರಿ ಡಾ.ಕುಮಾರ ಮಾಹಿತಿ

ಕೆ.ಎನ್.ರಾಘವೇಂದ್ರ

ಮಂಡ್ಯ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವ ಪ್ರತಿ ಮಹಿಳೆಯರಿಗೂ ಅನುಕೂಲವಾಗುವಂತೆ ಸಹಾಯವಾಣಿ ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಮಹಿಳಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಉಪ ಸಮಿತಿಯನ್ನು ರಚಿಸಿ ಬಹಳ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುತ್ತಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಎಲ್ಲ ಸದಸ್ಯರು ಕಡ್ಡಾಯವಾಗಿ ಪಾಸ್ ಪಡೆಯಬೇಕು. ಮಹಿಳಾ ಗೋಷ್ಠಿಗೆ ಸಂಬಂಧಿಸಿದಂತೆ ಸಾಂಸ್ಕೃತಿಕ ಸಮನ್ವಯ ಸಮಿತಿಯೊಂದಿಗೆ ಚರ್ಚಿಸಿ ಅಭಿಪ್ರಾಯಗಳನ್ನು ತಿಳಿಸಿ. ಗೋಷ್ಠಿಗೆ ಬರುವ ಸಂಪನ್ಮೂಲ ವ್ಯಕ್ತಿಗಳಿಗೆ ಉಟ, ವಸತಿ ವ್ಯವಸ್ಥೆ ಕಲ್ಪಿಸಬೇಕು ಎಂದರು.

ಆರೋಗ್ಯ ಸಮಿತಿಗೆ ಸಂಬಂಧಪಟ್ಟಂತೆ ಆರೋಗ್ಯ ಕೇಂದ್ರಗಳನ್ನು ತೆರೆಯಲಾಗುವುದು. ಪ್ರತಿ ಆರೋಗ್ಯ ಕೇಂದ್ರಕ್ಕೂ ವೈದ್ಯರು ಹಾಗೂ ಸಿಬ್ಬಂದಿ ಒಳಗೊಂಡಂತೆ ವೈದ್ಯಕೀಯ ಪರಿಕರಗಳಿರುತ್ತವೆ. ಮಹಿಳೆಯರಿಗೆ ಸಂಬಂಧಪಟ್ಟಂತೆ ಯಾವುದೇ ಸಮಸ್ಯೆಗಳಿದ್ದರೂ ಕೂಡ ಪರಿಹರಿಸಿಕೊಳ್ಳಬಹುದು. ಮೂರು ದಿನ ನಡೆಯಲಿರುವ ಸಮ್ಮೇಳನಕ್ಕೆ ರಾಜ್ಯದ ವಿವಿಧ ಭಾಗಗಳಿಂದ ನೋಂದಾಯಿಸಿಕೊಂಡು ಆಗಮಿಸುವ ಮಹಿಳೆಯರಿಗೆ ಸೂಕ್ತ ರೀತಿ ವಸತಿ ಹಾಗೂ ಎಲ್ಲರಿಗೂ ಊಟದ ವ್ಯವಸ್ಥೆ ಕಲ್ಪಿಸಬೇಕು. ಎಲ್ಲಿಯೂ ಲೋಪವಾಗದಂತೆ ನಿಗಾ ವಹಿಸುವಂತೆ ಬಹಳ ಗೌರವಯುತವಾಗಿ ನಡೆಸಿಕೊಳ್ಳಬೇಕು. ಮೂಲಸೌಕರ್ಯಕ್ಕೆ ಹೆಚ್ಚು ಒತ್ತು ನೀಡಬೇಕು. ಕುಡಿಯುವ ನೀರು, ಶೌಚಗೃಹ, ವಸತಿ ಸ್ಥಳಗಳಲ್ಲಿ ಸ್ವಚ್ಛತೆಗೆ ಆದ್ಯತೆ ಕೊಡಬೇಕು ಎಂದು ಸೂಚಿಸಿದರು.

ಹೊರ ಜಿಲ್ಲೆಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವವರ ವಾಹನಗಳಿಗೆ ಉಮ್ಮಡಹಳ್ಳಿ ಗೇಟ್ ಬಳಿ ಇರುವ ಸತ್ವ ಕಾವೇರಿ ಸಿರಿ ಫ್ಲಾಟ್ ಸಮೀಪ 10 ಎಕರೆ ಸ್ಥಳದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಅಲ್ಲಿಂದ ಸಮ್ಮೇಳನ ನಡೆಯುವ ಸ್ಥಳಕ್ಕೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಪಾರ್ಕಿಂಗ್ ಸ್ಥಳದಿಂದ ಜನರನ್ನು ಕರೆತರಲು ಪ್ರತಿ 5 ನಿಮಿಷಕ್ಕೊಮ್ಮೆ ಬಸ್ ವ್ಯವಸ್ಥೆ ಇರಲಿದೆ. ಸ್ಥಳೀಯರಿಗೆ ಪ್ರತ್ಯೇಕವಾಗಿ 3 ಕಡೆ ಪಾರ್ಕಿಂಗ್ ವ್ಯವಸ್ಥೆ ಮಾಡಿದ್ದು, ಅಲ್ಲಿಂದಲೂ ಸಮ್ಮೇಳನಕ್ಕೆ ಉಚಿತ ಬಸ್ ವ್ಯವಸ್ಥೆ ಇರಲಿದೆ. ಇದಲ್ಲದೆ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದಲೂ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

ಮಹಿಳಾ ಸಮಿತಿ ಅಧ್ಯಕ್ಷೆ ಸುನಂದಾ ಜಯರಾಂ ಮಾತನಾಡಿ, ಸಮಿತಿಯಲ್ಲಿರುವ ಸದಸ್ಯರು ಸ್ವಯಂ ಸೇವಕರ ಸಮಿತಿ, ನೋಂದಣಿ ಸಮಿತಿ, ಸಾರಿಗೆ ಸಮಿತಿ, ಆಹಾರ ಸಮಿತಿ, ಆರೋಗ್ಯ ಸಮಿತಿ, ಸಾಂಸ್ಕೃತಿಕ ಸಮಿತಿ, ಆಸನ ಸಮಿತಿ, ಸಮನ್ವಯ ಸಮಿತಿ, ವಸತಿ ಸಮಿತಿಗಳಲ್ಲಿ ಕಾರ್ಯ ನಿರ್ವಹಿಸಲು ನೇಮಿಸಲಾಗಿದೆ. ಮಹಿಳಾ ಸಮಿತಿಯಲ್ಲಿ ಉಪಸಮಿತಿ ರಚಿಸಿದ್ದು, ಎಲ್ಲರೂ ಬಹಳ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಮುಂದೆಯೂ ತಮ್ಮ ಕರ್ತವ್ಯಗಳನ್ನು ಜವಾಬ್ದಾರಿಯಿಂದ ನಿಭಾಯಿಸಿ ಎಂದರು.

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವಾದ್ದರಿಂದ ಕನ್ನಡ ಭಾಷೆ, ಕನ್ನಡ ನಾಡು ನುಡಿಗೆ ಹೆಚ್ಚು ಒತ್ತು ನೀಡುವ ಗೋಷ್ಠಿಗಳನ್ನು ನಡೆಸುವುದರ ಜತೆ ಕೃಷಿ, ಹೆಣ್ಣು ಭ್ರೂಣ ಹತ್ಯೆ, ಮೌಢ್ಯತೆ ಹಾಗೂ ದುಡಿಯುವ ಮಹಿಳೆಯರ ಬಗ್ಗೆ ವಿಚಾರ ಗೋಷ್ಠಿಗಳು ನಡೆಯಬೇಕು ಎಂದು ಜಿಲ್ಲಾಧಿಕಾರಿಗೆ ಮನವಿ ಮಾಡಿದರು.

ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಸಂಚಾಲಕಿ ಡಾ.ಮೀರಾ ಶಿವಲಿಂಗಯ್ಯ, ಮಹಿಳಾ ಸಮಿತಿ ಉಪಾಧ್ಯಕ್ಷೆ ಸೌಭಾಗ್ಯಾ ಮಹದೇವು, ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ.ಬಿ.ಎಸ್.ಸೀತಾಲಕ್ಷ್ಮೀ ಇತರರಿದ್ದರು.