ಜಿಲ್ಲೆ

ಪಕ್ಷದ ಗೆಲುವಿಗೆ ಶ್ರಮಿಸಿ

Dharwada - Santosh Vaidya

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಫಲತೆ ಕಾಣುತ್ತಿದ್ದು, ದೇಶಾದ್ಯಂತ ಪ್ರಶಂಸೆಗೆ ಪಾತ್ರವಾಗಿವೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅತ್ಯಧಿಕ ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಮೂಲಕ ದೇಶದ ಆಡಳಿತ ಚುಕ್ಕಾಣಿ ಹಿಡಿಯುವ ದಿನಗಳು ದೂರ ಉಳಿದಿಲ್ಲ. ಇದಕ್ಕೆ ಪಕ್ಷದ ಪ್ರತಿಯೊಬ್ಬರೂ ಶ್ರಮಿಸಬೇಕು. ಪಕ್ಷದ ಗೆಲುವೊಂದೇ ತಮ್ಮೆಲ್ಲರ ಗುರಿಯಾಗಲಿ ಎಂದು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ ಅಬ್ಬಯ್ಯ ಹೇಳಿದರು.

ಧಾರವಾಡ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ತಮ್ಮ ಗೃಹ ಕಚೇರಿಯಲ್ಲಿ ಪೂರ್ವ ವಿಧಾನಸಭಾ ಕ್ಷೇತ್ರದ ಪಾಲಿಕೆ ಸದಸ್ಯರು, ಮಾಜಿ ಸದಸ್ಯರು, ವಾರ್ಡ್ ಘಟಕಗಳ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪ್ರಮುಖರೊಂದಿಗೆ ಸೋಮವಾರ ಸಭೆ ನಡೆಸಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಅವಿರತವಾಗಿ ಶ್ರಮಿಸಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ್ಥಾಪಿಸಿದ ಮಾದರಿಯಲ್ಲೇ ಕೇಂದ್ರದಲ್ಲೂ ಕಾಂಗ್ರೆಸ್ ಆಡಳಿತ ತರಲು ಸನ್ನದ್ಧರಾಗಬೇಕೆಂದು ಕರೆ ನೀಡಿದರು.

ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಪರ ಪ್ರಚಾರ ಕಾರ್ಯ ಈ ಕ್ಷಣದಿಂದಲೇ ಪ್ರಾರಂಭಿಸಬೇಕು. ಬೂತ್ ಮಟ್ಟದ ಕಾರ್ಯಕರ್ತರು ಪ್ರತಿ ಮನೆ ಮನೆಗೆ ತೆರಳಿ ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳನ್ನು ಮನವರಿಕೆ ಮಾಡಿಕೊಡಬೇಕು. ಕಳೆದ 10ವರ್ಷದಲ್ಲಿ ಬಿಜೆಪಿ ಆಡಳಿತಾವಧಿಯಲ್ಲಿ ನಡೆದ ಭಷ್ಟಾಚಾರ, ಅಗತ್ಯ ವಸ್ತುಗಳ ಬೆಲೆ ಏರಿಕೆ, ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆ, ಜಿಎಸ್​ಟಿ ಹೊರೆ ಸೇರಿ ಹಲವು ದುರಾಡಳಿತವನ್ನು ಸಾರ್ವಜನಿಕರಿಗೆ ತಿಳಿಸಬೇಕು ಎಂದರು.

ದೋರಾಜ್ ಮಣಿಕುಂಟ್ಲ, ಪಾಲಿಕೆ ಮಾಜಿ ಸದಸ್ಯರಾದ ಅಲ್ತಾಫ್ ಕಿತ್ತೂರು, ಮೋಹನ ಅಸುಂಡಿ, ಬಶೀರ್ ಗುಡಮಾಲ್, ಪ್ರಸನ್ನ ಮಿರಜಕರ್, ಮೆಹಮೂದ್ ಕೋಳೂರ, ಅಕ್ಕಮ್ಮ ಕಂಬಳಿ, ಚೇತನಾ ಲಿಂಗದಾಳ, ಶರೀಫ್ ಅದ್ವಾನಿ, ಸೈಯದ್ ಸಲೀಂ ಮುಲ್ಲಾ, ರವಿಕುಮಾರ ಮಾನಶೆಟ್ಟರ್, ಇತರರು ಇದ್ದರು.