ಜಿಲ್ಲೆ

ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಶ್ರಮಿಸಿ: ಡಾ.ಎಸ್.ಆಕಾಶ್‌

ಮಡಿಕೇರಿ: ಪ್ರಸಕ್ತ ಸಾಲಿನಲ್ಲಿ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಹೆಚ್ಚಳಕ್ಕೆ ಶಿಕ್ಷಕರು, ಮುಖ್ಯ ಶಿಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬಿಆರ್‌ಸಿಗಳು ಹೀಗೆ ಎಲ್ಲರೂ ಶ್ರಮಿಸುವಂತೆ ಜಿ.ಪಂ.ಸಿಇಒ ಡಾ.ಎಸ್.ಆಕಾಶ್‌ರವರು ನಿರ್ದೇಶನ ನೀಡಿದರು.


ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ವತಿಯಿಂದ ಎಸ್ಸೆಸ್ಸೆಲ್ಸಿ ಫಲಿತಾಂಶ ವಿಶ್ಲೇಷಣೆ ಮತ್ತು ಸುಧಾರಣೆ ಕುರಿತು ಪ್ರೌಢಶಾಲಾ ಮುಖ್ಯ ಶಿಕ್ಷಕರ ಜತೆ ಸಂತ ಮೈಕಲರ ಪ್ರೌಢಶಾಲೆಯ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಕಳೆದ ಬಾರಿ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಕೊಡಗು ಜಿಲ್ಲೆ ೧೧ ನೇ ಸ್ಥಾನ ಪಡೆದಿತ್ತು. ಈ ಬಾರಿ ೩ನೇ ಸ್ಥಾನದೊಳಗೆ ಫಲಿತಾಂಶ ಬರುವಂತೆ ಗುಣಮಟ್ಟದ ಕಲಿಕೆಗೆ ಎಲ್ಲರೂ ಶ್ರಮಿಸಬೇಕು ಎಂದರು.


ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಿದ್ಧತೆ ಮತ್ತು ಆತ್ಮವಿಶ್ವಾಸ ಹೆಚ್ಚಿಸಲು ರಾಜ್ಯ ಮಟ್ಟದ ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗೂ ಮೊದಲು ಜನವರಿ ಕೊನೆ ಅಥವಾ ಫೆಬ್ರುವರಿ ಮೊದಲ ವಾರದಲ್ಲಿ ಜಿಲ್ಲಾ ಮಟ್ಟದ ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ನಡೆಸಬೇಕು. ಮಕ್ಕಳ ಕಲಿಕೆಗೆ ವಿಶೇಷ ತರಗತಿ ನಡೆಸುವುದರ ಜೊತೆಗೆ ಪಾಠ ಪ್ರವಚನಗಳನ್ನು ಪೂರ್ಣಗೊಳಿಸಿ, ಮತ್ತೆ ಮನನ ಮಾಡುವಂತಾಗಬೇಕು ಎಂದರು.


ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.೧೦೦ ರಷ್ಟು ಫಲಿತಾಂಶ ಪಡೆದ ಶಾಲೆಗಳ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರಿಗೆ ಜಿ.ಪಂ.ವತಿಯಿಂದ ಅಭಿನಂದನೆ ಸಲ್ಲಿಸಲಾಗುವುದು. ವಿದ್ಯಾರ್ಥಿಗಳು ಪ್ರತೀ ನಿತ್ಯ ಬರವಣಿಗೆ ಕೌಶಲ್ಯ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಮಾಹಿತಿ ನೀಡಬೇಕು. ಯಾವುದಾದರೂ ಶಾಲೆಗಳಲ್ಲಿ ಮಧ್ಯಂತರದಲ್ಲಿ ಶಿಕ್ಷಕರು ನಿವೃತ್ತರಾಗಿದ್ದಲ್ಲಿ ಮಾಹಿತಿ ನೀಡಬೇಕು. ಪಾಠ ಪ್ರವಚನಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸಬೇಕು ಎಂದು ಡಾ.ಆಕಾಶ್ ಸೂಚಿಸಿದರು.


ದತ್ತು ವಹಿಸಿಕೊಂಡಿರುವ ಶಾಲೆಗಳ ಶಿಕ್ಷಕರು, ಮುಖ್ಯೋಪಾಧ್ಯಾಯರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಫಲಿತಾಂಶಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.


ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ರಂಗಧಾಮಯ್ಯ ಮಾತನಾಡಿ, ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶದಲ್ಲಿ, ಈ ಬಾರಿ ೧೦ ಸ್ಥಾನದೊಳಗೆ ಪರೀಕ್ಷಾ ಫಲಿತಾಂಶ ಪಡೆಯಲು ಶ್ರಮಿಸಲಾಗುವುದು. ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂಬಂಧ ಸರ್ಕಾರದ ನಿರ್ದೇಶನಗಳನ್ನು ಕಾಲ ಕಾಲಕ್ಕೆ ಅನುಷ್ಠಾನಗೊಳಿಸಲಾಗುತ್ತಿದೆ. ಜತೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಮುಖ್ಯೋಪಾಧ್ಯಾಯರ ಜತೆ ಸಂವಾದ, ಪಾಲಕರ ಸಭೆ ಹೀಗೆ ಹಲವು ಚಟುವಟಿಕೆಗಳನ್ನು ಕೈಗೊಳ್ಳಲಾಗಿದ್ದು, ಪರೀಕ್ಷಾ ಫಲಿತಾಂಶ ಹೆಚ್ಚಳಕ್ಕೆ ಅಗತ್ಯ ಕ್ರಮವಹಿಸಲಾಗುವುದು ಎಂದರು.


ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್(ಮಡಿಕೇರಿ) ಮಾತನಾಡಿ, ಮಡಿಕೇರಿ ತಾಲೂಕಿನಲ್ಲಿ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಫಲಿತಾಂಶ ಉತ್ತಮವಾಗಿದೆ. ಅನುದಾನಿತ ಶಾಲೆಗಳಲ್ಲಿ ಪರೀಕ್ಷಾ ಫಲಿತಾಂಶ ಹೆಚ್ಚಳಕ್ಕೆ ಇನ್ನಷ್ಟು ಪ್ರಯತ್ನ ಮಾಡಲಾಗುವುದು ಎಂದರು.


ಕ್ಷೇತ್ರ ಶಿಕ್ಷಣಾಧಿಕಾರಿ(ವಿರಾಜಪೇಟೆ) ಶ್ರೀಶೈಲ ಬೀಳಗಿ ಮಾತನಾಡಿ, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನಲ್ಲಿ ರಾಜ್ಯ ಸರಾಸರಿಗೆ ಹೋಲಿಕೆ ಮಾಡಿದರೆ ಹೆಚ್ಚಿನ ಫಲಿತಾಂಶವಿದೆ. ಆದರೂ ವಸತಿ ಶಾಲೆಗಳಲ್ಲಿ ಫಲಿತಾಂಶ ಹೆಚ್ಚಳಕ್ಕೆ ಮತ್ತಷ್ಟು ಪ್ರಯತ್ನ ಮಾಡಲಾಗುವುದು ಎಂದರು.


ಕಾರ್ಯಗಾರದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೆ.ವಿ.ಸುರೇಶ್(ಸೋಮವಾರಪೇಟೆ), ಶಾಲ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಿಲ್ಲಾ ಉಪ ಯೋಜನಾಧಿಕಾರಿ ಕೃಷ್ಣಪ್ಪ, ವಿಷಯ ಪರಿವೀಕ್ಷಕ ಬಿಂದು, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್, ಡಯಟ್ ಉಪನ್ಯಾಸಕರು, ಮುಖ್ಯೋಪಾಧ್ಯಾಯರು ಇದ್ದರು.


೬,೫೮೭ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿದ್ದು, ೬,೩೦೩ ವಿದ್ಯಾರ್ಥಿಗಳು ಪ್ರಥಮ ಬಾರಿಗೆ ಪರೀಕ್ಷೆ ಬರೆಯಲಿದ್ದಾರೆ. ಪಾಲಕರ ಸಭೆ, ಶಿಕ್ಷಕರಿಗೆ ಮಾರ್ಗದರ್ಶನ, ವಿದ್ಯಾರ್ಥಿಗಳೊಂದಿಗೆ ಸಂವಾದ ಮಾಡಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆ ಸಮಯದಲ್ಲಿ ವಹಿಸಬೇಕಾದ ಧನಾತ್ಮಕ ಚಿಂತನೆ, ಭಯ ನಿವಾರಣೆ, ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ಮಾರ್ಗದರ್ಶನ, ಗುಂಪು ಕಲಿಕೆ, ಹೀಗೆ ವಿವಿಧ ಕಲಿಕಾ ಚಟುಚಟಿಕೆಗಳಿಗೆ ಒತ್ತು ನೀಡಲಾಗಿದೆ.
ಡಾ.ಬಿ.ಸಿ.ದೊಡ್ಡೇಗೌಡ, ಎಸ್‌ಎಸ್‌ಎಲ್‌ಸಿ ಪರೀಕ್ಷಾ ನೋಡಲ್ ಅಧಿಕಾರಿ