ಜಿಲ್ಲೆ

ಬಾಲ್ಯ ವಿವಾಹ ತಡೆಯಲು ಒಗ್ಗೂಡಿ ಕೆಲಸ ಮಾಡಿ

ಗಂಗಾಧರ ಬಿ ವಿ

ರಾಮನಗರ: ಪೋಕ್ಸೋ ಪ್ರಕರಣಗಳು ಹಾಗೂ ಬಾಲ್ಯ ವಿವಾಹವನ್ನು ತಡೆಗಟ್ಟಲು ಸರ್ಕಾರದ ಎಲ್ಲಾ ಇಲಾಖೆಗಳು ಹಾಗೂ ಸಮಾಜದ ನಾಗರೀಕರ ಒಗ್ಗೂಡಿ ಕೆಲಸ ಮಾಡಬೇಕು ಎಂದು ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸವಿತಾ ಪಿ. ಆರ್. ಕರೆ ನೀಡಿದರು.

ಗುರುವಾರ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದೊಂದಿಗೆ ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ಮಕ್ಕಳ ಹಕ್ಕು ಹಾಗೂ ರಕ್ಷಣೆಗೆ ಸಂಬಂಧಿಸಿದಂತೆ ವಿವಿಧ ಹಂತದ ಸಮಿತಿಗಳ ರಚನೆ ಮತ್ತು ಮಕ್ಕಳ ವಿವಿಧ ಕಾನೂನುಗಳ ಅನುಷ್ಠಾನದಲ್ಲಿ ಅಧಿಕಾರಿಗಳ ಪಾತ್ರ, ಕರ್ತವ್ಯ, ಜವಬ್ದಾರಿ ಹಾಗೂ ಹೊಣೆಗಾರಿಕೆ ಕುರಿತ ಒಂದು ದಿನದ ತರಬೇತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.

ದುರ್ಬಲ ವರ್ಗದವರು, ಮಕ್ಕಳು ಹಾಗೂ ಮಹಿಳೆಯರ ಮೇಲಾಗುವ ದಬ್ಬಾಳಿಕೆಗಳನ್ನು ತಡೆಗಟ್ಟಲು ಪಾಲಕರು, ಅಧಿಕಾರಿಗಳು, ಸಮಾಜದಲ್ಲಿರುವ ಜವಾಬ್ದಾರಿಯುತ ನಾಗರೀಕರು ಒಗ್ಗೂಡಿ ಕೆಲಸ ಮಾಡಬೇಕು. ಅದಕ್ಕೆ ಅನುಕೂಲವಾಗುವಂತೆ ವಿವಿಧ ಹಂತದ ಸಮಿತಿಗಳ ರಚನೆ ಮತ್ತು ಮಕ್ಕಳ ವಿವಿಧ ಕಾನೂನುಗಳ ಅನುಷ್ಠಾನದಲ್ಲಿ ಅಧಿಕಾರಿಗಳ ಪಾತ್ರ, ಕರ್ತವ್ಯ, ಜವಾಬ್ದಾರಿ ಹಾಗೂ ಹೊಣೆಗಾರಿಕೆ ಕುರಿತ ಒಂದು ದಿನದ ತರಬೇತಿಯಲ್ಲಿ ಅಧಿಕಾರಿಗಳು ವಹಿಸಬೇಕಾದ ಪಾತ್ರವನ್ನು ಮನವರಿಕೆ ಮಾಡಿಕೊಡಲಾಗುತ್ತಿದೆ ಎಂದವರು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪದ್ಮರಾಜ್ ಮಾತನಾಡಿ, ಗರ್ಭಿಣಿಯರಿಗೆ ಪೌಷ್ಠಿಕ ಆಹಾರ ನೀಡಬೇಕು, ಅದಕ್ಕೆ ಪೂರಕವಾಗಿ ಅವರಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಸಾಕಷ್ಟು ನೆರವು ನೀಡಲಾಗುತ್ತಿದೆ ಎಂದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಜನಿ ಆರ್., ಜಿಲ್ಲಾ ಕಾರ್ಮಿಕ ಅಧಿಕಾರಿ ನಾಗೇಂದ್ರ ಎಚ್., ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರಭುರಾಜ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಷಣ್ಮುಗಂ ಸುಂದರಂ, ಬಾಲ ನ್ಯಾಯಾಲಯ ಮಂಡಳಿ ಸದಸ್ಯರಾದ ಕೀರ್ತಿ, ಶಂಕರಪ್ಪ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಆರೋಗ್ಯ, ಶಿಕ್ಷಣ, ಕಾರ್ಮಿಕ, ಪೊಲೀಸ್ ಇಲಾಖೆಯ ಸಿಬ್ಬಂದಿಗಳಿದ್ದರು.