ಬೆಂಗಳೂರು: ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರು ಸೇರಿ ಅಸಂಘಟಿತ ವಲಯದ ಕಾರ್ಮಿಕರಿಗೆ ಮಾಸಿಕ 31,500 ರೂ. ಕನಿಷ್ಠ ಕೂಲಿ ನಿಗದಿ ಪಡಿಸಲು ಆಗ್ರಹಿಸಿ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ನೇತೃತ್ವದಲ್ಲಿ ಗುರುವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ದುಡಿಯುವ ಜನ ಸಮುದಾಯದ ಸಮಸ್ಯೆಗಳನ್ನು ಪರಿಹರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ಬಿಸಿಯೂಟ, ಅಂಗನವಾಡಿ, ಆಶಾ, ಕೈಗಾರಿಕಾ, ಕಟ್ಟಡ, ಸಾರಿಗೆ, ಬೀಡಿ, ಪ್ಲಾಂಟೇಷನ್, ಬ್ಯಾಂಕ್, ವಿಮಾ, ಗಿಗ್, ಗಣಿಕಾರ್ಮಿಕರು ಸೇರಿ ಅಸಂಘಟಿತ ವಲಯದ ಸಾವಿರಾರು ಕಾರ್ಮಿಕರು ಪಾಲ್ಗೊಂಡು ಬೇಡಿಕೆಗಳ ಈಡೇರಿಗೆ ಆಗ್ರಹಿಸಿದರು. ವಿವಿಧ 28 ಬೇಡಿಕೆಗಳನ್ನು ಇಟ್ಟುಕೊಂಡು ಇದೀಗ ಒಂದು ದಿನದ ಪ್ರತಿಭಟನೆ ನಡೆಸಿದ್ದೇವೆ. ಸರಕಾರ ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಈ ವೇಳೆ ಎಐಟಿಯುಸಿ ರಾಜ್ಯ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ಮಾತನಾಡಿ, ವಿವಿಧ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ಮತ್ತು ರಾಜ್ಯ ಹೈಕೋರ್ಟ್ ನೀಡಿರುವ ಮಾರ್ಗಸೂಚಿ ಮತ್ತು ಆದೇಶಗಳನ್ನು ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿ ಅಸಂಘಟಿತ ಕಾರ್ಮಿಕರಿಗೆ ಮಾಸಿಕ 31,500 ರೂ. ಕನಿಷ್ಠ ಕೂಲಿ ನಿಗದಿಪಡಿಸಬೇಕು. 8 ಗಂಟೆ ಕೆಲಸದ ಅವಧಿ ನಿಯಮವನ್ನು ಮರುಸ್ಥಾಪಿಸಬೇಕು. ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು. ಕೆಎಸ್‌ಆರ್‌ಟಿಸಿ ನೌಕರರ ಹಿಂದಿನ ವೇತನ ಪರಿಷ್ಕರಣೆ, 2018ರಿಂದ ಬಾಕಿ ಇರುವ ಬೀಡಿ ಕಾರ್ಮಿಕರಿಗೆ ತುಟ್ಟಿಭತ್ಯೆ ಸಮಸ್ಯೆ ಪರಿಹರ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತು ಸರ್ಕಾರವನ್ನು ಒತ್ತಾಯಿಸಿದರು.
ಎಐಟಿಯುಸಿ ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ವಿಜಯ್ ಭಾಸ್ಕರ್ ಮಾತನಾಡಿ, ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನಿಯಮಗಳಿಂದ ಕಾರ್ಮಿಕರ ಮುಷ್ಕರದ ಹಕ್ಕು, ಕಾರ್ಖಾನೆಗಳ ತಪಾಸಣೆ, ಕನಿಷ್ಠ ವೇತನ, ಸಾಮಾಜಿಕ ಭದ್ರತೆ, ಸೌಲಭ್ಯಗಳು ನಾಶವಾಗುತ್ತವೆ. ಕೇಂದ್ರ ಸರ್ಕಾರದ ಬಂಡವಾಳಶಾಹಿ ಉದ್ಯಮ ನೀತಿ, ಪಕ್ಷಪಾತಿ ಧೋರಣೆ ಬಗ್ಗೆ ಕಾರ್ಮಿಕ ಸಂಘಟನೆಗಳು ಎಚ್ಚೆತ್ತುಕೊಳ್ಳಬೇಕು ಎಂದು ಕರೆ ನೀಡಿದರು.
ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿಯರಿಗೆ ಗೌರವಧನ ಹೆಚ್ಚಿಸುವುದರ ಜತೆಗೆ ಸೇವೆಯನ್ನು ಖಾಯಂಗೊಳಿಸಬೇಕು. ನಿವೃತ್ತರಿಗೆ 3 ಲಕ್ಷ ಇಡುಗಂಟು ಜಾರಿಗೊಳಿಸುವುದು, ಬಾಲವಿಕಾಸ ಸಮಿತಿ ಖಾತೆಗೆ ಮೊಟ್ಟೆ ಹಣ ಬಿಡುಗಡೆ ಮಾಡುವುದು, ಹಾಳಾಗಿರುವ ಮೊಬೈಲ್‌ಗಳನ್ನು ವಾಪಸ್ಸು ಪಡೆದು ಹೊಸ ಸೆಟ್‌ಗಳನ್ನು ನೀಡಬೇಕು. ಮಿನಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಬೇಕು ಎಂದು ಎಐಟಿಯುಸಿ ಖಜಾಂಚಿ ಎಂ.ಬಿ. ಶಾರದಮ್ಮ ಒತ್ತಾಯಿಸಿದರು.
ಪ್ರತಿಭಟನಾ ಸ್ಥಳಕ್ಕೆ ಕಾರ್ಮಿಕ ಇಲಾಖೆ ನಿರ್ದೇಶಕ ರವಿಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕಿ ಅರ್ಚನಾ ಅವರು ಪ್ರತಿಭಟನಾ ನಿರತರಿಂದ ಮನವಿ ಸ್ವೀಕರಿಸಿದರು.