ಮೈಸೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಮೇ 20ರಂದು ಕರೆ ನೀಡಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಯಶಸ್ವಿಗೊಳಿಸಲು ನಗರದ ಜೆಎಲ್ಬಿ ರಸ್ತೆಯ ರೋಟರಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಮಿಕ ಸಂಘಟನೆಗಳ ಸಭೆಯಲ್ಲಿ ತೀರ್ಮಾನಿಸಲಾಯಿತು.
ಎಐಟಿಯುಸಿ ಮೈಸೂರು ಘಟಕದ ಪ್ರಧಾನ ಕಾರ್ಯದರ್ಶಿ ಎಚ್.ಆರ್. ಶೇಷಾದ್ರಿ ಮಾತನಾಡಿ, ರಾಜ್ಯದಲ್ಲಿರುವ ಅಸಂಘಟಿತ ಕಾರ್ಮಿಕರಿಗೆ ಡಾ.ಬಿ.ಆರ್.ಅಂಬೇಡ್ಕರ್ ಸಹಾಯಹಸ್ತ ಯೋಜನೆಯಡಿ ಕೇವಲ ವಿಮಾ ಯೋಜನೆ ಜಾರಿ ಮಾಡಲಾಗಿದ್ದು, ಎಲ್ಲ ಅಸಂಘಟಿತ ಕಾರ್ಮಿಕರಿಗೆ ಸಮಗ್ರ ಸಾಮಾಜಿಕ ಭದ್ರತೆ ಭಾಗವಾಗಿ ಪಿಂಚಣಿ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಈ ಹಿಂದೆ ಖಾಸಗಿ ಒಡೆತನದಲ್ಲಿದ್ದ ಉದ್ಯಮಗಳನ್ನು ರಾಷ್ಟ್ರೀಕರಣ ಮಾಡಲಾಗಿತ್ತು. ಆದರೆ, ಇದೀಗ ನಷ್ಟದ ನೆಪದಲ್ಲಿ ಸರ್ಕಾರಿ ಸ್ವಾಮ್ಯದ ಖಾಸಗೀಕರಣ ಮಾಡಲಾಗುತ್ತಿದೆ. ದೇಶದ ಆರ್ಥಿಕ ನೀತಿಗಳನ್ನು ಬಂಡವಾಳಶಾಹಿಗಳ ಪರವಾಗಿ ರೂಪಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜನರನ್ನು ಜಾತಿ, ಧರ್ಮ ಹಾಗೂ ಭಾಷೆ ಹೆಸರಿನಲ್ಲಿ ಒಡೆಯಲಾಗುತ್ತಿದೆ. ಆದರೆ, ಕಾರ್ಮಿಕರಿಗೆ ಯಾವುದೇ ಜಾತಿ, ಧರ್ಮವಿಲ್ಲ. ಒಗ್ಗಟ್ಟು ಮತ್ತು ಹಕ್ಕುಗಳಿಗಾಗಿ ಹೋರಾಡುವುದೇ ನಮ್ಮ ಧರ್ಮವಾಗಿದೆ. ರೈತ ಮತ್ತು ಕಾರ್ಮಿಕ ವಿರೋಧಿ ಕಾಯ್ದೆಗಳ ವಿರುದ್ಧ ನಡೆಯುವ ಮುಷ್ಕರದಲ್ಲಿ ಸಾವಿರಾರು ಕಾರ್ಮಿಕರು ಮುಷ್ಕರದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಕಾರ್ಮಿಕ ನಾಯಕಿ ವರಲಕ್ಷ್ಮೀ ಮಾತನಾಡಿ, ಕೇಂದ್ರ ಸರ್ಕಾರ ನಿರಂತರವಾಗಿ ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸುತ್ತಾ ಬಂದಿದೆ. ಕಾರ್ಮಿಕರಿಗೆ ಉಪಯುಕ್ತವಾದ ಹಲವು ಕಾನೂನುಗಳನ್ನು ಮೊಟಕುಗೊಳಿಸಲು ಯತ್ನಿಸಿ ಅದರಲ್ಲಿ ವಿಫಲವಾಗಿದೆ. ಬಂಡವಾಳ ಶಾಹಿಗಳಿಗೆ ನೆರವು ನೀಡುವ ಕ್ರಮಗಳನ್ನು ಸರ್ಕಾರ ಕೈಗೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಭೆಯಲ್ಲಿ ಕಾರ್ಮಿಕ ಸಂಘಟನೆಗಳ ಮುಖಂಡರಾದ ಜಗನ್ನಾಥ್, ಜಯರಾಮು, ಚೌಡಳ್ಳಿ ಜವರಯ್ಯ, ಶ್ರೀನಿವಾಸ್, ಯಶೋಧರ, ಎಚ್.ಬಿ. ರಾಮಕೃಷ್ಣ, ಜಯರಾಂ, ಚಂದ್ರಶೇಖರ ಮೇಟಿ ಮತ್ತಿತರರು ಇದ್ದರು.