ಮುಂಡರಗಿ: ಪಟ್ಟಣದ ರೋಟರಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ತಾಲೂಕು ಘಟಕ, ತಾಲೂಕು ಖಾಸಗಿ ಶಿಕ್ಷಣ ಸಂಸ್ಥೆಗಳು ಹಾಗೂ ರೋಟರಿ ಶಿಕ್ಷಣ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಆ.8ರಂದು ಬೆಳಗ್ಗೆ 10:30ಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳ ಹಾಗೂ ನೌಕರರ ಶೈಕ್ಷಣಿಕ ವಿಚಾರ ಸಂಕಿರಣ ಮತ್ತು ರೋಟರಿ ಶಿಕ್ಷಣ ಸಂಸ್ಥೆ ಶಾಲಾ ಕೊಠಡಿಗಳ ಉದ್ಘಾಟನೆ ಹಾಗೂ ಸನ್ಮಾನ ಸಮಾರಂಭ ಆಯೋಜಿಸಲಾಗಿದೆ ಎಂದು ತಾಲೂಕು ಮಾಧ್ಯಮಿಕ ಶಾಲಾ ನೌಕರರ ಸಂಘ ಕೇಂದ್ರ ಸಮಿತಿಯ ಸದಸ್ಯ ಎಸ್.ಎಸ್.ಗಡ್ಡದ ತಿಳಿಸಿದರು.
ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀ ನಿಜಗುಣಪ್ರಭು ತೋಂಟದಾರ್ಯ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸುವರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಉದ್ಘಾಟಿಸುವರು. ರೋಟರಿ ಶಿಕ್ಷಣ ಸಂಸ್ಥೆ ಅಧ್ಯಕ್ಷೆ ಅಕ್ಕಮಹಾದೇವಿ ಕಡ್ಡಿ ಅಧ್ಯಕ್ಷತೆ ವಹಿಸುವರು. ಶಾಸಕರಾದ ಜಿ.ಎಸ್.ಪಾಟೀಲ, ಡಾ.ಚಂದ್ರು ಲಮಾಣಿ, ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ, ಮಾಜಿ ಸಚಿವ ಎಸ್.ಎಸ್.ಪಾಟೀಲ, ವಾಸಣ್ಣ ಕುರಡಗಿ ಅವರು ಮುಖ್ಯಅತಿಥಿಗಳಾಗಿ ಆಗಮಿಸುವರು ಎಂದು ತಿಳಿಸಿದರು.
ರೋಟರಿ ಶಿಕ್ಷಣ ಸಂಸ್ಥೆ ಗೌರವ ಕಾರ್ಯದರ್ಶಿ ಕೊಟ್ರೇಶ ಅಂಗಡಿ ಮಾತನಾಡಿ, ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಕಾರ್ಯದರ್ಶಿ ಶಿವಾನಂದ ಪಟ್ಟಣಶೆಟ್ಟಿ, ಅವ್ವ ಸೇವಾ ಟ್ರಸ್ಟ್ ಗದಗ ಸಂಚಾಲಕ ಡಾ.ಬಸವರಾಜ ಧಾರವಾಡ, ಜಗದ್ಗುರು ಅನ್ನದಾನೀಶ್ವರ ವಿದ್ಯಾ ಸಮಿತಿ ಅಡಳಿತಾಧಿಕಾರಿ ಡಾ.ಬಿ.ಜಿ.ಜವಳಿ ವಿವಿಧ ವಿಷಯ ಕುರಿತು ಉಪನ್ಯಾಸ ನೀಡುವರು. ಖಾಸಗಿ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿ 2022-23ನೇ ಸಾಲಿನಲ್ಲಿ ನಿವೃತ್ತಿ ಹೊಂದಿದ ನೌಕರರನ್ನು ಸನ್ಮಾನಿಸಲಾಗುವುದು ಎಂದರು.
ಮಾಧ್ಯಮಿಕ ಶಾಲಾ ನೌಕರರ ಸಂಘ ತಾಲೂಕು ಅಧ್ಯಕ್ಷ ಡಿ.ಜಿ. ಪೂಜಾರ, ಎಸ್.ಎನ್. ಅಗಡಿ, ಮೈಲಾರಪ್ಪ ಕಲಕೇರಿ, ಸಿ.ವಿ.ಪಾಟೀಲ, ಎಸ್.ಡಿ.ರಾಠೋಡ ಇದ್ದರು.