ಮಂಡ್ಯ: ಇತ್ತೀಚಿನ ವರ್ಷಗಳಲ್ಲಿ ಯುವಜನರಲ್ಲಿ ಏಡ್ಸ್ ಸೋಂಕು ಹೆಚ್ಚು ಕಂಡುಬರುತ್ತಿದೆ ಎಂದು ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕದ ಜಿಲ್ಲಾ ಕಾರ್ಯಕ್ರಮಾಧಿಕಾರಿ ಡಾ.ಆಶಾಲತಾ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ನಗರದ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಯೋಜಿಸಿದ್ದ ವಿಶ್ವ ಏಡ್ಸ್ ಹಾಗೂ ಸಂವಿಧಾನ ದಿನ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
2022-23ನೇ ಸಾಲಿನಲ್ಲಿ ಅಕ್ಟೋಬರ್ ಅಂತ್ಯದವರೆಗೆ 56,824 ಜನರು ಪರೀಕ್ಷೆಗೆ ಒಳಗಾಗಿದ್ದು, ಈ ಪೈಕಿ 217 ಜನರಿಗೆ ಎಚ್‌ಐವಿ ಸೋಂಕು ಕಂಡುಬಂದಿದೆ. ಅಂತೆಯೇ 16,784 ಗರ್ಭಿಣಿಯರು ಪರೀಕ್ಷೆಗೊಳಪಡಿಸಿದ್ದು, ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಒಟ್ಟಾರೆ 2015ರಿಂದ ವರದಿಯನ್ನು ಪರಿಗಣಿಸಿದರೆ ಸೋಂಕು ಕಡಿಮೆಯಾಗಿದ್ದರೂ, ಪತ್ತೆಯಾಗುತ್ತಿರುವವರ ಪೈಕಿ ಯುವಜನರೇ ಹೆಚ್ಚಿದ್ದಾರೆ ಎಂದರು.
ಏಡ್ಸ್ ಅಂತ್ಯಗೊಳಿಸಿ ಅಸಮಾನತೆಯನ್ನು ಕೊನೆಗಾಣಿಸಲು ಹಾಗೂ ಪ್ರತಿಯೊಬ್ಬರ ಆರೋಗ್ಯವನ್ನು ಕಾಪಾಡಲು ವಿಶ್ವವೇ ಒಂದಾಗಬೇಕಿದೆ ಎಂಬ ಘೋಷವಾಕ್ಯದೊಂದಿಗೆ ಈ ಬಾರಿಯ ಏಡ್ಸ್ ದಿನವನ್ನು ಆಚರಿಸಲಾಗುತ್ತಿದೆ. ಜಿಲ್ಲೆಯಲ್ಲಿ ಸೋಂಕಿತರಿಗೆ ಆಪ್ತ ಸಮಾಲೋಚನೆ ಜತೆಗೆ ಪರೀಕ್ಷೆ ಮಾಡಲು 14 ಕೇಂದ್ರಗಳಿವೆ. ಸೋಂಕು ಪತ್ತೆಯಾದ ನಂತರ ಅವರಿಗೆ ಮಂಡ್ಯ ವೈದ್ಯಕೀಯ ಕಾಲೇಜು ಹಾಗೂ ಎಐಎಮ್‌ಎಸ್ ವೈದ್ಯಕೀಯ ಕಾಲೇಜಿನಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲು ಎರಡು ಎಆರ್‌ಟಿ ಕೇಂದ್ರಗಳಿವೆ ಎಂದು ವಿವರಿಸಿದರು.
ಸಮಾರಂಭವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಂ.ನಳಿನಿಕುಮಾರಿ ಉದ್ಘಾಟಿಸಿದರು. ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಎನ್.ಧನಂಜಯ, ಜಿಲ್ಲಾ ಕಾರಾಗೃಹದ ಅಧೀಕ್ಷಕ ಲೋಕೇಶ್, ಮಿಮ್ಸ್ ನಿರ್ದೇಶಕ ಡಾ.ಬಿ.ಜಿ.ಮಹೇಂದ್ರ, ಸಮುದಾಯ ವೈದ್ಯಶಾಸ್ತ ವಿಭಾಗದ ಸಹ ಪ್ರಾಧ್ಯಾಪಕ ಡಾ.ಸುಭಾಷ್‌ಬಾಬು, ಆರ್‌ಸಿಎಚ್ ಅಧಿಕಾರಿ ಡಾ.ಅನಿಲ್‌ಕುಮಾರ್, ವಕೀಲರ ಸಂಘದ ಅಧ್ಯಕ್ಷ ಎಂ.ಟಿ.ರಾಜೇಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಾಗರಾಜು, ಕಾಲೇಜಿನ ಪ್ರಾಂಶುಪಾಲ ಡಾ.ಮಹಾಲಿಂಗೇಗೌಡ ಇತರರಿದ್ದರು.
ಜಾಗೃತಿ ಜಾಥಾ: ಏಡ್ಸ್ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಡಿಸಿ ಕಚೇರಿ ಆವರಣದಲ್ಲಿ ಜಾಗೃತಿ ಜಾಥಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಚಾಲನೆ ನೀಡಿದರು.
ಬಳಿಕ ಮಾತನಾಡಿ, ಏಡ್ಸ್ ಮಾರಣಾಂತಿಕ ರೋಗ. ಇದನ್ನು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿಲ್ಲ. ಆದ್ದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಜಾಗೃತಿ ಅಗತ್ಯವಾಗಿದೆ. 2030ರ ಅಂತ್ಯದೊಳಗೆ ಏಡ್ಸ್ ನಿವಾರಣೆ ಮಾಡಬೇಕೆಂಬ ಉದ್ದೇಶ ಕೇಂದ್ರ ಸರ್ಕಾರಕ್ಕಿದೆ. ಇದಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಳಿನಿಕುಮಾರಿ, ಮಂಡ್ಯ ಉಪವಿಭಾಗಾಧಿಕಾರಿ ಕೀರ್ತನಾ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಎನ್.ಧನಂಜಯ, ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕದ ಜಿಲ್ಲಾ ಕಾರ್ಯಕ್ರಮಾಧಿಕಾರಿ ಡಾ.ಆಶಾಲತಾ ಇತರರಿದ್ದರು.