ಮಂಡ್ಯ: ಮಕ್ಕಳಿಗೆ ಸರ್ಕಾರ ಕಡ್ಡಾಯ ಮತ್ತು ಉಚಿತ ಶಿಕ್ಷಣ ಜಾರಿಗೆ ತಂದಿದೆ. ಅಂತೆಯೇ ಪ್ರತಿ ಮಗುವಿಗೆ ಶಿಕ್ಷಣ ನೀಡುವುದರಿಂದ ಬಾಲ ಕಾರ್ಮಿಕ ಪದ್ಧತಿ ವಿರೋಧಿ ಚಟುವಟಿಕೆಯನ್ನು ತಡೆಗಟ್ಟಬಹುದು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್ ಅಭಿಪ್ರಾಯಪಟ್ಟರು.
ನಗರದ ಕರ್ನಾಟಕ ಸಂಘದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ವಕೀಲರ ಸಂಘ, ಡಾನ್‌ಬಾಸ್ಕೋ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಬಾಲಕಾರ್ಮಿಕರನ್ನು ಹೆಚ್ಚಾಗಿ ಕೃಷಿ ಚಟುವಟಿಕೆ, ಕಾರ್ಖಾನೆ, ಹೋಟೆಲ್ಗಳಲ್ಲಿ ಹೆಚ್ಚಾಗಿ ಬಳಸಿಕೊಳ್ಳಲಾಗುತ್ತಿದೆ. ಅಂತಹ ಬಾಲಕಾರ್ಮಿಕರನ್ನು ಗುರುತಿಸಿ ಸರಿಯಾದ ರೀತಿ ಶಿಕ್ಷಣ ಸೌಲಭ್ಯವನ್ನು ಒದಗಿಸುವುದು ನಮ್ಮ ಆದ್ಯ ಕರ್ತವ್ಯ ಎಂದು ಹೇಳಿದರು.
ಕಾನೂನಿನ ಸ್ವರೂಪ ಮತ್ತು ಚೌಕಟ್ಟಿನಲ್ಲಿ ಅದಕ್ಕೆ ಸಂರಕ್ಷತೆ ತರುವ ನಿಟ್ಟಿನಲ್ಲಿ ಭಾರತದ ಸಂವಿಧಾನದ 24ನೇ ವಿಧಿಯನ್ವಯ ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಆದ್ದರಿಂದ ಎಲ್ಲರೂ ನಿಯಮವನ್ನು ಪಾಲಿಸಬೇಕು. ಆದರೂ ದೇಶದಲ್ಲಿ ಅನೇಕ ಮಕ್ಕಳು ಬಾಲ ಕಾರ್ಮಿಕರಾಗಿಯೇ ಉಳಿದಿದ್ದಾರೆ. ಇದನ್ನು ತಡೆಗಟ್ಟಲು ಎಲ್ಲರೂ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಮಾತನಾಡಿ, ಅಪಾಯಕಾರಿ ಕೆಲಸಗಳಲ್ಲಿ 18ಕ್ಕಿಂತ ಕಡಿಮೆ ವಯಸ್ಸಿನವರನ್ನು ಬಳಸಿಕೊಳ್ಳಬಾರದು. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಕಾನೂನು ರೀತಿ ಕ್ರಮವನ್ನು ಕೈಗೊಳ್ಳಲಾಗುವುದು. ಡಾನ್‌ಬಾಸ್ಕೋ ಸೇರಿದಂತೆ ಅನೇಕ ಸಂಸ್ಥೆಗಳ ಸಹಾಯದಿಂದ ಬಾಲಕಾರ್ಮಿಕ ಪದ್ಧತಿಗೆ ಒಳಪಟ್ಟ ಮಕ್ಕಳನ್ನು ರಕ್ಷಣೆ ಮಾಡಲಾಗಿದೆ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶೆ ವಾಣಿ ಎ.ಶೆಟ್ಟಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಎನ್.ಧನಂಜಯ, ಪೌರಾಯುಕ್ತ ಆರ್.ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಾಗರಾಜು, ಡಾನ್ ಬಾಸ್ಕೋ ನಿರ್ದೇಶಕ ಫಾದರ್ ಸಜೀಜಾರ್ಜ್, ಬರ್ಡ್ಸ್ ಸಂಸ್ಥೆಯ ನಿರ್ದೇಶಕ ವೆಂಕಟೇಶ್ ಇತರರಿದ್ದರು.