ಜಿಲ್ಲೆ

ವಿಶ್ವ ಅಂಗವಿಕಲರ ದಿನಾಚರಣೆ

Bellari - Heera Nayak

ವಿಜಯಪುರ : ಅಂಗವಿಕಲರು ಅಸಹಾಯಕರಲ್ಲ. ಸದೃಢರಿಗಿಂತಲೂ ವಿಶಿಷ್ಟ ಸಾಧನೆ ಮಾಡಬಲ್ಲರು. ಅವರಿಗೆ ಬೇಕಿರುವುದು ಅನುಕಂಪ ಅಲ್ಲ, ಅವಕಾಶ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ ಹೇಳಿದರು.

ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿಶ್ವ ಅಂಗವಿಕಲರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿಕಲಚೇತನರು ಆತ್ಮ ವಿಶ್ವಾಸ ಹೆಚ್ಚಿಸಿಕೊಂಡು, ಸ್ವಾವಲಂಬಿ ಜೀವನ ನಡೆಸುವ ನಿಟ್ಟಿನಲ್ಲಿ ಸಮಾಜಕ್ಕೆ ಮಾದರಿಯಾಗಬೇಕು. ಮಾನಸಿಕವಾಗಿ, ಸದೃಢರಾಗಿ ಆತ್ಮಸ್ಥೈರ್ಯ ಬೆಳಸಿಕೊಳ್ಳಬೇಕು. ವಿಕಲಚೇತನರಿಗಾಗಿಯೇ ಸರ್ಕಾರ ಅನೇಕ ಸೌಲಭ್ಯ ಒದಗಿಸುತ್ತಿದ್ದು, ಸದ್ಬಳಕೆ ಮಾಡಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೆ.ಕೆ. ಚವ್ಹಾಣ ಮಾತನಾಡಿ, ವಿಕಲಚೇತನ ವಿದ್ಯಾರ್ಥಿಗಳು ಎದೆಗುಂದದೆ ಎಲ್ಲವನ್ನು ಆತ್ಮಸ್ಥೈರ್ಯದಿಂದ ಎದುರಿಸುವ ಪರಿಪಾಠ ಮೈಗೂಡಿಸಿಕೊಳ್ಳಬೇಕು. ಉಜ್ವಲ ಭವಿಷ್ಯ ರೂಪಿಸಿಕೊಳ್ಳುವ ದಿಸೆಯಲ್ಲಿ ಗುರಿ ಇರಬೇಕು ಎಂದರು.

ಜಿಲ್ಲಾ ಪಂಚಾಯಿತಿ ಯೋಜನಾ ಉಪ ನಿರ್ದೇಶಕ ಎ.ಬಿ.ಅಲ್ಲಾಪೂರ ಮಾತನಾಡಿ, ಮತದಾರರ ನೋಂದಣಿ ಅಭಿಯಾನ ಜಿಲ್ಲಾದ್ಯಂತ ನಡೆಯುತ್ತಿದೆ. ಜಿಲ್ಲೆಯಲ್ಲಿ ಮತಗಟ್ಟೆ ಅಧಿಕಾರಿಗಳು ಮನೆ-ಮನೆ ಸಮೀಕ್ಷೆ ಕೈಗೊಂಡಿದ್ದು, 18 ವರ್ಷದ ಯುವ ಮತದಾರರು ಸೇರಿದಂತೆ ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದವರು ಅಗತ್ಯ ದಾಖಲೆ ನೀಡಿ ನೋಂದಾಯಿಸಿಕೊಳ್ಳುವಂತೆ ತಿಳಿಸಿದರು.

ವಿಕಲಚೇತನರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದರು.
ಈಚೆಗೆ ನಗರದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ 2022-23ನೇ ಸಾಲಿನ ಜಿಲ್ಲಾಮಟ್ಟದ ವಿಕಲಚೇತನರ ಕ್ರೀಡಾಕೂಟದಲ್ಲಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಇದೇ ವೇಳೆ ಸಮಾಜ ಸೇವೆ, ಕ್ರೀಡಾ ಕ್ಷೇತ್ರ, ಶಿಕ್ಷಣ ಕೇತ್ರ, ಸ್ವಯಂ ಉದ್ಯೋಗ ಇತ್ಯಾದಿ ಕ್ಷೇತ್ರಗಳಲ್ಲಿ ಮಾಡಿರುವ ಗಣನೀಯ ಸೇವೆ ಗುರುತಿಸಿ ಸಾಧಕರಿಗೆ ಸನ್ಮಾನಿಸಲಾಯಿತು. ಎಸ್‌ಎಸ್‌ಎಲ್‌ಸಿಯಲ್ಲಿ ಅತಿಹೆಚ್ಚು ಅಂಕ ಪಡೆದ ಶ್ರವಣದೋಷವುಳ್ಳ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮಕ್ಕೂ ಮೊದಲು, ಸೆಟಲೈಟ್ ಬಸ್ ನಿಲ್ದಾಣದಿಂದ ಕಂದಗಲ್ ಹನುಮಂತರಾಯ ರಂಗಮಂದಿರದವರೆಗೆ ನಡೆದ ತ್ರಿಚಕ್ರ ವಾಹನ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ರಾಜಶೇಖರ ದೈವಾಡಿ ಚಾಲನೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಜಿ.ಲೋಣಿ, ವಾರ್ತಾಧಿಕಾರಿ ಅಮರೇಶ ದೊಡಮನಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಸ್.ಸಿ ಮ್ಯಾಗೇರಿ, ದೀಪಾಕ್ಷಿ ಜಾನಕಿ, ವಿನೋದ ಖೇಡ, ಚನ್ನಯ್ಯ ಸಾರಂಗಮಠ, ನಿಮಿಷ ಆಚಾರ್ಯ, ಮಲ್ಲಿಕಾರ್ಜುನ ಉಮರಾಣಿ ಮತ್ತಿತರರಿದ್ದರು.