ಮಂಡ್ಯ: ಜಿಲ್ಲಾಡಳಿತದ ವತಿಯಿಂದ ಡಿ.29ರಂದು ವಿಶ್ವ ಮಾನವ ದಿನಾಚರಣೆ ಮತ್ತು ಜ.1ರಂದು ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿಶ್ವ ಮಾನವ ದಿನಾಚರಣೆ ಅಂಗವಾಗಿ 29ರಂದು ಬೆಳಗ್ಗೆ 10 ಗಂಟೆಗೆ ನಗರದ ಆರ್‌ಎಪಿಸಿಎಂಎಸ್ ಆವರಣದಲ್ಲಿರುವ ಕುವೆಂಪು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದು. ನಂತರ ಉಪನ್ಯಾಸ ಹಾಗೂ ಗೀತಗಾಯನ ಕಾರ್ಯಕ್ರಮ ನಡೆಯಲಿದೆ ಎಂದರು.
ಜ.1ರಂದು ಬೆಳಗ್ಗೆ 11ಗಂಟೆಗೆ ಅಮರ ಶಿಲ್ಪಿ ಜಕಣಾಚಾರಿ ಸಂಸ್ಕರಣಾ ದಿನಾಚರಣೆಯನ್ನು ಕಲಾಮಂದಿರದಲ್ಲಿ ಆಯೋಜಿಸಲಾಗಿದೆ. ಉಪನ್ಯಾಸ ಕಾರ್ಯಕ್ರಮಕ್ಕೆ ಮುಖ್ಯ ವ್ಯಕ್ತಿಗಳನ್ನು ಆಹ್ವಾನಿಸಬೇಕು. ಇದೇ ವೇಳೆ ಎಸ್‌ಎಸ್‌ಎಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉದಯ್‌ಕುಮಾರ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಡಾ. ಸಿದ್ದಲಿಂಗೇಶ್, ಪಿಎಸ್‌ಐ ದೇವರಾಜ್, ವಿಶ್ವಕರ್ಮ ಸಮಾಜದ ಮುಖಂಡರಾದ ತೈಲೂರು ಆನಂದಚಾರಿ, ರಘು ಆಚಾರ್, ಕೃಷ್ಣಕುಮಾರ್, ಪ್ರಸನ್ನ, ಸುದರ್ಶನ್, ರಮೇಶ್, ಅಮಿತ್, ಮೋಹನ್‌ಕುಮಾರ್ ಇತರರಿದ್ದರು.