ಹುಬ್ಬಳ್ಳಿ: ಇಲ್ಲಿಯ ವಿದ್ಯಾನಗರ ಕೆಎಲ್ಇ ಸಂಸ್ಥೆಯ ಶುಶ್ರೂಷಾ ವಿಜ್ಞಾನ ಮಹಾವಿದ್ಯಾಲಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನವನ್ನು ಮಂಗಳವಾರ ಆಚರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿದ ಖ್ಯಾತ ಮನೋರೋಗ ತಜ್ಞ ಡಾ. ಆನಂದ ಪಾಂಡುರಂಗಿ, ಇಂದಿನ ಜಂಜಾಟದ ಬದುಕಿನಲ್ಲಿ ಮಾನಸಿಕ ಆರೋಗ್ಯ ಕಾಯ್ದುಕೊಳ್ಳುವುದು ಸವಾಲಿನ ಕೆಲಸ. ಯಾವುದೇ ಕಾರಣಕ್ಕೂ ಆತ್ಮಹತ್ಯೆಯಂತಹ ಕೆಲಸಕ್ಕೆ ಯಾರೂ ಕೈ ಹಾಕಬಾರದು. ಮನಸ್ಸಿನ ಕಾಯಿಲೆಗಳ ಬಗ್ಗೆ ಸಮಾಜದಲ್ಲಿ ಇರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು ಇಂದಿನ ಅಗತ್ಯವಾಗಿದೆ ಎಂದರು.
ಎಸ್ಡಿಎಂ ವೈದ್ಯಕಿಯ ಮಹಾವಿದ್ಯಾಲಯದ ತಜ್ಞೆ ಸುಷ್ಮಾ ಜೈನ್ ಮಾತನಾಡಿ, ಜೀವನ ಕಲೆ ರೂಢಿಸಿಕೊಂಡರೆ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು ಸುಲಭ ಎಂದರು.
ನರ್ಸಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಸಂಜಯ ಪೀರಾಪುರ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾಥಿರ್ಗಳಿಗೆ ಪೋಸ್ಟರ್ ಬರೆಯುವ ಸ್ಪರ್ಧೆ ಏರ್ಪಡಿಸಲಾಗಿತ್ತು.
ಸಹಾಯಕ ಪ್ರಾಧ್ಯಾಪಕ ಅನಿಲಕುಮಾರ ಜರಲಿ ಸ್ವಾಗತಿಸಿದರು. ಮಾಳವಿಕಾ ಕಾರ್ಯಕ್ರಮ ನಿರೂಪಿಸಿದರು. ಮೇರಿ ಗ್ಲೋರಿ ವಂದಿಸಿದರು.