ಜಿಲ್ಲೆ

ವಿಶ್ವಾಸಾರ್ಹತೆ ಉಳಿಸಿಕೊಂಡಿರುವ ಪತ್ರಿಕೆಗಳು

ರೇವಣಸಿದ್ದಪ್ಪ ಪಾಟೀಲ್

ಭಾಲ್ಕಿ: ಸಾಮಾಜಿಕ ಜಾಲತಾಣದ ಅಬ್ಬರದಲ್ಲಿ ಪತ್ರಿಕೆ ಓದುಗರ ಸಂಖ್ಯೆ ಕಡಿಮೆ ಆಗುತ್ತಿದೆ ಎನ್ನುವ ಆತಂಕ ಎದುರಾಗಿದೆ. ಆದರೂ ಪತ್ರಿಕೆಗಳು ಇಂದಿಗೂ ತನ್ನ ಜವಾಬ್ದಾರಿ ನಿರ್ವಹಿಸಿಕೊಂಡು ವಿಶ್ವಾಸಾರ್ಹತೆ ಉಳಿಸಿಕೊಂಡು ಬಂದಿವೆ ಎಂದು ಬಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ರಾಧಾ ಬಹೆನ್ ಹೇಳಿದರು.
ಜನಕಲ್ಯಾಣ ಶಿಕ್ಷಣ-ಗ್ರಾಮೀಣಾಭಿವೃದ್ಧಿ ಟ್ರಸ್ಟ್, ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಾನೇಕರ್ ಅಭಿಮಾನಿ ಬಳಗದ ವತಿಯಿಂದ ಪಟ್ಟಣದ ಪುರಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ಪತ್ರಿಕೆ ಓದುವ ಹವ್ಯಾಸ ಎಲ್ಲರಲ್ಲಿ ಬೆಳೆಯಬೇಕು ಎಂದು ತಿಳಿಸಿದರು.
ಜಗತ್ತಿನ ಪ್ರಚಲಿತ ವಿದ್ಯಮಾನಗಳು ಅರಿಯಲು ಪತ್ರಿಕೆಗಳು ಅತ್ಯಂತ ಸಹಕಾರಿಯಾಗಿವೆ. ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಪತ್ರಿಕೆಗಳ ಪಾತ್ರ ದೊಡ್ಡದಿದೆ. ಪತ್ರಕರ್ತರು ನಿಷ್ಪಕ್ಷಪಾತವಾಗಿ ಕೆಲಸ ನಿರ್ವಹಿಸಬೇಕು ಎಂದು ಹೇಳಿದರು.
ತಹಸೀಲ್ದಾರ್ ಮಲ್ಲಿಕಾರ್ಜುನ ವಡ್ಡನಕೇರೆ ಮಾತನಾಡಿ, ಸಮಾಜದ ಕುಂದುಕೊರತೆಗಳನ್ನು ಎತ್ತಿ ತೋರಿಸಿ ಜನರಿಗೆ ನ್ಯಾಯ ಒದಗಿಸುವಲ್ಲಿ ಪತ್ರಿಕೆಗಳ ಪಾತ್ರ ಹಿರಿಯದಾಗಿದೆ. ಪತ್ರಕರ್ತರು ಹಾಗೂ ಮಾಧ್ಯಮ ಸಂಸ್ಥೆಗಳು ವಸ್ತುನಿಷ್ಠ ಸುದ್ದಿಗಳಿಗೆ ಆದ್ಯತೆ ನೀಡಬೇಕು ಎಂದು ಹೇಳಿದರು.
ಕಲಬುರಗಿಯ ಹಿರಿಯ ಸಾಹಿತಿ ಡಾ.ಗವಿಸಿದ್ದಪ್ಪ ಪಾಟೀಲ್ ಮಾತನಾಡಿ, ಸಮಾಜವನ್ನು ತಿದ್ದುವ ಕೆಲಸ ಪತ್ರಿಕೆಗಳು ಮಾಡುತ್ತಿವೆ. ಜಾತಿ, ಗಡಿ ಮೀರಿ ಪತ್ರಿಕೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಹಿರೇಮಠ ಸಂಸ್ಥಾನದ ಶ್ರೀ ಮಹಾಲಿಂಗ ಸ್ವಾಮೀಜಿ ಮಾತನಾಡಿ, ಸಮಾಜದಲ್ಲಿ ಅನೇಕ ಎಲೆಮರೆ ಕಾಯಿಯಂತೆ ಇರುವ ಪ್ರತಿಭೆಗಳನ್ನು ಸಮಾಜಕ್ಕೆ ಪರಿಚಯಿಸುವ ಜತೆಗೆ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಪ್ರಾಮಾಣಿಕ ಪ್ರಯತ್ನ ಮಾಧ್ಯಮಗಳು ಮಾಡುತ್ತಿವೆ ಎಂದರು.
ಬೇಲೂರು ಮಠದ ಶ್ರೀ ಪಂಚಾಕ್ಷರಿ ಸ್ವಾಮೀಜಿ ಸಾನ್ನಿಧ್ಯ, ಜನಕಲ್ಯಾಣ ಟ್ರಸ್ಟ್ ಅಧ್ಯಕ್ಷ ಸುರೇಶ ಕಾನೇಕರ್ ಅಧ್ಯಕ್ಷತೆ ವಹಿಸಿದ್ದರು. ನಗರ ಠಾಣೆ ಸಿಪಿಐ ಅಂಬರೀಶ್, ಎಆರ್ ಟಿಓ ಜಾಫರ್, ವಕೀಲ ಶಿವಕುಮಾರ ಕೇರೂರೆ ಇತರರಿದ್ದರು.
ಕಾರ್ಯಕ್ರಮದಲ್ಲಿ ರಾಜ್ಯ ಶ್ರೇಷ್ಠ ವೈದ್ಯ ಪ್ರಶಸ್ತಿ ಪುರಸ್ಕೃತೆ ಡಾ.ಸಂಧ್ಯಾ ಸುರೇಶ ಕಾನೇಕರ್ ದಂಪತಿ ಹಾಗೂ ಪತ್ರಕರ್ತರನ್ನು ಸನ್ಮಾನಿಸಲಾಯಿತು. ಪತ್ರಕರ್ತರ ಸಂಘದ ತಾಲೂಕಾಧ್ಯಕ್ಷ ಜಯರಾಜ ದಾಬಶೆಟ್ಟೆ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ದೀಪಕ ಠಮಕೆ ನಿರೂಪಣೆ ಮಾಡಿದರು. ಗಣಪತಿ ಬೋಚರೆ ವಂದಿಸಿದರು.