ಬೀದರ್: ಪೌರ ಕಾರ್ಮಿಕರ ಬಹು ದಿನಗಳ ಬೇಡಿಕೆಗೆ ಸ್ಪಂದಿಸಿ ರಾಜ್ಯ ಸರ್ಕಾರ ರಾಜ್ಯದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಮಹಾ ನಗರ ಪಾಲಿಕೆಗಳು ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ನೇರ ಪಾವತಿಗೆ ಒಳಪಟ್ಟ ೨,೧೨೭ ಪೌರ ಕಾರ್ಮಿಕರನ್ನು ಕಾಯಂಗೊಳಿಸಿದೆ ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ತಿಳಿಸಿದರು.
ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ವತಿಯಿಂದ ನಗರದ ಜನವಾಡ ರಸ್ತೆಯಲ್ಲಿ ಇರುವ ಝೀರಾ ಕನ್ವೆನ್ಷನ್ ಹಾಲ್‌ನಲ್ಲಿ ಶುಕ್ರವಾರ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ
ಕಾರ್ಯದರ್ಶಿ ಟಿ. ಮಂಜುನಾಥ ಈ ಕುರಿತು ಆದೇಶ ಹೊರಡಿಸಿದ್ದಾರೆ ಎಂದು ಹೇಳಿದರು.
ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಒಂದು ದಿನದ ರಜೆ ಕೂಡ ಘೋಷಿಸಲಾಗಿದೆ ಎಂದು ತಿಳಿಸಿದರು.
ಬರುವ ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ವಾಟರ್ ಮೆನ್ ಹಾಗೂ ಚಾಲಕರ ಸೇವೆಯನ್ನು ಕಾಯಂಗೊಳಿಸುವ ದಿಸೆಯಲ್ಲಿ ಚಿಂತನೆ ನಡೆದಿದೆ ಎಂದು ಹೇಳಿದರು.
ನಗರ, ಪಟ್ಟಣಗಳನ್ನು ಸ್ವಚ್ಛ, ಸುಂದರವಾಗಿಸುವಲ್ಲಿ ಪೌರ ಕಾರ್ಮಿಕರ ಪಾತ್ರ ಬಹಳ ಮಹತ್ವದ್ದಾಗಿದೆ. ಪೌರ ಕಾರ್ಮಿಕರನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ತಿಳಿಸಿದರು.
ಹೊರ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ೪೮ ಮಂದಿಗೆ ನೇಮಕಾತಿ ಆದೇಶ ಪತ್ರ ವಿತರಿಸಿದರು. ಸಂಸದ ಸಾಗರ್ ಖಂಡ್ರೆ ಮಾತನಾಡಿದರು. ಆದಿಜಾಂಬವ ನಿಗಮದ ಅಧ್ಯಕ್ಷ ಮಂಜುನಾಥ, ರಾಜ್ಯ ಪೌರ ನೌಕರರ ಸಂಘದ ರಾಜ್ಯ ಅಧ್ಯಕ್ಷ ಕೆ. ಪ್ರಭಾಕರ, ಕಾರ್ಯಾಧ್ಯಕ್ಷ ಸುರೇಶ ಬಬಲಾದ, ಪ್ರಧಾನ ಕಾರ್ಯದರ್ಶಿ ಎಂ. ಗುರುನಾಥ, ಜಿಲ್ಲಾ ಅಧ್ಯಕ್ಷ ಸೈಯದ್ ಖಾನ್, ಪ್ರಧಾನ ಕಾರ್ಯದರ್ಶಿ ಸುಭಾಷ್ ಧನ್ನೂರಕರ್ ಮತ್ತಿತರರು ಉಪಸ್ಥಿತರಿದ್ದರು.