ಬೀದರ್: ಕೇಂದ್ರ ಪುರಸ್ಕೃತ ಮೆಟ್ರಿಕ್ ಪೂರ್ವ (9ನೇ, 10ನೇ) ವಿದ್ಯಾರ್ಥಿ ವೇತನ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಹಾಗೂ ಸಂಬಂಧಪಟ್ಟ ಶಾಲೆಯ ನೋಡಲ್ ಅಧಿಕಾರಿ/ ಸಬಲೀಕರಣ ಅಧಿಕಾರಿಯ ಆಧಾರ್ ಆಧಾರಿತ ಬಯೋಮೆಟ್ರಿಕ್ ಇ-ದೃಢೀಕರಣ ಕಡ್ಡಾಯಗೊಳಿಸಲಾಗಿದೆ.
2024-25ನೇ ಸಾಲಿನಲ್ಲಿ ಎಸ್.ಎಸ್.ಪಿ. ತಂತ್ರಾಂಶದಲ್ಲಿ ಜಾತಿ, ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಪಾಸ್‍ಬುಕ್ ಮತ್ತು ಪಡಿತರ ಚೀಟಿಯೊಂದಿಗೆ ಔರಾದ್ ತಾಲ್ಲೂಕಿನ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಸಲ್ಲಿಸಿದ ಅರ್ಜಿ ವಿವರಗಳು ಸರಿಯಾಗಿದ್ದಲ್ಲಿ ಬಯೋಮೆಟ್ರಿಕ್ ಇ- ದೃಢೀಕರಣ ಮಾಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಔರಾದ್ ತಾಲ್ಲೂಕು ಸಹಾಯಕ ನಿರ್ದೇಶಕ ಅನಿಲಕುಮಾರ ಮೇಲ್ದೊಡ್ಡಿ ತಿಳಿಸಿದ್ದಾರೆ.
ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಬಯೋಮೆಟ್ರಿಕ್ ಇ-ದೃಢೀಕರಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಶಾಲಾ, ಕಾಲೇಜುಗಳ ಮುಖ್ಯಸ್ಥರು ವಿದ್ಯಾರ್ಥಿಗಳು ಸಲ್ಲಿಸಿದ ಅರ್ಜಿಯ ವಿವರ ದೃಢೀಕರಣಕ್ಕೆ ಸಂಸ್ಥೆಯ ನೋಡಲ್ ಅಧಿಕಾರಿ/ ಸಬಲೀಕರಣ ಅಧಿಕಾರಿಗಳನ್ನು ಆಯ್ಕೆ ಮಾಡಿ, ಅವರಿಂದ ಇ- ಬಯೋಮೆಟ್ರಿಕ್ ದೃಢೀಕರಣ ಮಾಡಿಸಬೇಕು ಎಂದು ತಿಳಿಸಿದ್ದಾರೆ.