ಬೀದರ್: ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಕುಮಾರ ಶೆಟ್ಟಿ ಬಣ) ವತಿಯಿಂದ 69ನೇ ಕರ್ನಾಟಕ ರಾಜ್ಯೋತ್ಸವ, ಕರ್ನಾಟಕ ಸಂಭ್ರಮ-50 ಹಾಗೂ ಜಿಲ್ಲಾಮಟ್ಟದ ಕಾಯಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ನ.21ರಂದು ನಗರದಲ್ಲಿ ಅದ್ದೂರು, ಅರ್ಥಪೂರ್ಣವಾಗಿ ಆಯೋಜಿಸಲಾಗಿದೆ ಎಂದು ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಪೀಟರ ಚಿಟಗುಪ್ಪ ತಿಳಿಸಿದ್ದಾರೆ.
ನ.21ರಂದು ಬೆಳಗ್ಗೆ 8 ಗಂಟೆಗೆ ನಗರದ ಬಿ.ವಿ. ಭೂಮರಡ್ಡಿ ಕಾಲೇಜುದಿಂದ ಪೂಜ್ಯ ಡಾ.ಚನ್ನಬಸವ ಪಟ್ಟದ್ದೇವರು ರಂಗಮಂದಿರ ವರೆಗೆ ಒಂದು ಕಿ.ಮೀ. ನಾಡ ಧ್ವಜ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ನಂತರ ರಂಗಮಂದಿರದಲ್ಲಿ ಬೆಳಗ್ಗೆ 11.30ಕ್ಕೆ ಕರ್ನಾಟಕ ರಾಜ್ಯೋತ್ಸವ, ಕರ್ನಾಟಕ ಸಂಭ್ರಮ-50 ಹಾಗೂ ಜಿಲ್ಲಾಮಟ್ಟದ ಕಾಯಕ ರತ್ನ ಪ್ರಶಸ್ತಿ ಸಮಾರಂಭ ನಡೆಯಲಿದೆ. ಅರಣ್ಯ, ಜೀವಶಾಸ್ತ್ರ, ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಉದ್ಘಾಟಿಸಲಿದ್ದಾರೆ. ಜೈ ಭಾರತ ಸೇವಾ ಸಮಿತಿ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಹವಾ ಮಲ್ಲಿನಾಥ ಮಹಾರಾಜರು ದಿವ್ಯ ಸಾನ್ನಿಧ್ಯ, ಕರವೇ ರಾಜ್ಯಾಧ್ಯಕ್ಷ ಪ್ರವೀಣಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸುವರು. ವಿಶೇಷ ಆಹ್ವಾನಿತರಾಗಿ ಪೌರಾಡಳಿತ ಮತ್ತು ಹಜ್ ಖಾತೆ ಸಚಿವ ರಹೀಮ ಖಾನ್, ಲೋಕಸಭೆ ಸದಸ್ಯ ಸಾಗರ್ ಖಂಡ್ರೆ, ಬೀದರ್ ದಕ್ಷಿಣ ಕ್ಷೇತ್ರ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ಮಾಜಿ ಸಚಿವರಾದ ಬಂಡೆಪ್ಪ ಖಾಶೆಂಪುರ, ರಾಜಶೇಖರ ಪಾಟೀಲ್ ಇತರರು ಪಾಲ್ಗೊಳ್ಳುವರು ಎಂದು ತಿಳಿಸಿದ್ದಾರೆ.
ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಕರವೇ ಕಾರ್ಯಕರ್ತರು ಭಾಗವಹಿಲಿದ್ದಾರೆ. ಸಮಾರಂಭದಲ್ಲಿ ವಿವಿಧ ಕ್ಷೇತ್ರದ 105 ಸಾಧಕರಿಗೆ ಜಿಲ್ಲಾಮಟ್ಟದ ಪ್ರಶಸ್ತಿ ಪ್ರದಾನ ಮಾಡಲಾಗುವುದು. ನಾಡಿನ ಏಕತೆ, ಭಾವೈಕ್ಯತೆಯನ್ನು ಸಾರಲು ಹಾಗೂ ಸಾಹಿತ್ಯ, ಸಂಸ್ಕೃತಿ ಪ್ರೇರಣೆ ನೀಡುವ ನಿಟ್ಟಿನಲ್ಲಿ ಒಂದು ಕಿ.ಮೀ. ನಾಡ ಧ್ವಜ ಮೆರವಣಿಗೆ ಇದೆ. ವಿದ್ಯಾರ್ಥಿಗಳು, ಕನ್ನಡ ಅಭಿಮಾನಿಗಳು ಹೆಚ್ಚನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ವೇದಿಕೆ (ಪ್ರವೀಣಕುಮಾರ ಶೆಟ್ಟಿ ಬಣ) ಜಿಲ್ಲಾಧ್ಯಕ್ಷ ಪೀಟರ ಚಿಟಗುಪ್ಪ ಮನವಿ ಮಾಡಿದ್ದಾರೆ.