ಜಿಲ್ಲೆ

ಖರ್ಗೆ ಕುಟುಂಬದ ವಿರುದ್ಧ ಬಿಜೆಪಿ ದ್ವೇಷ ರಾಜಕೀಯ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಜಿಲ್ಲೆಯ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಖರ್ಗೆ ಕುಟುಂಬದ ವಿರುದ್ಧ ದ್ವೇಷ ರಾಜಕೀಯ ಮಾಡುತ್ತಿದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವಿನೋದಕುಮಾರ ಅಪ್ಪೆ ಆರೋಪಿಸಿದ್ದಾರೆ.

ಆತ್ಮಹತ್ಯೆ ಪ್ರಕರಣಕ್ಕೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೂ ಸಂಬಂಧವೇ ಇಲ್ಲ. ಬಿಜೆಪಿಯವರು ಪ್ರಿಯಾಂಕ್ ಅವರ ಬೆಳವಣಿಗೆ ಸಹಿಸದೆ ಪ್ರಕರಣದಲ್ಲಿ ಅವರ ಹೆಸರು ಎಳೆದು ತಂದು, ರಾಜೀನಾಮೆಗೆ ಒತ್ತಾಯಿಸುತ್ತಿರುವುದು ಕೀಳು ಮಟ್ಟದ ರಾಜಕೀಯವಾಗಿದೆ ಎಂದು ಟೀಕಿಸಿದ್ದಾರೆ.

ಸ್ವತಃ ಪ್ರಿಯಾಂಕ್ ಖರ್ಗೆ ಅವರೇ ಸಚಿನ್ ಆತ್ಮಹತ್ಯೆ ಪ್ರಕರಣದ ಸತ್ಯಾಸತ್ಯತೆ ಹೊರ ಬರಲು ಸಿಐಡಿ ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ ಪ್ರಕರಣವನ್ನು ಸಿಐಡಿಗೆ ವಹಿಸಿದೆ ಎಂದು ಹೇಳಿದ್ದಾರೆ.

ಬಿಜೆಪಿಯವರು ಕೇಂದ್ರದಿಂದ ಕಲ್ಯಾಣ ಕರ್ನಾಟಕ ಹಾಗೂ ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತರುವ ಬದಲು ಖರ್ಗೆ ಕುಟುಂಬದ ವಿರುದ್ಧ ಟೀಕೆ ಮಾಡುವುದನ್ನೇ ದೊಡ್ಡ ಕೆಲಸ ಮಾಡಿಕೊಂಡಿದ್ದಾರೆ. ಖರ್ಗೆ ಕುಟುಂಬದ ವಿರುದ್ಧ ಹೇಳಿಕೆ ಕೊಡುವುದಕ್ಕಾಗಿಯೇ ಛಲವಾದಿ ನಾರಾಯಣಸ್ವಾಮಿ ಅವರನ್ನು ವಿಧಾನ ಪರಿಷತ್ ಸದಸ್ಯ ಹಾಗೂ ವಿರೋಧ ಪಕ್ಷದ ನಾಯಕರನ್ನಾಗಿ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.

ಬಿಜೆಪಿಯವರು ಸಚಿವರು, ಸರ್ಕಾರದ ವಿರುದ್ಧ ಮಿಥ್ಯ ಆರೋಪ ಮಾಡಿ, ಜನರನ್ನು ತಪ್ಪು ದಾರಿಗೆ ಎಳೆಯುವುದನ್ನು ಈಗಲಾದರೂ ಬಿಡಬೇಕು ಎಂದು ಒತ್ತಾಯಿಸಿದ್ದಾರೆ.