ಬೀದರ್: ತಾಲ್ಲೂಕಿನ ಗಾದಗಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಯುವ ಮುಖಂಡ ವಿಜಯಕುಮಾರ ಎಸ್. ಪಾಟೀಲ ಗಾದಗಿ ಹಾಗೂ ಉಪಾಧ್ಯಕ್ಷರಾಗಿ ವಿರೂಪಾಕ್ಷ ಆನಂದೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಘದಲ್ಲಿ ಸೋಮವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಏಕೈಕ ನಾಮಪತ್ರ ಸಲ್ಲಿಕೆಯಾಗಿದ್ದವು. ಹೀಗಾಗಿ ಚುನಾವಣಾಧಿಕಾರಿ ಆಯ್ಕೆಯನ್ನು ಅಧಿಕೃತವಾಗಿ ಪ್ರಕಟಿಸಿದರು.
ಎಂ.ಎಸ್ಸಿ ಕೃಷಿ ಪದವೀಧರರಾದ ಗಾದಗಿ ಗ್ರಾಮದ ವಿಜಯಕುಮಾರ ಎಸ್. ಪಾಟೀಲ ಗಾದಗಿ ಎರಡು ದಶಕದಿಂದ ಸಹಕಾರ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಮೂರು ಅವಧಿಗೆ ಬೀದರ್ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಗುರುಪಾದಪ್ಪ ನಾಗಮಾರಪಳ್ಳಿ ಮಲ್ಟಿ ಸೂಪರ್ ಸ್ಪೆಷಾಲಿಟಿ ಸಹಕಾರ ಆಸ್ಪತ್ರೆಯ ನಿರ್ದೇಶಕ ಹಾಗೂ ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿದ್ದಾರೆ. ಸ್ನೇಹ ಜೀವಿಯಾದ ಅವರು ತಮ್ಮದೇ ಆದ ಯುವ ಬೆಂಬಲಿಗರ ಪಡೆಯನ್ನು ಹೊಂದಿದ್ದಾರೆ.
ನನ್ನ ಅವಿರೋಧ ಆಯ್ಕೆಗೆ ಸಹಕರಿಸಿದ ನಿರ್ದೇಶಕರು, ಸಂಘದ ಸದಸ್ಯರು ಹಾಗೂ ಗ್ರಾಮದ ಮುಖಂಡರಿಗೆ ಕೃತಜ್ಞತೆ ಸಲ್ಲಿಸುವೆ. ಸಹಕಾರ ಸಂಘವನ್ನು ಮುಖ್ಯ ವಾಹಿನಿಗೆ ತರಲು ಶ್ರಮಿಸುವೆ. ರೈತರ ಸಮಸ್ಯೆಗಳನ್ನು ಪರಿಹರಿಸಲು ಹಾಗೂ ಸರ್ಕಾರದ ಯೋಜನೆಗಳನ್ನು ಅರ್ಹ ರೈತರಿಗೆ ತಲುಪಿಸಲು ಶಕ್ತಿ ಮೀರಿ ಪ್ರಯತ್ನಿಸುವೆ ಎಂದು ವಿಜಯಕುಮಾರ ಪಾಟೀಲ ಗಾದಗಿ ಭರವಸೆ ನೀಡಿದರು.