ಬೀದರ್: ಔರಾದ್ ಪಟ್ಟಣದ ಒಂದು ಸಾವಿರ ಬಡ ಫಲಾನುಭವಿಗಳಿಗೆ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ ಮೂಲಕ ಮನೆ ಮಂಜೂರು ಮಾಡಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಮಿಕ ವಿಭಾಗದ ಕಾರ್ಯದರ್ಶಿ ಜಾನ್ಸನ್ ಘೋಡೆ ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಈ ಕುರಿತು ಅವರು ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಔರಾದ್ ರಾಜ್ಯದ ಅತ್ಯಂತ ಹಿಂದುಳಿದ ತಾಲ್ಲೂಕು ಆಗಿದೆ. ಬಹಳಷ್ಟು ಬಡ ಜನರು ಈಗಲೂ ಗುಡಿಸಲುಗಳಲ್ಲಿ ವಾಸವಾಗಿದ್ದಾರೆ ಎಂದು ಹೇಳಿದ್ದಾರೆ.
ಪಟ್ಟಣ ಪಂಚಾಯಿತಿಗೆ 10 ಎಕರೆ ಜಮೀನು ಒದಗಿಸಿ, ಅದರ ಮೂಲಕ ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.