ಜಿಲ್ಲೆ

ಶಾಲಾ, ಕಾಲೇಜು ಅನುದಾನಕ್ಕೆ ಆಗ್ರಹಿಸಿ 19ಕ್ಕೆ ಬೆಂಗಳೂರಿನಲ್ಲಿ ಪ್ರತಿಭಟನೆ

ರೇವಣಸಿದ್ದಪ್ಪ ಪಾಟೀಲ್

ಬೀದರ್: 1995 ರ ನಂತರ ಆರಂಭವಾದ ಖಾಸಗಿ ಶಾಲಾ, ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸುವುದು ಸೇರಿದಂತೆ ಆರು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಗಸ್ಟ್ 19 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘದ ರಾಜ್ಯ ಅಧ್ಯಕ್ಷ ರೇವಣಸಿದ್ದಪ್ಪ ಜಲಾದೆ ಹೇಳಿದರು.

ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಆರ್‍ಟಿಇ ಮರು ಜಾರಿಗೊಳಿಸಬೇಕು. ಶಾಲೆಗಳ ನವೀಕರಣ ಷರತ್ತು ಸಡಿಲಿಸಬೇಕು. ಅನುದಾನಿತ ಶಾಲಾ, ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ಕನ್ನಡ ಶಾಲೆಗಳನ್ನು ಆಂಗ್ಲ ಮಾಧ್ಯಮ ಶಾಲೆಗಳಾಗಿ ಪರಿವರ್ತಿಸುವುದನ್ನು ಕೈಬಿಡಬೇಕು. ಅನಧಿಕೃತ ಕೋಚಿಂಗ್ ಸೆಂಟರ್‍ಗಳನ್ನು ಮುಚ್ಚಬೇಕು ಎಂಬುದು ಸಂಘದ ಇತರ ಬೇಡಿಕೆಗಳಾಗಿವೆ ಎಂದು ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕನ್ನಡ ಶಾಲೆಗಳನ್ನು ಉಳಿಸಿ, ಕರ್ನಾಟಕ ಉಳಿಸಿ ಘೋಷವಾಕ್ಯದಡಿ ನಡೆಯಲಿರುವ ಹೋರಾಟದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು, ಕನ್ನಡ ಪರ ಸಂಘ ಸಂಸ್ಥೆಗಳು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಐದು ವರ್ಷಗಳ ಅವಧಿಯಲ್ಲಿ ಮುಖ್ಯಮಂತ್ರಿ ಅವರ ಕಚೇರಿಗೆ ಬಂದವರ ಕಾಫಿ, ತಿಂಡಿಗೆ ರೂ. 200 ಕೋಟಿ ವೆಚ್ಚವಾಗಿದೆ. ಅದನ್ನೇ ಉಳಿಸಿದರೆ ರಾಜ್ಯದ ಖಾಸಗಿ, ಶಾಲಾ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಬಹುದು ಎಂದು ತಿಳಿಸಿದರು.

ಸರ್ಕಾರ ಎಸ್‍ಎಸ್‍ಎಲ್‍ಸಿ ತೇರ್ಗಡೆಗೆ ಶೇ.33 ಅಂಕ ನಿಗದಿಪಡಿಸಿರುವುದು ಸರಿಯಲ್ಲ. ಇದು, ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಮಾರಕವಾಗಲಿದೆ. ಶೇ.60 ರಷ್ಟು ಫಲಿತಾಂಶ ಪಡೆಯದ ಶಾಲೆಗಳ ಶಿಕ್ಷಕರ ವೇತನ ಬಡ್ತಿ ತಡೆಹಿಡಿಯುವಂತೆ ಹೊರಡಿಸಿರುವ ಆದೇಶ ಅವೈಜ್ಞಾನಿಕ. ಕೂಡಲೇ ಇದನ್ನು ಹಿಂಪಡೆಯಬೇಕು. ಸರ್ಕಾರ ಮೊದಲು ಶಾಲೆಗಳ ಖಾಲಿ ಹುದ್ದೆ ಭರ್ತಿ ಮಾಡಿ, ಅಗತ್ಯ ಮೂಲಸೌಕರ್ಯ ಕಲ್ಪಿಸುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.

ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾದ ಹೋರಾಟದಲ್ಲಿ ಜಿಲ್ಲೆಯ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಪ್ರತಿನಿಧಿಗಳು ಹಾಗೂ ಶಿಕ್ಷಕರು ಸೇರಿ 2 ಸಾವಿರ ಜನ ಪಾಲ್ಗೊಳ್ಳಲಿದ್ದಾರೆ ಎಂದು ಕಲ್ಯಾಣ ಕರ್ನಾಟಕ ಖಾಸಗಿ ಅನುದಾನ ರಹಿತ ಶಾಲಾ ಆಡಳಿತ ಮಂಡಳಿ ಸಂಘದ ಜಿಲ್ಲಾ ಅಧ್ಯಕ್ಷ ರಾಜೇಂದ್ರ ಮಣಗೇರೆ ಹೇಳಿದರು.

ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಮಾಣಿಕಪ್ಪ ಗೋರನಾಳೆ, ಪ್ರಧಾನ ಕಾರ್ಯದರ್ಶಿ ಗುರುನಾಥ ರೆಡ್ಡಿ, ಬೀದರ್ ದಕ್ಷಿಣ ಅಧ್ಯಕ್ಷ ಸೈಯದ್ ಮುಹಮ್ಮದ್, ಕಾರ್ಯದರ್ಶಿ ಬಸವರಾಜ ಭರಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.