ಬೀದರ್: ತಾಲ್ಲೂಕಿನ ರಾಜಗೀರಾ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಸಂತೋಷ್ ರೆಡ್ಡಿ ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಯುವ ಸೈನ್ಯದ ಜಿಲ್ಲಾ ಘಟಕದ ಅಧ್ಯಕ್ಷ ರಾಜಕುಮಾರ ಬೀರಗೊಂಡ ಒತ್ತಾಯಿಸಿದ್ದಾರೆ.
ಈ ಕುರಿತು ನಗರದಲ್ಲಿ ಸಹಕಾರ ಸಂಘಗಳ ಉಪ ನಿಬಂಧಕರಿಗೆ ಶುಕ್ರವಾರ ಮನವಿ ಪತ್ರ ಸಲ್ಲಿಸಿದ್ದಾರೆ.
ರೆಡ್ಡಿ ಅವರು ಒಂದೇ ಸ್ಥಳದಲ್ಲಿ 11 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಲ್ಪಾವಧಿ ಸಾಲ ನವೀಕರಣಕ್ಕೆ ಹಣ ವಸೂಲಿ ಮಾಡುತ್ತಿದ್ದಾರೆ. ಹಣ ಕೊಡದವರನ್ನು ಸುಸ್ತಿ ಸಾಲಗಾರ ಪಟ್ಟಿಗೆ ಸೇರಿಸುತ್ತಿದ್ದಾರೆ. ಈಗಾಗಲೇ ಅನೇಕ ರೈತರನ್ನು ಸುಸ್ತಿ ಸಾಲಗಾರರನ್ನಾಗಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಕಾರ್ಯದರ್ಶಿ ಸಂಘದಲ್ಲಿ ಕಾರ್ಯ ನಿರ್ವಹಿಸುವುದನ್ನು ಬಿಟ್ಟು ಗ್ರಾಮದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆಪಾದಿಸಿದ್ದಾರೆ.
ರೈತರ ಮೇಲಿನ ಅನ್ಯಾಯದ ಕುರಿತು ಪರಿಶೀಲನೆ ನಡೆಸಬೇಕು. ಕಾರ್ಯದರ್ಶಿಯನ್ನು ಕೂಡಲೇ ಬೇರೆಡೆ ವರ್ಗಾಯಿಸಬೇಕು ಎಂದು ಬೇಡಿಕೆ ಮಂಡಿಸಿದ್ದಾರೆ.