ಬೀದರ್: ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಒಕ್ಕೂಟದ ಸಹಯೋಗದಲ್ಲಿ ಕನ್ನಡ ದೀಕ್ಷೆ ಪ್ರತಿಜ್ಞಾ ಸ್ವೀಕಾರ ಸಮಾರಂಭ ನ.7ರಂದು ಬೆಳಗ್ಗೆ 11ಕ್ಕೆ ನಗರದ ಪೂಜ್ಯ ಡಾ.ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರವೇ ಜಿಲ್ಲಾಧ್ಯಕ್ಷ ಸೋಮನಾಥ ಮುಧೋಳ ಹೇಳಿದರು.
ಅ.6ರಂದು ಹಾಸನ, ಅ.12ರಂದು ಬೆಳಗಾವಿಯಲ್ಲಿ ಕನ್ನಡ ದೀಕ್ಷೆ ಪ್ರತಿಜ್ಞಾವಿಧಿ ಸ್ವೀಕಾರ ಸಮಾರಂಭ ಜರುಗಿದೆ. ಇದೀಗ ಗಡಿ ಜಿಲ್ಲೆಯಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಅದ್ದೂರಿ, ಅರ್ಥಪೂರ್ಣವಾಗಿ ಆಯೋಜಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು, ಶ್ರೀ ಗುರುಬಸವ ಪಟ್ಟದ್ದೇವರು ಸಾನ್ನಿಧ್ಯ, ಕರವೇ ಅಧ್ಯಕ್ಷ ಟಿ.ಎ. ನಾರಾಯಣಗೌಡರು ಅಧ್ಯಕ್ಷತೆ ವಹಿಸುವರು. ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸುವರು. ಪೌರಾಡಳಿತ ಸಚಿವ ರಹೀಮ್ ಖಾನ್, ಏಕತಾ ಪೌಂಡೇಷನ್ ಅಧ್ಯಕ್ಷ ರವೀಂದ್ರ ಸ್ವಾಮಿ, ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಬಸವರಾಜ ಧನ್ನೂರ, ಸೂರ್ಯಕಾಂತ ಅಲ್ಮಾಜೆ ಇತರರು ಪಾಲ್ಗೊಳ್ಳುವರು ಎಂದರು.
ದೀಕ್ಷೆಯ ಪಡೆಯಿರಿ ಇಂದು ಎಂಬ ಹಾಡಿನ ಮೂಲಕ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. 1500 ಕನ್ನಡಪರ ಕಾರ್ಯಕರ್ತರಿಗೆ ದೀಕ್ಷೆ ನೀಡಲಾಗುವುದು. ಜಿಲ್ಲೆಯ ವೇದಿಕೆ ಪದಾಧಿಕಾರಿಗಳು, ಕನ್ನಡಪರ ಸಂಘಟನೆಗಳ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಪ್ರಮುಖರಾದ ಅನೀಲ ಹೇಡೆ, ವಿರೇಶರಡ್ಡಿ, ಮಂಜುನಾಥ ಸ್ವಾಮಿ, ಬಂಡೆಪ್ಪ ಕರಸಣ್ಣ, ವಿಶ್ವನಾಥ ಗೌಡ, ಸೋಮಶೇಖರ ಸಜ್ಜನ್, ಶಿವರುದ್ರ ತೀರ್ಥಾ ಇದ್ದರು.