ರಾಯಚೂರು: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಕುಸ್ತಿ ಫೆಡರೇಷನ್ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್‌ರನ್ನು ಬಂಧಿಸುವಂತೆ ಒತ್ತಾಯಿಸಿ ಎಐಡಿಎಸ್‌ಒ, ಎಐಎಂಎಸ್‌ಎಸ್, ಎಐಡಿವೈಒ ಹಾಗೂ ಸಂಯುಕ್ತ ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತ್ಯೇಕವಾಗಿ ಗುರುವಾರ ಪ್ರತಿಭಟನೆ ನಡೆಸಲಾಯಿತು.
ನಂತರ ಜಿಲ್ಲಾಧಿಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಲಾಯಿತು. ಮಹಿಳಾ ಕುಸ್ತಿಪಟುಗಳು ದೆಹಲಿಯಲ್ಲಿ ಹಲವು ದಿನಗಳಿಂದ ಹೋರಾಟ ನಡೆಸುತ್ತಿದ್ದು, ಕೇಂದ್ರ ಸರ್ಕಾರ ಕ್ರಮಕೈಗೊಳ್ಳದೆ ಪ್ರತಿಭಟನೆಯನ್ನು ದಮನಗೊಳಿಸುವ ಪ್ರಯತ್ನ ನಡೆಸುತ್ತಿದೆ ಎಂದು ದೂರಿದರು.
ಪ್ರತಿಭಟನೆ ನಡೆಸುತ್ತಿದ್ದ ಮಹಿಳಾ ಕುಸ್ತಿಪಟುಗಳ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದು, ಪ್ರತಿಭಟನಾಕಾರರ ಬಗ್ಗೆ ಅಪಪ್ರಚಾರ ನಡೆಸುವ ಮೂಲಕ ಬ್ರಿಜ್ ಭೂಷಣ್ ಶರಣ್ ಸಿಂಗ್ ರಕ್ಷಣೆಗೆ ಯತ್ನಿಸಲಾಗುತ್ತಿದೆ. ಈ ಮೂಲಕ ಕೇಂದ್ರ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸುತ್ತಿದೆ. ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್‌ರನ್ನು ಬಂಧಿಸಬೇಕು. ಮಹಿಳಾ ಕುಸ್ತಿಪಟುಗಳಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಲಾಯಿತು.