ಶಹಾಪುರ: ಕೃಷ್ಣಾ ಅಚ್ಚುಕಟ್ಟು ಪ್ರದೇಶದ ರೈತರ ಹಿತದೃಷ್ಟಿಯಿಂದ ಕಾಲುವೆಗಳಿಗೆ ನಿರಂತರವಾಗಿ ನೀರು ಹರಿಸುವಂತೆ ಶಾಸಕ ಶರಣಬಸಪ್ಪ ದರ್ಶನಾಪುರ ಜಲಸಂಪನ್ಮೂಲ ಸಚಿವ ಚಲುವರಾಯ ಸ್ವಾಮಿ ಅವರಿಗೆ ಮಂಗಳವಾರ ಬೆಂಗಳೂರಿನಲ್ಲಿ ಮನವಿ ಮಾಡಿದರು. ಈ ವೇಳೆ ಶಾಸಕ ರಾಜಾ ವೇಣುಗೋಪಾಲ ನಾಯಕ, ಕಾಡಾ ಅಧ್ಯಕ್ಷ ಬಾಬು ಹೊನ್ನಾನಾಯಕ ಇದ್ದರು.
ನೀರು ಹರಿಸುವ ಕುರಿತು ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಸಧ್ಯದ ರೈತರ ಸ್ಥಿತಿ-ಗತಿ ವಿವರಿಸಿದರು. ಮುಂಬರುವ ನೀರಾವರಿ ಸಲಹಾ ಸಮಿತಿ ಸಭೆಗೆ ಯಾದಗಿರಿ ಜಿಲ್ಲೆಯ ರೈತ ಮುಖಂಡರು ಹಾಗೂ ರೈತ ಸಂಘಟನೆಗಳ ಮುಖಂಡರನ್ನು ವಿಶೇಷವಾಗಿ ಆಹ್ವಾನಿಸುವಂತೆ ಸಚಿವರಿಗೆ ಮನವಿ ಮಾಡಿದರು. ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ಅಡಚಣೆಯಾಗದಂತೆ ಹಾಗೂ ಬೆಳೆಗಳಿಗೆ ಸಮರ್ಪಕವಾಗಿ ನೀರು ದೊರೆಯುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರ ಗಮನ ಸೆಳೆದರು.
ನಾರಾಯಣಪುರ ಜಲಾಶಯದ ನೀರನ್ನೇ ನಂಬಿ ಬಿತ್ತನೆ ಮಾಡುವ ಸಾವಿರಾರು ರೈತರು ಇಂದು ಸಕಾಲಕ್ಕೆ ನೀರಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಕಾರಣ ನೀರು ಹರಿಸುವ ಮತ್ತು ನೀರಾವರಿ ಸಲಹಾ ಸಮಿತಿ ಸಭೆಗೆ ಗಿರಿಜಿಲ್ಲೆಯ ಅನುಭವಿ ರೈತರನ್ನು ಮತ್ತು ರೈತ ಸಂಟನೆಗಳ ಮುಖಂಡರನ್ನು ಆಹ್ವಾನಿಸುವಂತೆ ಶಾಸಕ ದರ್ಶನಾಪುರ ಮತ್ತೊಮ್ಮೆ ಮನವಿ ಮಾಡಿದರು.
ಈ ವೇಳೆ ಮಾತನಾಡಿದ ಸಚಿವ ಚಲುವರಾಯಸ್ವಾಮಿ ಅವರು, ಮಳೆ ಇಲ್ಲದೆ ಜಲಾಶಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಸಂಗ್ರಹವಿಲ್ಲ. ಇದ್ದ ನೀರು ಜನ, ಜಾನುವಾರುಗಳಿಗೆ ಕುಡಿಯಲು ಬೇಕು. ರೈತರ ಬೇಡಿಕೆಯಂತೆ ನೀರು ಹರಿಸಲು ಕಷ್ಟವಿದೆ, ಆದರೂ ನ.19ರಂದು ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚರ್ಚಿಸಿ, ಕಾಲುವೆಗಳಿಗೆ ನೀರು ಹರಿಸುವ ಕುರಿತು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಈ ವೇಳೆ ಕೆಬಿಜೆಎನ್ಎಲ್ ಅಧಿಕಾರಿಗಳು ಇದ್ದರು.