ಯಲಬುರ್ಗಾ: ವಿಧಾನಸಭಾ ಚುನಾವಣೆಗೆ ಈ ಬಾರಿ ಬಿಜೆಪಿ 75 ಹೊಸ ಮುಖಗಳಿಗೆ ಟಿಕೆಟ್ ನೀಡುವ ಜತೆಗೆ 10 ಮಹಿಳೆಯರಿಗೆ ಅವಕಾಶ ಕಲ್ಪಿಸಿದೆ ಎಂದು ಎಂಎಲ್ಸಿ ಹೇಮಲತಾ ನಾಯಕ್ ಹೇಳಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಅವರು, ಎಲ್ಲ ವರ್ಗವನ್ನು ಗಮದಲ್ಲಿಟ್ಟುಕೊಂಡು ಕೇಂದ್ರ ಮತ್ತು ರಾಜ್ಯ ನಾಯಕರು ಸಾಮಾಜಿಕ ನ್ಯಾಯದಡಿ ಟಿಕೆಟ್ ಹಂಚಿಕೆ ಮಾಡಿದ್ದಾರೆ. ಪಕ್ಷದಲ್ಲಿ ಬದಲಾವಣೆ ಮತ್ತು ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ಕೊಡಲಾಗಿದೆ. ಕೆಲವರು ಅಸಮಾಧಾನದಿಂದ ಪಕ್ಷ ಬಿಟ್ಟು ಹೋಗಿದ್ದು, ಅಂತವರಿಂದ ಪಕ್ಷಕ್ಕೆ ನಷ್ಟ ಆಗುವುದಿಲ್ಲ ಎಂದರು.
ವಿಧಾನಸಭೆ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಉದ್ದೇಶದಿಂದ ಬೂತ್ ಮಟ್ಟದ ಕಾರ್ಯಕರ್ತರಿಂದ ಹಿಡಿದು ರಾಷ್ಟ್ರೀಯ ನಾಯಕರವರೆಗೂ ಪಕ್ಷ ಸಂಘಟನೆ ತಳಮಟ್ಟದಿಂದ ನಡೆದಿದೆ. ಹೀಗಾಗಿ ಏ.27 ರಂದು ರಾಜ್ಯ ಎಲ್ಲ ಕ್ಷೇತ್ರಗಳಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ.
ಅಂತರ್ಜಾಲ ಸಭೆ ಮೂಲಕ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಿದ್ದಾರೆ. ಎಲ್ಲ ಬೂತ್ ಮಟ್ಟದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಪಕ್ಷದ ಕಾರ್ಯಕರ್ತರು ಸಾಮಾಜಿಕ ಜಾಲತಾಣದ ಮೂಲಕ ವೀಕ್ಷಿಸಿ ಪ್ರಚೂರಪಡಿಸಬೇಕು.
ಅಲ್ಲದೆ ಕಾರ್ಯಕ್ರಮ ವೀಕ್ಷಣೆಗೆ ಬಿಜೆಪಿ ಕಚೇರಿ ಮತ್ತು ಮಹಾಶಕ್ತಿ ಕೇಂದ್ರಗಳಲ್ಲಿ ಎಲ್‌ಇಡಿ ವ್ಯವಸ್ಥೆ ಮಾಡಲಾಗಿದ್ದು, ಪ್ರತಿ ಕ್ಷೇತ್ರದಲ್ಲಿ ಕನಿಷ್ಠ 5 ಸಾವಿರ ಕಾರ್ಯಕರ್ತರು ತಮ್ಮ ಮೊಬೈಲ್‌ನಲ್ಲಿ ನಮೋ ಆಪ್ ಡೌನ್‌ಲೋಡ್ ಮಾಡಿಕೊಂಡು ವೀಕ್ಷಣೆ ನಡೆಸಬೇಕು. ಏ.30ರಂದು ಮಹಾ ಸಂಪರ್ಕ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ರಾಜ್ಯಾದ್ಯಂತ ಏಕಕಾಲದಲ್ಲಿ ಪ್ರತಿ ಬೂತ್ ಮಟ್ಟದಲ್ಲಿ ಮನೆ ಮನೆಗೆ ತೆರಳಿ ಪಕ್ಷದ ಸಾಧನೆ ಕುರಿತು ಜನರಿಗೆ ತಿಳಿಸಲಾಗುತ್ತದೆ.
ಕೇಂದ್ರ ಮತ್ತು ರಾಜ್ಯ ನಾಯಕರು ಆಯಾ ಕ್ಷೇತ್ರದಲ್ಲಿ ಪಾಲ್ಗೊಂಡು ಕಾರ್ಯಕ್ರಮ ಮಾಡಲಿದ್ದಾರೆ. ಇದರ ಯಶಸ್ವಿಗೆ ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು ಎಂದರು.
ಬಿಜೆಪಿ ಮಂಡಲ ಅಧ್ಯಕ್ಷ ವಿಶ್ವನಾಥ ಮರಿಬಸಪ್ಪಬರ್, ಪ್ರಧಾನ ಕಾರ್ಯದರ್ಶಿ ಶಿವಪ್ಪ ವಾದಿ ಇದ್ದರು.