ಜಿಲ್ಲೆ

ದೇವನಹಳ್ಳಿಟೌನ್‌ನಲ್ಲಿ ಯೋಗಾ ದಿನಾಚರಣೆ

ಶಿವರಾಜ.ಎಂ

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ

ಈ ಬಾರಿಯ ಜಿಲ್ಲಾ ಮಟ್ಟದ 11 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21 ರಂದು ದೇವನಹಳ್ಳಿ ಟೌನ್‌ನಲ್ಲಿರುವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಮಾಹಿತಿ ನೀಡಿದರು.

ದೇವನಹಳ್ಳಿಯ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ 11 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಯೋಜಿಸುವ ಸಂಬಂಧ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಈ ಬಾರಿಯ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ‘ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುವುದು. ಆ ದಿನ ಬೆಳಗ್ಗೆ 7 ಗಂಟೆಯಿಂದ 7:45ರವರೆ ಸಾಮೂಹಿಕ ಯೋಗಾಭ್ಯಾಸ ನಡೆಯಲಿದೆ ಎಂದು ವಿವರಿಸಿದರು. ನಮ್ಮ ದೇಶದ ಸಾಂಸ್ಕೃತಿಕ ಪ್ರತಿರೂಪದಂತಿರುವ ಯೋಗಭ್ಯಾಸ ವಿಶ್ವಮಾನ್ಯತೆ ಪಡೆದಿದ್ದು ವಿಶ್ವದಾದ್ಯಂತ ಯೋಗ ದಿನ ಆಚರಣೆಯಾಗುತ್ತಿದೆ. ಆದ್ದರಿಂದ ಜಿಲ್ಲಾ ಮಟ್ಟದ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಬಹಳ ಶಿಸ್ತಿನಿಂದ ಆಯೋಜಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಅಗತ್ಯ ಸಿದ್ದತೆ ಇರಬೇಕು: ಶಿಷ್ಟಾಚಾರದಂತೆ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಮುದ್ರಿಸಿ, ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು. ಕ್ರೀಡಾಂಗಣದ ಸ್ವಚ್ಛತೆ, ಕುಡಿಯುವ ನೀರು, ಲಘು ಉಪಹಾರದ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ, ಅಂಬುಲೆನ್ಸ್ ವ್ಯವಸ್ಥೆ ಸೇರಿ ಇನ್ನಿತರ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು. ಮುಖ್ಯವಾಗಿ ಯೋಗ ದಿನಾಚರಣೆ ಆಯೋಜನೆಗೊಳ್ಳುವ ಕ್ರೀಡಾಂಗಣದಲ್ಲಿ ಯಾವುದೇ ರೀತಿಯ ಪ್ಲಾಸ್ಟಿಕ್ ಬಳಕೆ ಇರಬಾರದು ಅಲ್ಲದೆ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.

ಸಾಮೂಹಿಕ ಯೋಗ: ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸರ್ಕಾರಿ ಅಧಿಕಾರಿಗಳು, ಸಂಘಸಂಸ್ಥೆಗಳ ಪ್ರತಿನಿಧಿಗಳು, ಸಾರ್ವಜನಿಕರನ್ನು ಒಳಗೊಂಡ ಯೋಗಾಭ್ಯಾಸ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು. ಜತೆಗೆ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಶಾಲಾ-ಕಾಲೇಜುಗಳು, ಹಾಸ್ಟೆಲ್ ಗಳಲ್ಲಿರುವ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲು ಆಯಾ ಇಲಾಖೆಯ ಅಧಿಕಾರಿಗಳು ಕ್ರಮವಹಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ ಎಂದು ಆಯೋಜಕರಿಗೆ ಸೂಚಿಸಿದರು. ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು, ಸಂಘ ಸಂಸ್ಥೆಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯೋಗ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.