ರಾಯಚೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಮಹತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜೂ.21ರಂದು ಸಾಮೂಹಿಕ ಯೋಗಭ್ಯಾಸ ಕಾರ್ಯಕ್ರಮ ಆಯೋಜಿಸಲಾಗುವುದು. ಈ ಕುರಿತು ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಪಂ ಸಿಇಒ ರಾಹುಲ್ ತುಕಾರಾಮ ಪಾಂಡ್ವೆ ಸೂಚಿಸಿದರು.
ನಗರದ ಡಿಸಿ ಕಚೇರಿಯಲ್ಲಿ ಪೂರ್ವಭಾವಿ ಸಭೆಯಲ್ಲಿ ಮಂಗಳವಾರ ಮಾತನಾಡಿದರು. ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಐದು ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಕಾರ್ಯಕ್ರಮದ ಯಶಸ್ಸಿಗೆ ಸಂಘ-ಸಂಸ್ಥೆಗಳು, ವಿವಿಧ ಇಲಾಖೆ ಸಿಬ್ಬಂದಿ ಹಾಗೂ ಶಾಲೆ-ಕಾಲೇಜುಗಳ ಸಹಕಾರ ಅಗತ್ಯ ಎಂದು ತಿಳಿಸಿದರು.
ಜನರಿಗೆ ಹಾಗೂ ಗಣ್ಯರಿಗೆ ಆಸನ ಮತ್ತು ಉಪಾಹಾರದ ವ್ಯವಸ್ಥೆಯನ್ನು ಸರಿಯಾದ ರೀತಿಯಲ್ಲಿ ಮಾಡಬೇಕು. ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಮತ್ತು ರಾಷ್ಟ್ರೀಯ ಸೇವಾ ಯೋಜನೆಯಿಂದ ಕಾರ್ಯಕ್ರಮಕ್ಕೆ ಸಹಕಾರ ಪಡೆಯಬೇಕು. ಕಾರ್ಯಕ್ರಮ ಸ್ಥಳದಲ್ಲಿ ಆಂಬುಲೆನ್ಸ್, ವೈದ್ಯಕೀಯ ಸೇವೆ ವ್ಯವಸ್ಥೆ ಮಾಡಬೇಕೆಂದು ಜಿಪಂ ಸಿಇಒ ಹೇಳಿದರು.
ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರಗೇಶ ಮಾತನಾಡಿ, ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಶಿಷ್ಟಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಿಸಬೇಕು. ಜಿಲ್ಲಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮದ ಮೊದಲು ಮತ್ತು ನಂತರ ಸ್ವಚ್ಛತೆ ಕೈಗೊಳ್ಳುವಂತೆ ತಿಳಿಸಿದರು. ಜಿಪಂ ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ, ಡಿಎಚ್‌ಒ ಡಾ.ಸುರೇಂದ್ರಬಾಬು, ಜಿಲ್ಲಾ ಆಯುಷ್ ಅಧಿಕಾರಿ ಡಾ.ಶಂಕರಗೌಡ ಪಾಟೀಲ್, ನಗರಸಭೆ ಪೌರಾಯುಕ್ತ ಗುರುಸಿದ್ದಯ್ಯ ಹಿರೇಮಠ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹೇಶ್ ಪೋತದಾರ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸೋಮಶೇಖರ ಹೊಕ್ರಾಣಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಗಣೇಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವೀರೇಶ ನಾಯಕ, ಶಿಕ್ಷಣ ಇಲಾಖೆಯ ಪರಶುರಾಮ, ಎನ್.ಸಿ.ಸಿ ವಿಭಾಗದ ಭುಜಂಗಪ್ಪ, ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸ್ಮಿತಾ ಅಕ್ಕ, ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಮಲ್ಲಿಕಾರ್ಜುನ ಸ್ವಾಮಿ ಇತರರು ಇದ್ದರು.