ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರ ಭಾವ ಮಹದೇವಯ್ಯನವರ ಕೊಲೆ ಪ್ರಕರಣ ಸಿಐಡಿ ಹೇಗಲೇರಿದೆ. ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಪೊಲೀಸ್ ಇಲಾಖೆ ಈ ಕೊಲೆ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿದೆ.
ಗುರುವಾರ ಈ ಬಗ್ಗೆ ಆದೇಶ ಹೊರಡಿಸಿದ್ದ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಹಿತೇಂದ್ರ ಈ ಪ್ರಕರಣವನ್ನು ಸ್ಥಳೀಯ ಪೊಲೀಸರು ಸಿಐಡಿ ಅಧಿಕಾರಿಗಳಿಗೆ ವರ್ಗಾಹಿಸುವಂತೆ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಈ ಪ್ರಕರಣದ ನಾಲ್ವರು ಆರೋಪಿಗಳನ್ನು ಗುರುವಾರ ತಮ್ಮ ವಶಕ್ಕೆ ಪಡೆದುಕೊಂಡರು. ಚನ್ನಪಟ್ಟಣ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರು ಪಡಿಸಿ, ನಾಲ್ವರು ಆರೋಪಿಗಳನ್ನು ನ್ಯಾಯಾಧೀಶರ ಆದೇಶದ ಮೂಲಕ ಸಿಐಡಿ ವಶಕ್ಕೆ ಒಪ್ಪಿಸಲಾಯಿತು.
3 ದಿನ ಸಿಐಡಿ ವಶವಾದ ಆರೋಪಿಗಳು!
ಮಹದೇವಯ್ಯ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದ ಚನ್ನಪಟ್ಟಣ ಗ್ರಾಮಾಂತರ ಪೊಲೀಸರು, ಅವರುಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ 9 ದಿನಗಳ ಕಾಲ ತಮ್ಮ ವಶಕ್ಕೆ ಪಡೆದಿದ್ದರು. ಪೊಲೀಸ್ ವಶಕ್ಕೆ ಪಡೆದಿದ್ದ ಅವಧಿ 29ರ ಶುಕ್ರವಾರದವರೆಗೆ ಇತ್ತು. ಆದರೆ, ಪ್ರಕರಣ ಸಿಐಡಿಗೆ ವರ್ಗಾವಣೆಯಾದ ಹಿನ್ನೆಲೆಯಲ್ಲಿ ಗುರುವಾರ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಿ, ಸಿಐಡಿ ವಶಕ್ಕೆ ನೀಡಲಾಯಿತು. ಸಿಐಡಿ ಅಧಿಕಾರಿಗಳು 5 ದಿನಗಳ ಕಾಲ ಆರೋಪಿಗಳನ್ನು ತಮ್ಮ ವಶಕ್ಕೆ ನೀಡುವಂತೆ ಕೇಳಿದ್ದರು. ಆದರೆ, ಚನ್ನಪಟ್ಟಣ ಪ್ರಧಾನ ಸಿವಿಲ್ ನ್ಯಾಯಾಧೀಶ ಮಹೇಂದ್ರ 3 ದಿನಗಳ ಕಾಲ ಸಿಐಡಿ ವಶಕ್ಕೆ ಆರೋಪಿಗಳನ್ನು ನೀಡಿ ಆದೇಶ ಹೊರಡಿಸಿದರು.