ಕೊಡಗು : ವಿಶ್ವ ಆರೋಗ್ಯ ಸಂಸ್ಥೆಯ ಸಂಶೋಧನೆಯ ಪ್ರಕಾರ ನಮ್ಮ ದೇಶದಲ್ಲಿ ಒಂದು ವರ್ಷಕ್ಕೆ 5 ಲಕ್ಷ ಜನರು ಮದ್ಯಪಾನದಿಂದ ಸಾವನ್ನಪ್ಪುತ್ತಿದ್ದರೆ, 14.5 ಲಕ್ಷ ಜನರು ಮಾದಕ ದ್ರವ್ಯ, ವ್ಯಸನ ಅಥವಾ ಇನ್ನಿತರ ಚಟಗಳಿಂದ ಬಲಿಯಾಗುತ್ತಿದ್ದಾರೆ. ಇದು ಶೋಚನೀಯ ಸಂಗತಿ ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಶಿಬಿರಾಧಿಕಾರಿ ಪಿ.ಪಿ.ನಂದಕುಮಾರ್ ಬೇಸರ ವ್ಯಕ್ತಪಡಿಸಿದರು.
ಸುಂಟಿಕೊಪ್ಪದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬೆಳ್ತಂಗಡಿಯ ಅಖಿಲ ಕರ್ನಾಟಕ ಭಜನ ಜಾಗೃತಿ ವೇದಿಕೆ, ಜಿಲ್ಲಾ ಜನ ಜಾಗೃತಿ ವೇದಿಕೆ, ಮಡಿಕೇರಿ ತಾಲೂಕು ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟ, ಮಾದಾಪುರದ ಶ್ರೀಮತಿ ಡಿ.ಚೆನ್ನಮ್ಮ ಪದವಿ ಪೂರ್ವ ಕಾಲೇಜು ವತಿಯಿಂದ ಇತ್ತೀಚೆಗೆ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಹದಿಹರೆಯದ ವಯಸ್ಸಿನಲ್ಲಿ ವಿದ್ಯಾರ್ಥಿಗಳು ಅನಾವಶ್ಯವಾಗಿ ಒತ್ತಡ ತಂದುಕೊಳ್ಳುತ್ತಿದ್ದಾರೆ. ಪಾಶ್ಚಾತ್ಯ ಸಂಸ್ಕೃತಿಗೆ ಮಾರುಹೋಗಿ ಅನುಕರಣೆ ಮಾಡುತ್ತಿದ್ದಾರೆ. ಅಮಲು ಪದಾರ್ಥ ಹಾಗೂ ಇನ್ನಿತರ ವ್ಯವಸಕ್ಕೆ ಬಲಿಯಾಗುತ್ತಿರುವುದು ದುರಂತವೇ ಸರಿ ಎಂದು ಕಳವಳ ವ್ಯಕ್ತಪಡಿಸಿದರು.
ಸಮಾಜದಲ್ಲಿ ವ್ಯಸನಕ್ಕೆ ಒಳಗಾದವರು ಅಪಘಾತ, ಆತ್ಮಹತ್ಯೆ ಮತ್ತು ಅಕಾಲಿಕ ಮರಣ ಇವುಗಳಿಗೆ ತುತ್ತಾಗುತ್ತಿದ್ದಾರೆ. ಅತಿಯಾದ ಮೊಬೈಲ್ ಬಳಕೆ ಮತ್ತು ಸಾಮಾಜಿಕ ಜಾಲತಾಣದಿಂದಲೂ ವಿದ್ಯಾರ್ಥಿಗಳ ಮನಸ್ಥಿತಿ ಹಾಳಾಗುತ್ತಿದೆ. ವಿದ್ಯಾರ್ಥಿಗಳು ಇದರ ಬಗ್ಗೆಯೂ ಗಮನಹರಿಸಬೇಕು ಎಂದು ನಂದಕುಮಾರ್ ಹೇಳಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಪುರುಷೋತ್ತಮ್ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಸಿ.ಜಿ.ಮಂದಪ್ಪ, ಕಾಲೇಜು ಹಂತದಲ್ಲಿ ವಿದ್ಯಾರ್ಥಿಗಳ ಮನಸ್ಸು ತುಂಬಾ ಚಂಚಲ. ಈ ಹಂತದಲ್ಲಿ ವಿದ್ಯಾರ್ಥಿಗಳು ತಮ್ಮ ಮನಸ್ಸನ್ನು ಸ್ವ-ನಿಗ್ರಹದೊಂದಿಗೆ ಹತೋಟಿಗೆ ತಂದುಕೊಳ್ಳುವುದು ಅನಿವಾರ್ಯತೆ ಇದೆ. ವಿದ್ಯಾರ್ಥಿಗಳೇ ಉತ್ತಮ ಸಮಾಜದ ಆಸ್ತಿ ಎಂದರು.
ಇದೇ ವೇಳೆ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ಟಿ.ಎಂ.ಅಯ್ಯಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ಪ್ರೌಢ ಶಾಲೆ ಮುಖ್ಯ ಶಿಕ್ಷಕಿ ರೀಟಾ, ಒಕ್ಕೂಟದ ಅಧ್ಯಕ್ಷೆ ಪುಷ್ಪಾ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಡಿಕೇರಿ ವಲಯದ ಮೇಲ್ವಿಚಾರಕಿ ವಿನೋದಾ ಸೇರಿದಂತೆ ಇತರರು ಉಪಸ್ಥಿತರಿದ್ದರು.