ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಪದವಿ ಮಹಾವಿದ್ಯಾಲಯಗಳ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿಗಳಿಗೆ ಗುರುವಾರ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರವನ್ನು ಪ್ರಭಾರ ಕುಲಪತಿ ಪ್ರೊ.ಡಾ.ಅನಂತ ಎಲ್.ಝಂಡೆಕರ್ ಉದ್ಘಾಟಿಸಿದರು. ಕುಲಸಚಿವ ರುದ್ರೇಶ್ ಎಸ್.ಎನ್, ಪ್ರೊ.ಸಾಹೇಬ್ ಅಲಿ ಎಚ್.ನಿರಗುಡಿ, ಡಾ.ಕುಮಾರ್ ಮತ್ತಿತರರಿದ್ದರು.  
ಜಿಲ್ಲೆ

ಯುವಜನತೆಗೆ ಮಾರ್ಗದರ್ಶನ ಅವಶ್ಯ

Bellari - Heera Nayak

ಬಳ್ಳಾರಿ : ಆರೋಗ್ಯ ಇಲಾಖೆಯು ಎಚ್‌ಐವಿ ನಿಯಂತ್ರಣ ಜಾಗೃತಿ ಮೂಡಿಸಲು ಶ್ರಮಿಸುತ್ತಿದೆ. ಏಡ್ಸ್ ಕುರಿತಾಗಿ ಜನರಲ್ಲಿರುವ ತಪ್ಪು ಮಾಹಿತಿಯನ್ನು ಹೋಗಲಾಡಿಸಲು ವಿವಿಧ ಕಾರ್ಯಕ್ರಮಗಳ ಮೂಲಕ ಪ್ರಯತ್ನಿಸುತ್ತಿದ್ದು, ಮಾರಕ ರೋಗಗಳ ಕುರಿತು ಅಧ್ಯಾಪಕರುಗಳು ಯುವಕರಿಗೆ ಮಾರ್ಗದರ್ಶನ ನೀಡಬೇಕು ಎಂದು ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ.ಡಾ.ಅನಂತ ಎಲ್.ಝಂಡೆಕರ್ ಹೇಳಿದರು.

ನಗರದ ಹೊರವಲಯದಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಎಚ್‌ಐವಿ/ಏಡ್ಸ್ , ಟಿ.ಬಿ ಗುರಿ ಉದ್ದೇಶ ಮತ್ತು ರಕ್ತದಾನ ಕುರಿತಾದ ವಿಶ್ವವಿದ್ಯಾಲಯ ವ್ಯಾಪ್ತಿಗೊಳಪಡುವ ಎಲ್ಲ ಪದವಿ ಮಹಾವಿದ್ಯಾಲಯಗಳ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿಗಳಿಗೆ ಗುರುವಾರ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ವಿಶ್ವವಿದ್ಯಾಲಯದ ಕುಲಸಚಿವ ರುದ್ರೇಶ್ ಎಸ್.ಎನ್ ಮಾತನಾಡಿ, ದೇಶದ ಯುವಕರು ಸಮಾಜದ ಸ್ವಾಸ್ಥ್ಯ ಕಾಪಾಡಲು ಸ್ವಯಂ ಪ್ರೇರಿತರಾಗಿ ಮುಂದಾಗಬೇಕು. ಸದೃಢ ಸಮಾಜ ನಿರ್ಮಿಸುವಲ್ಲಿ ಯುವಕರ ಪಾತ್ರ ಬಹುಮುಖ್ಯವಾಗಿದೆ. ಯುವಕರು ದುಶ್ಚಟಗಳಿಗೆ ಒಳಗಾಗದೆ ದೇಹ ಮತ್ತು ಮನಸ್ಸನ್ನು ಹತೋಟಿಯಲ್ಲಿಟ್ಟುಕೊಳ್ಳಬೇಕು. ಪ್ರಾಧ್ಯಾಪಕರು ಕಾರ್ಯಾಗಾರದಲ್ಲಿ ಪಡೆದಂತಹ ಮಾಹಿತಿಯನ್ನು ಸಮಾಜದ ಒಳಿತಿಗಾಗಿ ಬಳಸಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕದ ಜಿಲ್ಲಾ ಮೇಲ್ವಿಚಾರಕ ಗಿರೀಶ್ ಮಾತನಾಡಿ, ಏಡ್ಸ್ ಕುರಿತು ಯುವಜನತೆಯಲ್ಲಿ ಹೆಚ್ಚಿನ ಜಾಗೃತಿ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶದ ಜನರಲ್ಲಿ ಮಹಾಮಾರಿ ಏಡ್ಸ್ ಬಗ್ಗೆ ತಿಳಿವಳಿಕೆ ಮೂಡಿಸಲಾಗುತ್ತಿದೆ. ಯುವಕರು ರಕ್ತದಾನ ನೀಡುವುದಕ್ಕೆ ಮುಂದಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ವಿಶ್ವವಿದ್ಯಾಲಯದ ಮಾಜಿ ಪ್ರಭಾರ ಕುಲಪತಿ ಪ್ರೊ.ಸಾಹೇಬ್ ಅಲಿ ಎಚ್.ನಿರಗುಡಿ, ರಾಷ್ಟ್ರೀಯ ಸೇವಾಯೋಜನೆ ಸಂಯೋಜನಾಧಿಕಾರಿ ಡಾ.ಕುಮಾರ್ ಸೇರಿದಂತೆ ವಿವಿಧ ವಿಭಾಗಗಳ ಡೀನರು, ಮುಖ್ಯಸ್ಥರು ಹಾಗೂ ವಿಶ್ವವಿದ್ಯಾಲಯ ವ್ಯಾಪ್ತಿಗೊಳಪಡುವ ಎಲ್ಲ ಪದವಿ ಮಹಾವಿದ್ಯಾಲಯಗಳ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.