ದೇವನಹಳ್ಳಿಯ ಜಿಪಂ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ಯೋಜನಾ ಸಮನ್ವಯ ಅಧಿಕಾರಿ ರೇಖಾ. ಶಿಕ್ಷಣ ಸಂಯೋಜಕಿ ಕೋಮಲಾ, ಬಿಆರ್‌ಪಿ ಸಮೀರಾ, ಸಿಆರ್‌ಪಿ ನಾಗೇಶ್ ಮತ್ತಿತರರು ಇದ್ದರು. 
ಜಿಲ್ಲೆ

ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆ

ಶಿವರಾಜ.ಎಂ

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ, ಸಂಸದೀಯ ವ್ಯವಹಾರಗಳ ಇಲಾಖೆ ಮತ್ತು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಬುಧವಾರ ವಿದ್ಯಾರ್ಥಿಗಳಲ್ಲಿ ಶಾಸನ ಸಭೆಯ ಕಲಾಪವನ್ನು ಪರಿಚಯಿಸುವ ನಿಟ್ಟಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆ ನಡೆಸಲಾಯಿತು.
48 ಶಾಲಾ ವಿದ್ಯಾರ್ಥಿಗಳು:
ಜಿಲ್ಲೆಯ ನಾಲ್ಕು ತಾಲೂಕುಗಳ 48 ಪ್ರೌಢಶಾಲಾ ವಿದ್ಯಾರ್ಥಿಗಳು ಯುವ ಸಂಸತ್ ಸ್ಪರ್ಧೆಯಲ್ಲಿ ಭಾವಹಿಸಿದ್ದರು. ಯುವ ಸಂಸತ್‌ನಲ್ಲಿ ಸಭಾಧ್ಯಕ್ಷರು, ಆಡಳಿತ ಪಕ್ಷ, ವಿರೋಧ ಪಕ್ಷಗಳಾಗಿ ವಿದ್ಯಾರ್ಥಿಗಳು ಜವಾಬ್ದಾರಿವಹಿಸಿ ಹಲವು ಮಹತ್ವದ ವಿಚಾರಗಳ ಕುರಿತು ಅಣಕು ಕಲಾಪದಲ್ಲಿ ಚರ್ಚೆಯನ್ನು ನಡೆಸಿದ್ದು ಗಮನ ಸೆಳೆಯಿತು. ಯುವ ಸಂಸತ್‌ನಲ್ಲಿ ವಿದ್ಯಾರ್ಥಿಗಳು ಶೂನ್ಯ ವೇಳೆ, ಚುಕ್ಕೆ ಗುರುತಿನ ಪ್ರಶ್ನೆ, ಚುಕ್ಕೆ ಗುರುತ್ತಿಲ್ಲದ ಪ್ರಶ್ನೆ ಹೀಗೆ ಹತ್ತು ಹಲವು ಶಾಸನ ಸಭೆಯ ನಿಯಮಗಳಂತೆ ಚರ್ಚೆ ನಡೆಸಿದ್ದು ವಿಶೇಷವಾಗಿತ್ತು.
ಅರಿವು ಮೂಡಿಸುವ ಉದ್ದೇಶ:
ಜನಪ್ರತಿನಿಧಿ ಸಂಸ್ಥೆಗಳ ಪಾತ್ರದ ಅರಿವು ಮೂಡಿಸುವುದು. ಪ್ರಜಾಪ್ರಭುತ್ವದ ಬುನಾದಿಯನ್ನು ಭದ್ರಪಡಿಸುವ ಹಾಗೂ ಅಭಿಪ್ರಾಯಗಳ ಬಗ್ಗೆ ತಾಳ್ಮೆ ಮತ್ತು ತಮ್ಮ ಅಭಿಪ್ರಾಯಗಳನ್ನು ಸ್ಪಷ್ಟವಾಗಿ ವ್ಯಕ್ತಪಡಿಸುವ ಕೌಶಲ್ಯ ಬೆಳೆಸುವುದು. ವಿದ್ಯಾರ್ಥಿಗಳಲ್ಲಿ ವಿಧಾನಸಭೆಯ ಕಾರ್ಯ ಕಲಾಪಗಳ ಬಗ್ಗೆ ತಿಳುವಳಿಕೆ ಮೂಡಿಸುವುದು. ವಿದ್ಯಾರ್ಥಿ ದೆಸೆಯಿಂದಲೇ ವಾಕ್‌ಚಾತುರ್ಯ, ಸಮಯ ಪ್ರಜ್ಞೆ, ಸೂಕ್ಷ್ಮತೆ, ಧೈರ್ಯ ಮನೋಭಾವ, ಉತ್ತಮ ವಿಷಯ ಮಂಡನೆ ಸೇರಿ ನಾಯಕತ್ವ ಗುಣಗಳನ್ನು ಬೆಳೆಸುವುದು ಯುವ ಸಂಸತ್ ಸ್ಪರ್ಧೆಯ ಉದ್ದೇಶವಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ವಿಷಯ ಪರಿವಿಕ್ಷಕರಾದ ಎಚ್.ಪದ್ಮಾವತಿ ತಿಳಿಸಿದರು.
ವಿದ್ಯಾರ್ಥಿಗಳಿಗೆ ಬಹುಮಾನ:
ಜಿಲ್ಲಾ ಮಟ್ಟದ ಯುವ ಸಂಸತ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ 6 ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಇವರಲ್ಲಿ ಇಬ್ಬರನ್ನು ರಾಜ್ಯ ಮಟ್ಟದಲ್ಲಿ ನಡೆಯುವ ಯುವ ಸಂಸತ್ ಸ್ಪರ್ಧೆಗೆ ಆಯ್ಕೆ ಮಾಡಿ ಕಳುಹಿಸಲಾಗುವುದು ಎಂದು ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದ ಶಾಲಾ ಶಿಕ್ಷಣ ಇಲಾಖೆಯ ಪರಿವೀಕ್ಷಕರು ತಿಳಿಸಿದರು. ವಿದ್ಯಾರ್ಥಿ ದಿಸೆಯಿಂದಲೇ ಶಾಲಾ ಮಕ್ಕಳಿಗೆ ನಾಯಕತ್ವದ ಗುಣಗಳನ್ನು ಬೆಳೆಸುವುದು, ಸರ್ಕಾರ, ಆಡಳಿತ ವೈಖರಿ ಮತ್ತಿತರ ವಿಷಯಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲಾ ಮಟ್ಟದ ಯುವ ಸಂಸತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪ ಯೋಜನಾ ಸಮನ್ವಯ ಅಧಿಕಾರಿ ರೇಖಾ ತಿಳಿಸಿದರು. ಈ ಕಾರ್ಯಕ್ರಮದ ಕಾರಣಕ್ಕಾಗಿ ತಿಂಗಳಿಂದ ಶಾಲಾ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗಿತ್ತು. ಸಂಸತ್ ಹಾಗೂ ಸಂಸತ್ ಕಾರ್ಯವೈಖರಿ ಬಗ್ಗೆ ಮಾಹಿತಿ ನೀಡಲಾಗಿತ್ತು. ಇದಕ್ಕಾಗಿ ಜಿಲ್ಲೆಯ ವಿವಿಧ ಶಾಲೆಗಳಿಂದ ಮಕ್ಕಳನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು ಎಂದು ವಿವರಿಸಿದರು. ಯುವ ಸಂಸತ್ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಉತ್ತಮ ಪ್ರದರ್ಶನ ನೀಡಿದರು. ಸಂಸತ್ ಮಾದರಿಯಲ್ಲಿ ಅವರರಿಗೆ ಕೊಟ್ಟ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿದರು. ಇದೊಂದು ವಿಶೇಷ ಕಾರ್ಯಕ್ರಮವಾಗಿ ಗಮನ ಸೆಳೆದಿದೆ ಎಂದು ತಿಳಿಸಿದರು. ಸಂಸತ್ ಸಭೆಯಲ್ಲಿ ನಡೆಯುತ್ತಿದ್ದ ಕಲಾಪಗಳನ್ನು ಆಸೀನರಾಗಿದ್ದ ವಿದ್ಯಾರ್ಥಿಗಳು ಆಸಕ್ತಿಯಿಂದ ಆಲಿಸಿದರು. ವಾಕ್‌ಚಾರ್ತುದ ಮೂಲಕದ ಹಲವು ವಿದ್ಯಾರ್ಥಿಗಳು ಗಮನ ಸೆಳೆದರು ಇದಕ್ಕೆ ತೀರ್ಪುಗಾರರು ಹಾಗೂ ಜಿಲ್ಲೆಯ ನಾಲ್ಕು ತಾಲೂಕುಗಳ ಸಮಾಜ ವಿಜ್ಞಾನ ಶಿಕ್ಷಕರು ಸಹಕಾರ ನೀಡಿದರು ಎಂದು ರೇಖಾ ತಿಳಿಸಿದರು.