ಮಂಡ್ಯ: ಜಿಲ್ಲೆಯಲ್ಲಿರುವ ಪದವಿ ಪೂರ್ವ, ಪ್ರಥಮ ದರ್ಜೆ, ಇಂಜಿನಿಯರಿಂಗ್, ಮೆಡಿಕಲ್, ಪ್ಯಾರಾ ಮೆಡಿಕಲ್, ಐ.ಟಿ.ಐ, ಡಿಪ್ಲೊಮಾ ಕಾಲೇಜು ಪ್ರಾಂಶುಪಾಲರು ತಮ್ಮ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸೀಫ್ ಸೂಚನೆ ನೀಡಿದರು.
ನಗರದ ಜಿಪಂ ಕಚೇರಿಯಲ್ಲಿ ಮಿನಿ ಸಭಾಂಗಣದಲ್ಲಿ ಮತದಾರ ಪಟ್ಟಿ ಪರಿಷ್ಕರಣೆ ಸಂಬಂಧ ವಿವಿಧ ಕಾಲೇಜುಗಳ ಪ್ರಾಂಶುಪಾಲರೊಂದಿಗೆ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾಲೇಜುಗಳಲ್ಲಿ ಆಯೋಜಿಸುವ ವಿವಿಧ ಹಬ್ಬ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಶೇಷವಾಗಿ ಯುವ ಜನತೆ ಭಾಗವಹಿಸುತ್ತಾರೆ. ಅಂತಹ ಸಂದರ್ಭದಲ್ಲಿ ಮತದಾನದ ಮಹತ್ವ ಸಾರುವ ಮತ್ತು ಸಧೃಡ ಪ್ರಜಾಪ್ರಭುತ್ವ ನಿರ್ಮಾಣದಲ್ಲಿ ಯುವ ಜನತೆಯ ಪಾತ್ರದ ಕುರಿತು ಅರಿವು ಮೂಡಿಸುವ ಕೆಲಸವಾಗಲಿ. ಆಯೋಗವು ಹೊರತಂದಿರುವ ಚುನಾವಣಾ ಆ್ಯಪ ಬಗ್ಗೆ ಮಾಹಿತಿ ನೀಡಿ ಎಂದರು.
ಮತದಾನದ ಬಗ್ಗೆ ಅರಿವು, ಪ್ರೇರಣೆ, ಅನುಕೂಲತೆಗಳ ಬಗ್ಗೆ ತಿಳಿಸಿ. ಸದೃಢ ಪ್ರಜಾಪ್ರಭುತ್ವಕ್ಕೆ ಭದ್ರ ಬುನಾದಿ ನಿರ್ಮಿಸುವ ನಿಟ್ಟಿನಲ್ಲಿ ಯುವ ಮತದಾರರ ಪಾತ್ರ ಮಹತ್ವದಿಂದ ಕೂಡಿರುತ್ತದೆ. ಯುವ ಮತದಾರರನ್ನು ಮತದಾರ ಪಟ್ಟಿಯಲ್ಲಿ ಸೇರಿಸಿ ಅರಿವು ಮೂಡಿಸುವ ಕಾರ್ಯವಾಗಲಿ. ಜಿಲ್ಲೆಯಲ್ಲಿ ವಿಶೇಷವಾಗಿ 18 ವರ್ಷ ತುಂಬಿದ ಹೆಣ್ಣು ಮಕ್ಕಳನ್ನು ಮತದಾರ ಪಟ್ಟಿಯಲ್ಲಿ ಹೆಸರು ಸೇರಿಸುವಂತೆ ಕ್ರಮವಹಿಸಿ. ಹೆಣ್ಣು ಮಕ್ಕಳು ಜಿಲ್ಲೆಯಲ್ಲಿ ಪಿಯುಸಿ ನಂತರ ವಿದ್ಯಾಭ್ಯಾಸ ತೊರೆದು ಮನೆಯಲ್ಲೇ ಉಳಿಯುವ ಪ್ರಕರಣ ಹೆಚ್ಚಿವೆ. ಇದರ ಬಗ್ಗೆಯು ಅರಿವು ಮೂಡಿಸಿ ಶಿಕ್ಷಣಕ್ಕೆ ಮತ್ತೆ ಕರೆತನ್ನಿ. ಜತೆಗೆ ಮತದಾರರ ಪಟ್ಟಿಯಲ್ಲಿ ಅವರ ಹೆಸರು ಇರುವಂತೆ ನೋಡಿಕೊಳ್ಳಿ. ಪಿಯುಸಿ ಕಾಲೇಜಿನಲ್ಲಿ ಒಬ್ಬ ಉಪನ್ಯಾಸಕರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಿ, ಅವರಿಗೆ ವಿಶೇಷ ತರಬೇತಿ ನೀಡಲಾಗುವುದು. ಅವರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡಿಸುವ ಬಗ್ಗೆ ಜಾಗೃತಿ ಮೂಡಿಸಲು ವಿದ್ಯಾರ್ಥಿಗಳನ್ನು ಪ್ರೇರೆಪಿಸಲಿದ್ದಾರೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಆನಂದ್, ಡಿಡಿಪಿಯು ಚಲುವಯ್ಯ ಇತರರಿದ್ದರು.