ಮಂಡ್ಯ: ಜನರಿಗೆ ಶುದ್ಧ ಕುಡಿಯುವ ನೀರನ್ನು ಪೂರೈಸಬೇಕು. ಈ ಬಗ್ಗೆ ನೀರನ್ನು ಪರೀಕ್ಷೆ ಮಾಡುತ್ತಿರಬೇಕು ಎಂದು ಪಿಡಿಒಗಳಿಗೆ ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸ್ಿ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ತಾಲೂಕು ಪಂಚಾಯಿತಿ ಇಒ ಹಾಗೂ ಗ್ರಾಮ ಪಂಚಾಯಿತಿ ಪಿಡಿಒಗಳೊಂದಿಗೆ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶದಲ್ಲಿನ ಕುಡಿಯುವ ನೀರಿನ ಮೂಲಗಳ ಗುಣಮಟ್ಟವನ್ನು ಸ್ಥಳೀಯ ಗ್ರಾಮ ಪಂಚಾಯಿತಿಗಳು ಆಗಿಂದಾಗ್ಗೆ ಪರೀಕ್ಷಿಸುತ್ತಿರಬೇಕು. ಅಂತೆಯೇ ಜನರಿಗೆ ಶುದ್ಧ ಮತ್ತು ಸುರಕ್ಷಿತ ನೀರನ್ನು ಸಾರ್ವಜನಿಕರಿಗೆ ಸರಬರಾಜು ಮಾಡಬೇಕು. ಇಲ್ಲದಿದ್ದರೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಕುಡಿಯುವ ನೀರಿನ ಮೂಲಗಳ ಸಮೀಪ ಸ್ವಚ್ಛತೆ ಕಾಪಾಡುವುದು. ಕೊಳಚೆ ನೀರು ನಿಲ್ಲದಂತೆ ನೋಡಿಕೊಳ್ಳುವುದು. ಒಡೆದ ಪೈಪ್‌ಗಳನ್ನು ಕೂಡಲೇ ಸರಿಪಡಿಸುವುದು ಮತ್ತು ನೀರಿಗೆ ಯಾವುದೇ ರೀತಿಯ ಕಲ್ಮಶಗಳು ಸೇರದಂತೆ ಅಗತ್ಯ ಕ್ರಮ ವಹಿಸಬೇಕು. ಶುದ್ಧ ಕುಡಿಯುವ ನೀರು ಸರಬರಾಜು ಮಾಡಲು ಮುಂಜಾಗ್ರತ ಕ್ರಮಗಳನ್ನು ವಹಿಸುವ ಸಂಬಂಧ ಜೂ.23 ರಿಂದ 26ರವರೆಗೆ ಜಿಲ್ಲಾದ್ಯಂತ ಅಭಿಯಾನ ಹಮ್ಮಿಕೊಂಡಿದ್ದು, ಸಮರೋಪಾದಿಯಲ್ಲಿ ಕೆಲಸ ನಿರ್ವಹಿಸುವಂತೆ ಅಧಿಕಾರಿಗಳಿಗೆ ಹೇಳಿದರು.
ಇನ್ನು ಅಭಿಯಾನದ ಭಾಗವಾಗಿ ಗ್ರಾಮಾಂತರ ಪ್ರದೇಶದ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಸ್ಥಾವರಗಳಾದ ಓವರ್ ಹೆಡ್ ಟ್ಯಾಂಕ್‌ಗಳು, ಕಿರು ನೀರು ಸರಬರಾಜು ಸ್ಥಾವರಗಳು, ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ವಚ್ಛಗೊಳಿಸಿ ಕ್ಲೋರಿನೇಷನ್ ಮಾಡಬೇಕು. ಅಂತೆಯೇ ಸ್ವಚ್ಛಗೊಳಿಸಿದ ನಂತರ ಮತ್ತೊಮ್ಮೆ ನೀರಿನ ಮಾದರಿಗಳನ್ನು ಸಂಗ್ರಹಿಸಿ ಕಡ್ಡಾಯವಾಗಿ ಪರೀಕ್ಷೆ ನಡೆಸಬೇಕು. ಒಂದು ವೇಳೆ ನೀರಿನ ಪರೀಕ್ಷೆಯಲ್ಲಿ ಕಲ್ಮಶಗಳು ಕಂಡು ಬಂದಲ್ಲಿ ಆ ನೀರಿನ ಮಾದರಿಗಳನ್ನು ಜಿಲ್ಲಾ ಮತ್ತು ತಾಲೂಕು ಹಂತದ ಪ್ರಯೋಗಾಲಯಗಳಿಗೆ ಕಳುಹಿಸುವಂತೆ ಸಲಹೆ ನೀಡಿದರು.
ಒಂದು ವೇಳೆ ಕಲುಷಿತ ನೀರು ಸೇವನೆಯಿಂದ ಸಾರ್ವಜನಿಕರಿಗೆ ಆರೋಗ್ಯದಲ್ಲಿ ವ್ಯತ್ಯಾಸಗಳಾಗುವುದು ಅಥವಾ ಜೀವ ಹಾನಿಯಂತಹ ಪ್ರಕರಣಗಳು ವರದಿಯಾದಲ್ಲಿ ಅಂತಹ ಗ್ರಾಮಕ್ಕೆ ಸಂಬಂಧಪಟ್ಟ ಎಲ್ಲ ಹಂತದ ಅಧಿಕಾರಿ/ಸಿಬ್ಬಂದಿಗಳನ್ನು ಹೊಣೆಗಾರರನ್ನಾಗಿಸಿ ಕಟ್ಟುನಿಟ್ಟಿನ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಎನ್.ಧನಂಜಯ, ಜಿಪಂ ಉಪ ಕಾರ್ಯದರ್ಶಿ(ಆಡಳಿತ) ಎಂ.ಬಾಬು, ಉಪ ಕಾರ್ಯದರ್ಶಿ(ಅಭಿವೃದ್ಧಿ) ಸಂಜೀವಪ್ಪ, ಯೋಜನಾ ನಿರ್ದೇಶಕ ಧನರಾಜ್ ಬೋರಾಳೆ, ಗ್ರಾಮೀಣ ಕುಡಿಯುವ ನೀರು ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ತಮ್ಮಣ್ಣ ಸೇರಿದಂತೆ ಎಲ್ಲ ತಾಪಂ ಇಒ, ಪಿಡಿಒ ಹಾಜರಿದ್ದರು.