ಮಂಗಳೂರು: ಕೇವಲ ಕಡತಗಳ ನಿರ್ವಹಣೆಯಲ್ಲಿ ಕಳೆದು ಹೋಗದೆ ಆತ್ಮ ತೃಪ್ತಿಯಿಂದ ಸೇವೆ ಸಲ್ಲಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಅಧಿಕಾರಿಗಳಿಗೆ ಕರೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ನೇತ್ರಾವತಿ ಸಭಾಂಗಣದಲ್ಲಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಗುರುವಾರ ವಿವಿಧ ವಿಷಯಗಳ ಕುರಿತು ಹಮ್ಮಿಕೊಳ್ಳಲಾಗಿದ್ದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.
ಸರ್ಕಾರದ ನಿರ್ದೇಶನದಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲ ಭೂಮಿ ಮತ್ತು ಕಟ್ಟಡಗಳ ಮ್ಯಾನ್ಯುಯೆಲ್ ಸಮೀಕ್ಷೆ ನಡೆಸಿ, ಅದನ್ನು ತೆರಿಗೆ ವ್ಯಾಪ್ತಿಗೆ ಒಳಪಡಿಸಿ, ಪಂಚತಂತ್ರಾಂಶದಲ್ಲಿ ಅಳವಡಿಸುವ ಪ್ರಕ್ರಿಯೆಗೆ ಚಾಲನೆ ನೀಡಬೇಕಿದೆ. ಅಧಿಕಾರಿಗಳು ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ವಿಶೇಷ ಗಮನ ಹರಿಸಬೇಕು. ಪ್ಲೇಸ್ಟೋರ್‌ನಿಂದ ಆರ್.ಡಬ್ಯ್ಲೂ.ಎಸ್ ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ಗ್ರಾಮದಲ್ಲಿರುವ ಬೋರ್‌ವೆಲ್, ಕೆರೆಗಳನ್ನು ಜಿಯೋ ಟ್ಯಾಗಿಂಗ್‌ಗೆ ಒಳಪಡಿಸಬೇಕು. ಪ್ರಧಾನ ಮಂತ್ರಿ ಜನಾರೋಗ್ಯ ಕಾರ್ಡ್ ಪಡೆಯುವ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಂಥ ಮಿತ್ರ ಯೋಜನೆಯ ಅನುಷ್ಠಾನ ಸಮಪರ್ಕವಾಗಬೇಕು. ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳನ್ನು ಗ್ರಾಮಗಳ ಗ್ರಂಥಾಲಯಗಳತ್ತ ಆಕರ್ಷಿಸುವ ಕೆಲಸ ಮಾಡಬೇಕು ಎಂದರು.
ಇದಕ್ಕೂ ಮುನ್ನ ಸ್ವಚ್ಚತಾ ಹೀ ಸೇವಾ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಆರೋಗ್ಯಪೂರ್ಣ ಪರಿಸರವನ್ನು ನಿರ್ಮಿಸುವುದು ಕೇವಲ ಪೌರಕಾರ್ಮಿಕರು ಮತ್ತು ಸರ್ಕಾರದ ಇಲಾಖೆಗಳ ಜವಾಬ್ದಾರಿಯಷ್ಟೇ ಅಲ್ಲ, ಈ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ನಾಗರೀಕರೂ ಪಾಲ್ಗೊಳ್ಳಬೇಕು ಎಂದರು.