ಜಿಲ್ಲೆ

ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಯೋಗ ಸಹಕಾರಿ

ಶಿವರಾಜ.ಎಂ

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ಆರೋಗ್ಯಯುತ ಜೀವನ ನಡೆಸಲು ಸಹಕಾರಿಯಾಗುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅಭಿಪ್ರಾಯಪಟ್ಟರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆಯುಷ್ ಇಲಾಖೆಯಿಂದ ದೇವನಹಳ್ಳಿ ಕ್ರೀಡಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಯೋಗ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು. ಅಂತಾರಾಷ್ಟ್ರೀಯ ಯೋಗ ದಿನಾಚರಣೆ ದೇಶದ ಸಾಂಸ್ಕೃತಿಕ ಸಂಪತ್ತಿನ ಸೂಚಕವಾಗಿದೆ ಎಂದರು. ಆಧುನಿಕ ಯುಗದಲ್ಲಿ ಯೋಗಾಭ್ಯಾಸ ಅವಶ್ಯಕವಾಗಿದೆ. ಯೋಗದಿಂದ ದೈಹಿಕವಾಗಿ ಆಗುವ ಲಾಭವನ್ನು ಪಾಲರಿಗೆ ತಿಳಿಸಿ ಅವರನ್ನೂ ಯೋಗಾಭ್ಯಾಸಕ್ಕೆ ಪ್ರೇರೇಪಿಸಿ ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.
ಪ್ರತಿಯೊಬ್ಬರೂ ಯೋಗಾಭ್ಯಾಸ ಮಾಡುವುದನ್ನು ದಿನನಿತ್ಯದ ಚಟುವಟಿಕೆಗಳಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಯೋಗ ತರಬೇತುದಾರರ ಮಾರ್ಗದರ್ಶನದಲ್ಲಿ 40 ನಿಮಿಷಗಳ ಕಾಲ ಯೋಗಾಭ್ಯಾಸ ನಡೆಯಿತು. ಸಂಘ-ಸಂಸ್ಥೆಗಳ ಪ್ರತಿನಿಧಿಗಳಿಗೆ ಹಾಗೂ ಶಾಲಾ-ಕಾಲೇಜುಗಳ ಮುಖ್ಯಸ್ಥರಿಗೆ ಪ್ರಶಂಶನಾ ಪತ್ರ ಹಾಗೂ ಆಯುಷ್ ಇಲಾಖೆಯ ಆರೋಗ್ಯ ಪುಸ್ತಕವನ್ನು ಸ್ಮರಣೀಕೆಯಾಗಿ ನೀಡಲಾಯಿತು.