ಕುಷ್ಟಗಿ:ತಾಲೂಕಿನ ವಿವಿಧ ಗ್ರಾಮಗಳಲ್ಲಿ ನಡೆಯುತ್ತಿರುವ ಅಂಗನವಾಡಿ ಕೇಂದ್ರಗಳ ಕಟ್ಟಡ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ ಎಂದು ಜಿಪಂ ಉಪ ಕಾರ್ಯದರ್ಶಿ ಮಲ್ಲಪ್ಪ ತೊದಲಬಾವಿ ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿರುವ ಕೇಂದ್ರಗಳಿಗೆ ನಿವೇಶನ ಒದಗಿಸಿ ಕೊಡುವ ಕಾರ್ಯವನ್ನು ಆಯಾ ಪಂಚಾಯಿತಿ ಅಧಿಕಾರಿಗಳು ಮಾಡಬೇಕು. ಬಿಜಕಲ್ ಗ್ರಾಮದಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡ ಬಗ್ಗೆ ಮಾಹಿತಿ ಬಂದಿದೆ. ಪಶು ಸಂಗೋಪನೆ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಪಶು ಚಿಕಿತ್ಸಾ ಕೇಂದ್ರಗಳಲ್ಲಿ ಖಾಲಿ ಇರುವ ವೈದ್ಯರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಸಂಬಂಧ ಮೇಲಧಿಕಾರಿಗಳಿಗೆ ಪತ್ರ ಬರೆಯುವಂತೆ ಪಶು ಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಆನಂದ್ ಗೆ ಸೂಚಿಸಿದರು. ಸಭೆಗೆ ಗೈರಾಗಿದ್ದ ಆಹಾರ ಇಲಾಖೆಯ ಶಿರಸ್ತೇದಾರ್‌ಗೆ ನೋಟೀಸ್ ಜಾರಿ ಮಾಡುವಂತೆ ತಾಪಂ ಇಒಗೆ ಸೂಚಿಸಿದರು.
ಅಕ್ಕಿ ಹುರಿದು ಪಲಾವ್ ಮಾಡಿ:ಶಾಲೆಗಳಲ್ಲಿ ಬಿಸಿಯೂಟಕ್ಕೆ ಹುರಿದ ಅಕ್ಕಿಯಿಂದ ಪಲಾವ್ ತಯಾರಿಸಿ. ಇದಕ್ಕೆ ಅಡುಗೆ ಸಿಬ್ಬಂದಿಗೆ ತರಬೇತಿ ನೀಡಿ. ತರಬೇತಿ ವೇಳೆ ಪಾಲ್ಗೊಳ್ಳುವುದಾಗಿ ಅಕ್ಷರ ದಾಸೋಹ ಅಧಿಕಾರಿ ಕೆ.ಶರಣಪ್ಪಗೆ ಜಿಪಂ ಉಪ ಕಾರ್ಯದರ್ಶಿ ಮಲ್ಲಪ್ಪ ತಿಳಿಸಿದರು. ತಾಪಂ ಇಒ ಶಿವಪ್ಪ ಸುಬೇದಾರ್, ತಾಲೂಕು ಆರೋಗ್ಯಾಧಿಕಾರಿ ಆನಂದ್ ಗೋಟೂರು, ನರೇಗಾ ಸಹಾಯಕ ನಿರ್ದೇಶಕ ನಿಂಗನಗೌಡ ಹಿರೇಹಾಳ ಇದ್ದರು. ತಾಲೂಕು ಮಟ್ಟದ ವಿವಿಧ ಅಧಿಕಾರಿಗಳು, ಗ್ರಾಪಂ ಪಿಡಿಒಗಳು ಪಾಲ್ಗೊಂಡಿದ್ದರು.