ಜಿಲ್ಲೆ

ಅಂಗನವಾಡಿ ಕೇಂದ್ರಗಳು ಸುಧಾರಣೆಯಾಗಲಿ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ಮಕ್ಕಳಿಗೆ ಗುಣಮಟ್ಟದ ಪೌಷ್ಟಿಕಾಂಶಯುಕ್ತ ಆಹಾರ ಜತೆಗೆ ಸರ್ವತೋಮುಖ ಬೆಳವಣಿಗೆಗೆ ಜಿಲ್ಲೆಯಲ್ಲಿನ ಅಂಗನವಾಡಿ ಕೇಂದ್ರಗಳು ಸುಧಾರಣೆಯಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್. ಹೊಸಮನೆ ಹೇಳಿದರು.
ನಗರದ ನೂತನ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಸಭಾಂಗಣದಲ್ಲಿ ಜಿಲ್ಲೆಯಲ್ಲಿನ ಅಂಗನವಾಡಿ ಶಾಲೆಗಳ ನೂನ್ಯತೆ ಕುರಿತಾಗಿ ಗುರುವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು. ಉಚ್ಛ ನ್ಯಾಯಾಲಯದ ಆದೇಶದನ್ವಯ ಜಿಲ್ಲೆಯ ಅಂಗನವಾಡಿ ಕೇಂದ್ರಗಳ ಸ್ಥಿತಿಗತಿಯ ಬಗ್ಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದೊಂದಿಗೆ ಚರ್ಚಿಸಿ ಅಂಗನವಾಡಿಗಳಿಗೆ ಭೇಟಿ ನೀಡಿ ಅಲ್ಲಿಯ ಸ್ಥಿತಿ ಗತಿಗಳ ಬಗ್ಗೆ ಮಾಹಿತಿ ಕಳುಹಿಸಿಕೊಡುವಂತೆ ಸೂಚಿಸಿದ್ದಾರೆ ಎಂದರು. ವಿಜಯನಗರದಲ್ಲಿ 1590 ಹಾಗೂ ಜಿಲ್ಲೆಯಲ್ಲಿ 1358 ಅಂಗನವಾಡಿ ಕೇಂದ್ರಗಳಿದ್ದು, ಪ್ರತಿ ತಾಲೂಕಿಗೆ ಸಂಬಂಧಿಸಿದಂತೆ ಕೆಲವು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ಅಂಗನವಾಡಿಗಳ ಮೂಲ ಸೌಕರ್ಯಗಳನ್ನು ಪರಿಶೀಲಿಸಿದಾಗ ಕೆಲವು ನ್ಯೂನತೆಗಳು ಕಂಡುಬಂದಿದ್ದು, ಸರಿಪಡಿಸುವಂತೆ ಸೂಚಿಸಲಾಗಿದೆ. ಸ್ವಚ್ಛತೆ ಬಗ್ಗೆ ಗಮನ ಹರಿಸಲು ಅಂಗನವಾಡಿ ಕಾರ್ಯಕರ್ತೆಯರಿಗೆ, ಸಹಾಯಕರಿಗೆ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ. ಒಂದೇ ಸೂರಿನಡಿ ಪುಟ್ಟ ಮಕ್ಕಳ ಕಲಿಕೆ, ಆಟ, ಶೌಚಾಲಯ, ಅಡುಗೆ ಮನೆ, ಊಟದ ಮನೆ ಸೇರಿದಂತೆ ಎಲ್ಲ ಸೌಲಭ್ಯ ಕಲ್ಪಿಸಬೇಕು. ಅಂಗನವಾಡಿಗಳು ಇನ್ನು ಸುಧಾರಣೆ ಆಗಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಬೇಕು. ವೈದ್ಯರು ಅಂಗನವಾಡಿಗಳಿಗೆ ನಿಯಮಿತವಾಗಿ ಭೇಟಿ ನೀಡಿ ತಿಂಗಳಿಗೊಮ್ಮೆ ಮಕ್ಕಳ ಆರೋಗ್ಯ ಪರೀಕ್ಷಿಸಬೇಕು. ಮಕ್ಕಳ ಹಾಜರಾತಿ ನಿರ್ವಹಿಸಬೇಕು. ಅಂಗನವಾಡಿ ಶಿಕ್ಷಕಿಯರು ಮತ್ತು ಕಾರ್ಯಕರ್ತೆಯರು ಲಭ್ಯವಿಲ್ಲದಿದ್ದಾಗ ಚಲನ-ವಲನ ಪುಸ್ತಕ ವಹಿಯಲ್ಲಿ ನಮೂದಿಸಿರಬೇಕು ಎಂದರು.