ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಮಂಗಳವಾರ ವಿಶ್ವ ಅಂಗವಿಕಲರ ದಿನಾಚರಣೆ ಕುರಿತು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಜರುಗಿತು. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸವಿತಾ ಕಾಳೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಯೋಜನಾ ಅಧಿಕಾರಿ ಅಮರೇಶ ಹಾವಿನ ಇದ್ದರು. 
ಜಿಲ್ಲೆ

ಅಂಗವಿಕಲರಿಗೆ ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆ ಆಯೋಜನೆ

ಬಾಗಲಕೋಟೆ: ಡಿಸೆಂಬರ ೩ ರಂದು ಆಚರಿಸಲಾಗುತ್ತಿರುವ ವಿಶ್ವ ಅಂಗವಿಕಲರ ದಿನಾಚರಣೆ ಅಂಗವಾಗಿ ವಿಅಂಗವಿಕಲರ ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದರು.
ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಮಂಗಳವಾರ ವಿಶ್ವ ಅಂಗವಿಕಲರ ದಿನಾಚರಣೆ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಡಿ.೩ ರಂದು ನವನಗರದ ಕಲಾಭವನದಲ್ಲಿ ವಿಶ್ವ ಅಂಗವಿಕಲರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಪುರುಷ ಅಂಗವಿಕಲರ ಕಬಡ್ಡಿ, ಮಹಿಳೆಯರಿಗೆ ಗುಂಡು ಎಸೆತ, ಮ್ಯೂಜಿಕಲ್ ಚೇರ್ ಬುದ್ದಿಮಾಂದ್ಯ ಮಕ್ಕಳಿಗೆ ಓಟ, ಕಿವುಡ ಮತ್ತು ಮೂಕ ಮಕ್ಕಳಿಗೆ ಚಕ್ರ ಹಾಗೂ ಗುಂಡು ಎಸೆತ, ಕುರುಡ ಮಕ್ಕಳಿಗೆ ಭಾವಗೀತೆ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಪ್ರತಿಯೊಂದು ಕ್ರೀಡೆಗಳನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನಡೆಸಲಾಗುತ್ತಿದೆ. ಕ್ರೀಡಾಕೂಟಗಳನ್ನು ಜರುಗಿಸಲು ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಲು ಕ್ರೀಡಾ ಇಲಾಖೆಗೆ ಸೂಚಿಸಿದರು. ಕ್ರೀಡಾ ಸ್ಪರ್ಧೆಗಳಲ್ಲಿ ದೈಹಿಕ ಶಿಕ್ಷಕರ ನಿಯೋಜನೆ, ಸಂಗೀತ ಕಾರ್ಯಕ್ರಮಕ್ಕೆ ನಿರ್ಣಾಯಕರ ನೇಮಿಸಿಕೊಳ್ಳಬೇಕು. ಈ ಬಾರಿ ಅಂಗವಿಕಲರ ದಿನಾಚರಣೆಯನ್ನು ವಿಜೃಂಬಣೆಯಿಂದ ಆಚರಿಸಲಾಗುತ್ತಿದ್ದು, ಅಂಗವಿಕಲರ ಕ್ಷೇತ್ರಕ್ಕೆ ಸಂಬಂಽಸಿದ ಸಂಘ ಸಂಸ್ಥೆಗಳು, ಅಂಗವಿಕಲರ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮ ಅಚ್ಚುಕಟ್ಟಾಗಿ ನಿರ್ವಹಿಸಲು ಅಂಗವಿಕಲರ ಅಧಿಕಾರಿಗಳಿಗೆ ಸೂಚಿಸುತ್ತಾ, ಶಿಷ್ಠಾಚಾರದ ಪ್ರಕಾರ ಆಮಂತ್ರಣ ಪತ್ರಿಕೆ ಮುದ್ರಣ, ವೇದಿಕೆ ಅಲಂಕಾರ ವ್ಯವಸ್ಥೆ ಮಾಡಬೇಕು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ ೧೨ ಜನರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸವಿತಾ ಕಾಳೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಯೋಜನಾ ಅಧಿಕಾರಿ ಅಮರೇಶ ಹಾವಿನ ಸೇರಿದಂತೆ ಆಯಾ ತಾಲೂಕಿನ ಎಂ.ಆರ್.ಡಬ್ಲೂ, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.