ಚಿತ್ರದುರ್ಗ: ಜಿಲ್ಲಾ ಕೇಂದ್ರದಲ್ಲಿ ಏ.14ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಅದ್ದೂರಿ ಹಾಗೂ ಅರ್ಥಪೂರ್ಣ ಆಚರಣೆಗೆ ಸಿದ್ದತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.
ಡಿಸಿ ಕಚೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಜಿಲ್ಲಾ ಕೇಂದ್ರದಲ್ಲಿರುವ ಎಲ್ಲ ಅಧಿಕಾರಿ, ಸಿಬ್ಬಂದಿ ಅಂದಿನ ಕಾರ್ಯಕ್ರಮದಲ್ಲಿ ತಪ್ಪದೇ ಪಾಲ್ಗೊಳ್ಳಬೇಕು ಎಂದು ಸೂಚಿಸಿದರು.
ಜಯಂತಿ ಅಂಗವಾಗಿ ಕನಕ ವೃತ್ತದಿಂದ ತರಾಸು ರಂಗಮಂದಿರದವರೆಗೆ ಸ್ತಬ್ಧಚಿತ್ರಗಳು ಹಾಗೂ ಕಲಾತಂಡಗಳ ಮೆರವಣಿಗೆ ಆಯೋಜಿಸಲಾಗುವುದು. ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಕಾರ್ಮಿಕ, ಕೃಷಿ, ತೋಟಗಾರಿಕೆ, ಶಿಕ್ಷಣ, ಅರಣ್ಯ, ಆರೋಗ್ಯ ಇಲಾಖೆ ಸೇರಿ 10ಕ್ಕೂ ಹೆಚ್ಚು ಇಲಾಖೆಗಳ ವಿವಿಧ ಯೋಜನೆಗಳಿಗೆ ಸಂಬಂಧಪಟ್ಟಂತೆ ಸ್ತಬ್ಧ ಚಿತ್ರಗಳು ಮೆರವಣಿಗೆಯಲ್ಲಿರಬೇಕು. ಎಲ್ಲ ತಾಲೂಕುಗಳಿಂದಲೂ ವೈವಿಧ್ಯಮಯ ಕಲಾ ತಂಡಗಳನ್ನು ಮೆರವಣಿಗೆಗೆ ಕರೆತರಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗೆ ನಿರ್ದೇಶಿಸಿದರು.
ಪ್ರಮುಖ ರಸ್ತೆ, ವೃತ್ತಗಳಿಗೆ ಅಲಂಕಾರ: ನಗರದ ಪ್ರಮುಖ ರಸ್ತೆಗಳು ಹಾಗೂ ವೃತ್ತಗಳಿಗೆ ನಗರ ಸಭೆಯಿಂದ ಅಲಂಕಾರ ಮಾಡಬೇಕು. ಅಂಬೇಡ್ಕರ್ ಭಾವಚಿತ್ರ ಮೆರವಣಿಗೆಯ ಟ್ರಾೃಕ್ಟರ್ ಅನ್ನು ಅಲಂಕರಿಸಬೇಕು. ತರಾಸು ರಂಗಮಂದಿರದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಎಸಿ ನೇತೃತ್ವದ ಸಮಿತಿ ರಚಿಸಿ ಪ್ರತಿ ತಾಲೂಕಿನಿಂದ ಪರಿಶಿಷ್ಟ ಜಾತಿ ಹಾಗೂ ಪಂಗಡದ ಜನರ ಅಭ್ಯುದ್ಯಯಕ್ಕೆ ಶ್ರಮಿಸಿದ ಎರಡು ಸಂಘ, ಸಂಸ್ಥೆಗಳನ್ನು ಗುರುತಿಸಿ ಸನ್ಮಾನಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಎಸ್ಸೆಸ್ಸೆಎಲ್ಸಿಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸ ಬೇಕು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳನ್ನು ಜಯಂತಿಯಲ್ಲಿ ಪಾಲ್ಗೊಳ್ಳಲು ಆಹ್ವಾನಿಸಬೇಕು ಎಂದರು.
ಜಿಪಂ ಸಿಇಒ ಎಸ್.ಜೆ. ಸೋಮಶೇಖರ್, ಎಸ್‌ಪಿ ರಂಜಿತ್‌ಕುಮಾರ್ ಬಂಡಾರು, ಎಡಿಸಿ ಬಿ.ಟಿ. ಕುಮಾರಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ನಗರಸಭೆ ಆಯುಕ್ತೆ ಎಂ. ರೇಣುಕಾ ಮತ್ತಿತರ ಅಧಿಕಾರಿಗಳಿದ್ದರು.