ಹುಬ್ಬಳ್ಳಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಡವರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾರೆಂಬ ಕಾರಣಕ್ಕೆ ಕೇಂದ್ರದ ಬಿಜೆಪಿ ಸರ್ಕಾರ ರಾಜ್ಯಕ್ಕೆ ಅಕ್ಕಿ ಕೊಡುವುದಿಲ್ಲವೆಂದು ಹೇಳಿದೆ. ಹಣ ಕೊಡುತ್ತೇವೆಂದರೂ ಅಕ್ಕಿ ಕೊಡದೇ ರಾಜಕೀಯ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಟೀಕಿಸಿದರು.
ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ಕಿ ಬಿಡುಗಡೆ ಮಾಡುವಂತೆ ದೆಹಲಿಗೆ ತೆರಳಿದ 7 ಬಾರಿ ಸಂಸದರಾಗಿದ್ದ ಹಾಲಿ ಸಚಿವ ಕೆ.ಎಚ್. ಮುನಿಯಪ್ಪ ಅವರನ್ನು ಭೇಟಿ ಮಾಡಲು ಕೇಂದ್ರ ಸಚಿವ ಪಿಯೂಶ್ ಗೋಯಲ್ 3 ದಿನ ಸತಾಯಿಸಿದರು. ಅಕ್ಕಿ ದಾಸ್ತಾನು ಇದ್ದರೂ ಕೊಡುವುದಿಲ್ಲ ಎಂದು ಹೇಳಿ ಕಳುಹಿಸಿದ್ದಾರೆ. ಬಡವರಿಗೆ ಅಕ್ಕಿ ಕೊಟ್ಟುಬಿಟ್ಟರೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಅನುಕೂಲವಾಗಲಿದೆ ಎಂದು ಕೇಂದ್ರದ ಬಿಜೆಪಿ ಸರ್ಕಾರ ಭಾವಿಸಿದೆ ಎಂದು ಹೇಳಿದರು.
ಚುನಾವಣೆ ಪೂರ್ವ ಕೊಟ್ಟ ಮಾತಿನಂತೆ ನಾವು 5 ಗ್ಯಾರಂಟಿ ಭರವಸೆಗಳನ್ನು ಈಡೇರಿಸುತ್ತೇವೆ. ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬರ ಬ್ಯಾಂಕ್ ಖಾತೆ 15 ಲಕ್ಷ ರೂ. ಹಾಕುತ್ತೇವೆ, ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದ್ವಿಗುಣ ಈ ಭರವಸೆಗಳನ್ನು ಬಿಜೆಪಿಯವರು 9 ವರ್ಷಗಳಿಂದ ಈಡೇರಿಸಿಲ್ಲ. ಈಗ ನಮ್ಮ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಪೆಟ್ರೋಲ್-ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆ ಮಾಡಿದವರು ವಿದ್ಯುತ್ ದರ ಏರಿಕೆ ವಿರೋಧಿಸಿ ಹೋರಾಟ ಮಾಡುತ್ತಿರುವುದು ಹಾಸ್ಯಾಸ್ಪದ ಎಂದು ಆರೋಪಿಸಿದರು.